ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಿಗೆ ಶಿಕ್ಷಣ ನೀಡಿ, ಶಿಕ್ಷೆಯಲ್ಲ: ಬಿ.ಕೆ.ಗಿರೀಶ್‌

ಹಿರಿಯ ಸಿವಿಲ್‌ ನ್ಯಾಯಾಧೀಶ ಬಿ.ಕೆ. ಗಿರೀಶ್‌ ಸಲಹೆ
Last Updated 13 ಜೂನ್ 2022, 8:35 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಕ್ಕಳಿಗೆ ಶಿಕ್ಷಣ ನೀಡಬೇಕೆ ಹೊರತು ಶಿಕ್ಷೆಯನ್ನಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ಗಿರೀಶ್ ಸಲಹೆ ನೀಡಿದರು.

ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ವಕೀಲರ ಸಂಘ, ಕಾರ್ಮಿಕ ಇಲಾಖೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿ ಮಗುವಿಗೂ ಶಿಕ್ಷಣ ಸಿಗಬೇಕು ಎಂಬುದು ಸಂವಿಧಾನದ ಆಶಯ. ಮಕ್ಕಳನ್ನು ದುಡಿಮೆಗೆ ನೂಕಬಾರದು. ಮೊಳಕಾಲ್ಮುರು ತಾಲ್ಲೂಕಿನ ಇಟ್ಟಿಗೆ ಬಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ 9 ಮಕ್ಕಳನ್ನು ಕಾನೂನು ಸೇವಾ ಪ್ರಾಧಿಕಾರ ಈಚೆಗೆ ರಕ್ಷಣೆ ಮಾಡಿದೆ. ಅಪಾಯಕಾರಿ ಸ್ಥಳದಲ್ಲಿ ಮಕ್ಕಳನ್ನು ಕಾರ್ಮಿಕರಾಗಿ ದುಡಿಸಿಕೊಳ್ಳಬಾರದು’ ಎಂದು ಎಚ್ಚರಿಕೆ ನೀಡಿದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಪ್ರಭಾಕರ್, ‘ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ– 1986ಕ್ಕೆ ತಿದ್ದುಪಡಿ ತರಲಾಗಿದೆ. ಇದರ ಪ್ರಕಾರ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತಿಲ್ಲ. ಈ ಕಾನೂನು ಉಲ್ಲಂಘನೆ ಮಾಡಿದರೆ ಆರು ತಿಂಗಳಿಂದ 2 ವರ್ಷದವರೆಗೂ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು’ ಎಂದರು.

‘ದೇಶದ ಜನಸಂಖ್ಯೆಯಲ್ಲಿ ಮಕ್ಕಳ ಪಾಲು ಶೇ 40. ಸದೃಢ ದೇಶ ನಿರ್ಮಾಣ ಮಾಡಲು ಮಾನವಸಂಪನ್ಮೂಲ ಮುಖ್ಯ. ಮಕ್ಕಳಿಗೆ ರಕ್ಷಣೆ, ಪೌಷ್ಟಿಕ ಆಹಾರ, ಶಿಕ್ಷಣ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ಆವರಣದಿಂದ ತರಾಸು ರಂಗಮಂದಿರದವರೆಗೆ ಜಾಗೃತಿ ಜಾಥಾ ನಡೆಸಲಾಯಿತು. ದ್ವಿಚಕ್ರ ವಾಹನ ರ‍್ಯಾಲಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಚಾಲನೆ ನೀಡಿದರು.

ಕಾರ್ಮಿಕ ಅಧಿಕಾರಿ ಇಬ್ರಾಹಿಂ, ಡಿವೈಎಸ್‌ಪಿ ಪಾಂಡುರಂಗ, ವಕೀಲರ ಸಂಘದ ಉಪಾಧ್ಯಕ್ಷ ಜಿ.ಸಿ. ದಯಾನಂದ, ಪ್ರಧಾನಕಾರ್ಯದರ್ಶಿ ಎಂ. ಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಎಸ್. ಬಣಕಾರ, ಕಾರ್ಮಿಕ ನಿರೀಕ್ಷಕ ಡಿ. ರಾಜಣ್ಣ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಪಿ. ಸತೀಶ್‍ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT