ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಕವಾಡಿಗರಹಟ್ಟಿ ದುರಂತ ಮರುಕಳಿಸದಿರಲಿ ’

Published 3 ಜುಲೈ 2024, 15:59 IST
Last Updated 3 ಜುಲೈ 2024, 15:59 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಹಾಳಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೆ ಸರಿಪಡಿಸಬೇಕು. ಈ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ಮೊದಲ ಆದ್ಯತೆಯಾಗಿದೆ. ನೀರಿನ ವಿತರಣೆ ವ್ಯವಸ್ಥೆಯಲ್ಲಿ ಸಮಸ್ಯೆಗಳಿದ್ದರೆ ಬಗೆಹರಿಸಿ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು’ ಎಂದು ಹೇಳಿದರು.

‘ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎಷ್ಟು ನೀರಿನ ಮಾದರಿ ಪರೀಕ್ಷೆ ಕೈಗೊಳ್ಳಲಾಗಿದೆ ಎಂಬ ವರದಿ ಸಲ್ಲಿಸಬೇಕು. ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಬೇಕು. ಯಾವುದೇ ಕಾರಣಕ್ಕೂ ಕವಾಡಿಗರಹಟ್ಟಿ ದುರಂತ ಮರುಕಳಿಸದಂತೆ ಎಚ್ಚರವಹಿಸಬೇಕು’ ಎಂದು ಸೂಚಿಸಿದರು.

‘ಗಂಗಾ ಕಲ್ಯಾಣ ಯೋಜನೆಯಡಿಯ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮವಹಿಸಬೇಕು. ಜಲಜೀವನ್‌ ಮಿಷನ್ ಯೋಜನೆಯಡಿ ಎಲ್ಲ ಶಾಲೆ, ಅಂಗನವಾಡಿ ಹಾಗೂ ವಸತಿ ನಿಲಯಗಳಿಗೆ ಕುಡಿಯುವ ನೀರು ಸಂಪರ್ಕ ಕಲ್ಪಿಸಬೇಕು. ಜಿಲ್ಲೆಯಲ್ಲಿ 18 ಲಕ್ಷ ಜನಸಂಖ್ಯೆ ಇದ್ದು, ಸಿಎಸ್‌ಸಿ ಹಾಗೂ ನಾಡಕಚೇರಿಗಳಲ್ಲಿಯೂ ಎಬಿಎಆರ್‌ಕೆ ಕಾರ್ಡ್‌ ನೋಂದಣಿಗೆ ಕ್ರಮವಹಿಸಬೇಕು’ ಎಂದು ತಾಕೀತು ಮಾಡಿದರು.

‘ಎಬಿಎಆರ್‌ಕೆ ಯೋಜನೆಯಡಿ ಜಿಲ್ಲೆಯಲ್ಲಿ 14.97 ಲಕ್ಷ ಗುರಿ ನಿಗಧಿಪಡಿಸಲಾಗಿದ್ದು, ಈವರೆಗೂ 5.94 ಲಕ್ಷ ನೋಂದಣಿಯಾಗಿದ್ದು, ಶೇ 40 ರಷ್ಟು ಪ್ರಗತಿ ಸಾಧಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಗೆ ಕ್ರಮವಹಿಸಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್‌ ಸಭೆಗೆ ಮಾಹಿತಿ ನೀಡಿದರು.

‘ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ಇ-ಕೆವೈಸಿ ಸೇರಿದಂತೆ ಇನ್ನಿತರೆ ಕೆಲವು ತಾಂತ್ರಿಕ ದೋಷಗಳನ್ನು ಶೀಘ್ರದಲ್ಲಿ ಬಗೆಹರಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಜೆ.ಸೋಮಶೇಖರ್‌, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT