ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಲಭಿಸಿದರೆ ವಾರಿಯರ್‌ಗಳಿಗೆ ಆದ್ಯತೆ : ಸಚಿವ ಬಿ.ಶ್ರೀರಾಮುಲು

ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಬಿ.ಶ್ರೀರಾಮುಲು ಹೇಳಿಕೆ
Last Updated 2 ನವೆಂಬರ್ 2020, 2:39 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಮುಂದಿನ ವರ್ಷಾರಂಭದೊಳಗೆ ದೇಶದಲ್ಲಿ ಕೋವಿಡ್‌ ಲಸಿಕೆ ಲಭಿಸಿದರೆ, ರಾಜ್ಯದ ಕೊರೊನಾ ವಾರಿಯರ್‌ಗಳಿಗೆ ಲಸಿಕೆ ನೀಡುವುದೇ ಸರ್ಕಾರದ ಮೊದಲ ಆದ್ಯತೆಯಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡಿದ ಸಚಿವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

‘ರಾಜ್ಯದ ಫ್ರಂಟ್‌ಲೈನ್ ವಾರಿಯರ್‌ಗಳಾದ ವೈದ್ಯರು, ಶುಶ್ರೂಷಕಿಯರು, ಪೊಲೀಸರು, ಆಶಾ ಕಾರ್ಯಕರ್ತೆಯರಿಗೆ ಮೊದಲು ಲಸಿಕೆ ನೀಡುವುದು ನ್ಯಾಯಯುತ. ಸಾರ್ವಜನಿಕರಿಗೂ ಲಸಿಕೆ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸುವ ಮೂಲಕ ಲಸಿಕೆ ನೀಡುವ ಕಾರ್ಯ ಕೈಗೊಳ್ಳಲಾಗುವುದು’ ಎಂದರು.

‘ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಿಂದ ತಾಂತ್ರಿಕ ಶಿಕ್ಷಣದವರೆಗೂ ಕನ್ನಡವೇ ಮಾಧ್ಯಮವಾಗುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂಬ ಮಹತ್ತರ ಗುರಿಯನ್ನು ಸರ್ಕಾರ ಹೊಂದಿದೆ. ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲು ಬದ್ಧರಾಗಿದ್ದೇವೆ’ ಎಂದು ಭರವಸೆ ನೀಡಿದರು.

‘ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರಧಾನಿ ಮೋದಿ ಅವರು ಶುಭ ಕೋರಿದ್ದಾರೆ. ರಾಜ್ಯ ಪ್ರಗತಿ ವಿಚಾರದಲ್ಲಿ ಮುಂಚೂಣಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಬಿಜೆಪಿ ಸಫಲವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವನ್ನಾಗಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ₹3 ಸಾವಿರ ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಆ ಭಾಗದ ಜನರ ಬೇಡಿಕೆಗೆ ಸರ್ಕಾರ ಖಂಡಿತ ಸ್ಪಂದಿಸಲಿದೆ. ಕರ್ನಾಟಕ ಏಕೀಕರಣದ ರೂವಾರಿ, ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪ ಅವರ ಶ್ರಮ ವ್ಯರ್ಥವಾಗಲು ನಾವು ಅವಕಾಶ ನೀಡುವುದಿಲ್ಲ. ರಾಜ್ಯ ವಿಭಜನೆಯಾಗಲು ಬಿಡುವುದಿಲ್ಲ’ ಎಂದರು.

‘ಕನ್ನಡ ನಾಡು, ನುಡಿಗಾಗಿ ಅನೇಕ ಮಹನೀಯರು ಶ್ರಮಿಸಿದ್ದಾರೆ. ಅವರನ್ನು ಸ್ಮರಿಸುವುದಷ್ಟೇ ಅಲ್ಲದೆ, ತತ್ವಾದರ್ಶ ಅಳವಡಿಸಿಕೊಂಡು ಕನ್ನಡಿಗರ ಏಳ್ಗೆಗಾಗಿ ಕನ್ನಡಿಗರೇ ಶ್ರಮಿಸಬೇಕಿದೆ. ದೇಶದಲ್ಲೇ ಸುಂದರ ರಾಜ್ಯವನ್ನು ನಿರ್ಮಿಸಬೇಕಿದೆ’ ಎಂದು ಸಲಹೆ ನೀಡಿದರು.

ಕೊರೊನಾ ಕುರಿತು ಜಾಗೃತಿ: ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಕಿರುನಾಟಕದ ಮೂಲಕ ಜಾಗೃತಿ ಮೂಡಿಸಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಟಿ.ಯೋಗೇಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT