ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷರತ್ತು ಉಲ್ಲಂಘಿಸಿದರೆ ಕಾನೂನು ಕ್ರಮ

ಸಾರ್ವಜನಿಕ ಗಣೇಶೋತ್ಸವ: ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್ಚರಿಕೆ
Last Updated 7 ಸೆಪ್ಟೆಂಬರ್ 2021, 13:33 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರೂಪಿಸಿದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಎಚ್ಚರಿಕೆ ನೀಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮನೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಕೊರೊನಾ ಸೋಂಕಿನ ಕಾರಣಕ್ಕೆ ಸರಳವಾಗಿ ಆಚರಿಸುವುದು ಒಳಿತು. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಈಗಾಗಲೇ ಸೋಂಕು ಹೆಚ್ಚಳವಾಗುತ್ತಿದೆ’ ಎಂದು ಹೇಳಿದರು.

‘ಮನೆಯಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶಮೂರ್ತಿ ಎರಡು ಅಡಿ ಹಾಗೂ ಸಾರ್ವಜನಿಕ ಗಣೇಶಮೂರ್ತಿ ನಾಲ್ಕು ಅಡಿ ಮೀರುವಂತಿಲ್ಲ. ನಗರ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಐದು ದಿನದಲ್ಲಿ ವಿಸರ್ಜನೆ ಮಾಡಬೇಕು. ಪೆಂಡಾಲ್‌ ಬಳಿ 20ಕ್ಕೂ ಹೆಚ್ಚು ಜನರು ಏಕಕಾಲಕ್ಕೆ ಸೇರಿಸುವಂತಿಲ್ಲ. ಆಯೋಜಕರು ಕೋವಿಡ್‌ ನೆಗೆಟಿವ್‌ ವರದಿ ಹಾಗೂ ಎರಡು ಡೋಸ್‌ ಲಸಿಕೆ ಪಡೆದಿರಬೇಕು. ಇಲ್ಲವಾದರೆ ಅನುಮತಿ ನೀಡುವುದಿಲ್ಲ’ ಎಂದು ಮಾಹಿತಿ ನೀಡಿದರು.

‘ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಆಗದಂತೆ ನೋಡಿಕೊಳ್ಳಬೇಕು. ಗಣೇಶಮೂರ್ತಿ ತರುವಾಗ ಹಾಗೂ ವಿಸರ್ಜನೆಗೆ ಕೊಂಡೊಯ್ಯುವಾಗ ಅದ್ದೂರಿ ಮೆರವಣಿಗೆ ಮಾಡುವಂತಿಲ್ಲ. ಸಂಗೀತ, ನೃತ್ಯ, ಡಿಜೆ ಕಾರ್ಯಕ್ರಮ ಆಯೋಜಿಸಲು ಅವಕಾಶವಿಲ್ಲ. ಗಣೇಶನ ದರ್ಶನಕ್ಕೆ ಬರುವ ಭಕ್ತರ ದೇಹದ ಉಷ್ಣಾಂಶವನ್ನು ಪರಿಶೀಲಿಸಿ ಪ್ರವೇಶ ನೀಡಬೇಕು. ಸ್ಥಳವನ್ನು ನಿತ್ಯವೂ ಸ್ಯಾನಿಟೈಸ್ ಮಾಡಬೇಕು’ ಎಂದು ಸೂಚನೆ ನೀಡಿದರು.

ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಸರ್ವಿಸ್‌ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದರೆ ನಗರಸಭೆ ಅಧಿಕಾರಿಗಳು ಪರಿಶೀಲಿಸುತ್ತಾರೆ. ನಿಗದಿಗಿಂತ ಹೆಚ್ಚು ಎತ್ತರದ ಗಣೇಶಮೂರ್ತಿ ಪ್ರತಿಷ್ಠಾಪಿಸಿದರೆ ಹಾಗೂ ಇತರ ನಿಯಮ ಉಲ್ಲಂಘಿಸಿದ್ದು ಕಂಡುಬಂದರೆ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು’ ಎಂದರು.

‘ಪರಿಸರ ಸಂರಕ್ಷಣೆಯ ಉದ್ದೇಶದಿಂದ ಗಣೇಶಮೂರ್ತಿಗಳ ವಿಸರ್ಜನೆಗೆ ಜಿಲ್ಲೆಯಲ್ಲಿ 31 ಸ್ಥಳಗಳನ್ನು ಗುರುತಿಸಲಾಗಿದೆ. ಅರಿಶಿನ ಗಣೇಶಮೂರ್ತಿ ಪ್ರತಿಷ್ಠಾನೆಗೆ ಸಂಬಂಧಿಸಿದಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಈಗಾಗಲೇ ಜಾಗೃತಿ ಮೂಡಿಸುತ್ತಿದೆ. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶಮೂರ್ತಿಗಳನ್ನು ಮನೆಯಲ್ಲೇ ವಿಸರ್ಜನೆ ಮಾಡುವುದು ಸೂಕ್ತ’ ಎಂದು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ, ‘ಗಣೇಶೋತ್ಸವದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಠಾಣೆ ಹಾಗೂ ಉಪವಿಭಾಗ ಮಟ್ಟದಲ್ಲಿ ರೌಡಿ ಪರೇಡ್‌ ನಡೆಸಿ ಎಚ್ಚರಿಕೆ ನೀಡಲಾಗಿದೆ. ಪಿಒಪಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡದಂತೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಹೇಳಿದರು.

‘ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಇಂತಹ ಸ್ಥಳಗಳಿಗೆ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಹೆಚ್ಚಿನ ಭದ್ರತಾ ಸಿಬ್ಬಂದಿ ಒದಗಿಸುವಂತೆ ಈಗಾಗಲೇ ಕೋರಿಕೆ ಸಲ್ಲಿಸಲಾಗಿದೆ. ಗಣೇಶಮೂರ್ತಿ ಮೆರವಣಿಗೆಗೆ ನಿರ್ಬಂಧ ವಿಧಿಸಲಾಗುತ್ತದೆ. ಸಮೀಪದ ಹೊಂಡ ಅಥವಾ ನಿಗದಿತ ಸ್ಥಳದಲ್ಲಿ ಗಣೇಶಮೂರ್ತಿ ವಿಸರ್ಜನೆ ಮಾಡಬೇಕು’ ಎಂದರು.

ಏಕಗವಾಕ್ಷಿ ವ್ಯವಸ್ಥೆ

ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಏಕಗವಾಕ್ಷಿ ವ್ಯವಸ್ಥೆ ರೂಪಿಸಲಾಗುವುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ ಮಾಹಿತಿ ನೀಡಿದರು.

‘ಸ್ಥಳೀಯ ಸಂಸ್ಥೆಯಲ್ಲಿ ಅನುಮತಿ ಪಡೆಯುವುದಕ್ಕೂ ಮೊದಲು ಬೆಸ್ಕಾಂ ಹಾಗೂ ಪೊಲೀಸರಿಂದ ನಿರಾಕ್ಷೇಪಣಾ ಪತ್ರ ಸಲ್ಲಿಸಬೇಕು. ಇವೆಲ್ಲವೂ ಒಂದೆಡೆ ಸಿಗುವ ವ್ಯವಸ್ಥೆ ರೂಪಿಸಲಾಗುವುದು. ನಿಗದಿಗಿಂತ ಹೆಚ್ಚು ಎತ್ತರದ ಗಣೇಶಮೂರ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಮಾರುಕಟ್ಟೆಯನ್ನು ಪರಿಶೀಲಿಸಿ ಎಚ್ಚರಿಕೆ ನೀಡಲಾಗುವುದು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್‌.ರಂಗನಾಥ್‌ ಇದ್ದರು.

ಗಣೇಶೋತ್ಸವಕ್ಕೆ ಸರ್ಕಾರ ರೂಪಿಸಿದ ಮಾರ್ಗಸೂಚಿ ಅನುಷ್ಠಾನಗೊಳಿಸುವುದು ಜಿಲ್ಲಾಡಳಿತದ ಕರ್ತವ್ಯ. ಸೋಂಕು ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು.

- ಕವಿತಾ ಎಸ್‌.ಮನ್ನಿಕೇರಿ, ಜಿಲ್ಲಾಧಿಕಾರಿ

ಗಣೇಶೋತ್ಸವ ಸರಳವಾಗಿ ಆಚರಿಸುವುದಕ್ಕೆ ಸಂಬಂಧಿಸಿದಂತೆ ಆಯೋಜಕರನ್ನು ಕರೆದು ಶಾಂತಿಸಭೆ ನಡೆಸಲಾಗುತ್ತಿದೆ. ಷರತ್ತು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುತ್ತದೆ.

- ಜಿ.ರಾಧಿಕಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT