ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆಯ ಶೇ 50 ಹಾಸಿಗೆ ಮೀಸಲು

ಕೋವಿಡ್ ನಿಯಂತ್ರಣ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ
Last Updated 20 ಏಪ್ರಿಲ್ 2021, 3:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಖಾಸಗಿ ಆಸ್ಪತ್ರೆಗಳಲ್ಲಿ ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗೆ ಮೀಸಲಿಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಅಗತ್ಯ ವೈದ್ಯಕೀಯ ಉಪಕರಣಗಳನ್ನು ಖಾಸಗಿ ಆಸ್ಪತ್ರೆಗಳು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು. ಕೋವಿಡ್ ಪ್ರಕರಣಗಳು ಹೆಚ್ಚಾದ ಸಂದರ್ಭದಲ್ಲಿ ಹೆಲ್ತ್ ಕೇರ್ ಸೆಂಟರ್‌ ಪ್ರಾರಂಭಿಸುವ ಅಗತ್ಯ ಬರಬಹುದು. ಹೀಗಾಗಿ, ಬಿಸಿಎಂ, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳನ್ನು ಗುರುತಿಸಿ’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಮದುವೆಗೆ ಪಾಸ್‌ ಕಡ್ಡಾಯ: ‘ಮದುವೆಗೆ ಕಲ್ಯಾಣ ಮಂಟಪದಲ್ಲಿ 100, ಹೊರಾಂಗಣ ಆವರಣದಲ್ಲಿ 200 ಜನರಿಗೆ ಅವಕಾಶವಿದೆ. ತಹಶೀಲ್ದಾರ್‌ ಕಚೇರಿಯಲ್ಲಿ ಪಾಸ್ ಪಡೆಯಬೇಕು. ಕಲ್ಯಾಣ ಮಂಟಪದ ಮಾಲೀಕರು ಕಡ್ಡಾಯವಾಗಿ ನಿಯಮಾವಳಿ ಪಾಲಿಸಬೇಕು. ನಿಯಮ ಪಾಲನೆ ಮಾಡದಿದ್ದರೆ ಕಲ್ಯಾಣ ಮಂಟಪದ ಪರವಾನಗಿ ರದ್ದು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಮೇ 31ರವರೆಗೆ ಯಾವುದೇ ಜಾತ್ರೆಗೆ ಅವಕಾಶ ಕಲ್ಪಿಸಬಾರದು. ಜಾತ್ರೆಗಳ ನಿಷೇಧದ ಕುರಿತು ಸಂಬಂಧಪಟ್ಟವರಿಗೆ ಒಂದು ತಿಂಗಳ ಮುಂಚಿತವಾಗಿಯೇ ಮಾಹಿತಿ ನೀಡಬೇಕು. ಮುಷ್ಕರ, ಧರಣಿ, ಪ್ರತಿಭಟನೆಗೂ ಅವಕಾಶ ನೀಡಬಾರದು’ ಎಂದು ಸೂಚನೆ ನೀಡಿದರು.

ಸಂಪರ್ಕಿತರನ್ನು ಪತ್ತೆ ಮಾಡಿ: ‘ಕೊರೊನಾ ಸೋಂಕಿತರಿಗೆ ಸಂಬಂಧಿಸಿದಂತೆ 10 ಪ್ರಾಥಮಿಕ ಸಂಪರ್ಕಿತರು ಹಾಗೂ 20 ದ್ವಿತೀಯ ಸಂಪರ್ಕಿತರನ್ನು ಪತ್ತೆ ಮಾಡಬೇಕು. ಒಂದು ಕೋವಿಡ್ ಪ್ರಕರಣಕ್ಕೆ ಕನಿಷ್ಠ 30 ಸಂಪರ್ಕಿತರನ್ನು ಕಡ್ಡಾಯವಾಗಿ ಗುರುತಿಸಿ ತಪಾಸಣೆಗೆ ಒಳಪಡಿಸಬೇಕು’ ಎಂದು ತಾಕೀತು ಮಾಡಿದರು.

‘ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವ ವಾಹನಗಳಲ್ಲಿ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು. ಬೆಂಗಳೂರಿನಿಂದ ಹಿರಿಯೂರಿಗೆ ಬರುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಿಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಜೆ.ಬಸವರಾಜಪ್ಪ, ಡಾ.ಕುಮಾರಸ್ವಾಮಿ ಇದ್ದರು.

ಚೆಕ್‌ಪೋಸ್ಟ್‌ ಆರಂಭ ಸಾಧ್ಯತೆ

ಹೊರರಾಜ್ಯ, ಹೊರದೇಶದಿಂದ ಬಂದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ. ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. 10 ದಿನ ಸ್ವಯಂಪ್ರೇರಿತರಾಗಿ ಕ್ವಾರಂಟೈನ್ ಆಗಬೇಕು. ಕುಂಭಮೇಳದಿಂದ ಮರಳಿದವರು ಪ್ರತ್ಯೇಕವಾಗಿ ವಾಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ‘ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವವರನ್ನು ತಪಾಸಣೆಗೆ ಒಳಪಡಿಸಬೇಕು. ಹಿರಿಯೂರು, ಮೊಳಕಾಲ್ಮುರು, ರಾಂಪುರ, ರಾಯದುರ್ಗ ಸೇರಿ ಜಿಲ್ಲೆಯ ವಿವಿಧೆಡೆಗಳಲ್ಲಿ ತಪಾಸಣೆ ಮಾಡಬೇಕು’ ಎಂದರು.

ತರಕಾರಿ ಮಾರುಕಟ್ಟೆ ಸ್ಥಳಾಂತರ

ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ತರಕಾರಿ ಮಾರುಕಟ್ಟೆಯ ಸ್ಥಳಾಂತರ ಮಾಡಲು ಸಭೆ ಅವಕಾಶ ಕಲ್ಪಿಸಿತು.

‘ವಿವಿಧ ಮೈದಾನಗಳಲ್ಲಿ ಅಂತರ ಕಾಪಾಡಿಕೊಂಡು ತರಕಾರಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ತಾಲ್ಲೂಕು ಹಂತದಲ್ಲಿಯೂ ಇದೇ ವ್ಯವಸ್ಥೆ ಜಾರಿಗೆ ಬರಬೇಕು. ತಹಶೀಲ್ದಾರ್‌ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯಿತಿ ಪಿಡಿಒ ಕ್ರಮ ಕೈಗೊಳ್ಳಬೇಕು. ಸಂತೆಗಳಲ್ಲಿ ಜನರು ಗುಂಪುಗೂಡದಂತೆ ನೋಡಿಕೊಳ್ಳಬೇಕು’ ಎಂದು ಕವಿತಾ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಮದುವೆಗಳಿಗೂ ನಿಯಮ ರೂಪಿಸಲಾಗಿದೆ. ಮನೆ, ದೇವಸ್ಥಾನದ ಸಮಾರಂಭಕ್ಕೆ ಮಿತಿ ಇದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಗಿದೆ.

ಡಾ.ಕೆ.ನಂದಿನಿದೇವಿ, ಸಿಇಒ, ಜಿಲ್ಲಾ ಪಂಚಾಯಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT