ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: 27 ಜಾತಿ ದೌರ್ಜನ್ಯ ಪ್ರಕರಣ

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
Last Updated 16 ಜುಲೈ 2021, 14:43 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ನಡೆದ 27 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಪರಿಶಿಷ್ಟ ಜಾತಿಯ ಜನರ ಮೇಲೆಯೇ ಹೆಚ್ಚು ದಬ್ಬಾಳಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.

‘ಪರಿಶಿಷ್ಟ ಜಾತಿಯ ಮೇಲೆ ನಡೆದ 23 ಹಾಗೂ ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದ4 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 18 ಜಾತಿನಿಂದನೆ, ಮೂರು ಕೊಲೆ, ಮೂರು ಅತ್ಯಾಚಾರ ಪ್ರಕರಣಗಳಿವೆ. ಕೊಲೆ ಪ್ರಕರಣದಲ್ಲಿ ₹ 12.37ಲಕ್ಷ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ₹ 4 ಪರಿಹಾರ ಧನ ನೀಡಲಾಗಿದೆ. ಜಾತಿ ನಿಂದನೆ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ₹ 14.25 ಲಕ್ಷ ಪರಿಹಾರ ಧನ ಮಂಜೂರು ಮಾಡಲಾಗಿದೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಮಾತನಾಡಿ, ‘ಕೋವಿಡ್ ನೆಪ ಹೇಳದೆ ದೌರ್ಜನ್ಯ ಪ್ರಕರಣದ ಸಂತ್ರಸ್ಥರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪುನರ್ವಸತಿ ಕಲ್ಪಿಸಬೇಕು. ಸರ್ಕಾರದ ಸೌಲಭ್ಯ ತಲುಪಿಸುವಲ್ಲಿ ಯಾವುದೇ ವಿಳಂಬ ಆಗಬಾರದು’ ಎಂದು ತಾಕೀತು ಮಾಡಿದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸಿದ್ದಮ್ಮ ಹಾಗೂ ಅರುಣ್ ಕುಮಾರ್ ಮಾತನಾಡಿ, ‘ಭರಮಸಾಗರ ಹೋಬಳಿಯ ಇಸಾಮುದ್ರ ಲಂಬಾಣಿಹಟ್ಟಿಯಲ್ಲಿ ವಿಷಾಹಾರ ಸೇವನೆಯಿಂದ ಮೃತಪಟ್ಟವರಿಗೆ ತಲಾ ₹ 5ಲಕ್ಷ ಪರಿಹಾರ ಮಂಜೂರು ಮಾಡಬೇಕು ಎಂದು ಸಭೆಯ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗಿದೆ. ಪ್ರಯೋಗಾಲಯ ಹಾಗೂ ಪೊಲೀಸ್ ವರದಿ ಕೈಸೇರಿದ ಬಳಿಕ ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರಾತಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು’ ಎಂದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಭಕ್ತಪ್ರಹ್ಲಾದ್, ರಾಜಣ್ಣ, ಪೋಲಯ್ಯ, ಗೌರಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT