ಭಾನುವಾರ, ಮೇ 22, 2022
24 °C
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ – ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ

ನೀರಿನ ಬವಣೆಯ ಗ್ರಾಮಗಳ ಪಟ್ಟಿ ತಯಾರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಹಳ್ಳಿಗಳ ಪಟ್ಟಿಯನ್ನು ಕೂಡಲೇ ಸಿದ್ಧಪಡಿಸಬೇಕು. ಜತೆಗೆ ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.

‘ಏಪ್ರಿಲ್ ಅಂತ್ಯದವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಬಳಿಕ ಸಮಸ್ಯೆ ಉಲ್ಭಣಿಸುವ ಸಾಧ್ಯತೆಗಳಿವೆ. ಸ್ಥಳೀಯ ಜನಪ್ರತಿನಿಧಿಗಳೊಂದಿಗ ಸಮನ್ವಯ ಸಾಧಿಸಿ, ಖಾಸಗಿ ಕೊಳವೆಬಾವಿ ಗುರುತಿಸಬೇಕು’ ಎಂದರು.

‘ಕೊಳವೆಬಾವಿ ಮಾಲೀಕರಿಗೆ ಪರಿಸ್ಥಿತಿ ವಿವರಿಸಿ ಸಂಕಷ್ಟದ ಸಮಯದಲ್ಲಿ ಕೊಳವೆಬಾವಿಗಳನ್ನು ಸುಪರ್ಧಿಗೆ ಪಡೆದುಕೊಂಡು ಸಮರ್ಪಕವಾಗಿ ನೀರು ಸರಬರಾಜಿಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ತಾಕೀತು ಮಾಡಿದರು.

‘ನೀರಿನ ಸಮಸ್ಯೆ ಉಂಟಾಗದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಭೆ ನಡೆಸಬೇಕು. ನಂತರ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸಭೆ ನಡೆಸಿ, ಸಂಪೂರ್ಣ ಯೋಜನೆ ತಯಾರಿಸಬೇಕು. ಟಾಸ್ಕ್ ಪೋರ್ಸ್ ಸಮಿತಿಗೆ ಅಗತ್ಯ ಅನುದಾನ ನೀಡಲಾಗುವುದು’ ಎಂದು ಹೇಳಿದರು.

‘ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕಟ್ಟಿರುವ ತೊಟ್ಟಿಗಳಲ್ಲಿ ನೀರು ತುಂಬಿಸಬೇಕು. ಅನಾವಶ್ಯಕ ನೀರು ಪೋಲು ಆಗುವುದು ತಡೆಯಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ನೀಡಬೇಕು’ ಎಂದರು.

ಕೆರೆ ಒತ್ತುವರಿ ತೆರವಿಗೆ ಕ್ರಮ

ಕೆರೆ ಒತ್ತುವರಿ ತೆರವಿಗೆ ಸಂಬಂಧಪಟ್ಟ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.

‘ಕೆರೆ ಒತ್ತುವರಿಗೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯಗಳಲ್ಲಿವೆ. ಪ್ರಗತಿ ತೋರಿಸದ ಅಧಿಕಾರಿಗಳನ್ನು ನೇರವಾಗಿ ಹೊಣೆ ಮಾಡಲಾಗುವುದು. ಕೆರೆಗಳಿಗೆ ಕೊಳಚೆ ನೀರು ಸೇರಿದಂತೆ ನೋಡಿಕೊಳ್ಳಬೇಕು. ಕೆರೆ ಸುತ್ತಲಿನ ಹಸಿರು ವಲಯದಲ್ಲಿ ಗಿಡಮರಗಳನ್ನು ನೆಡಲು ಕ್ರಮಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್‌. ಚಂದ್ರಯ್ಯ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು