ಬುಧವಾರ, ಮೇ 25, 2022
29 °C

ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿದರು. ಕಾಲೇಜು ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ದೀಪಾವಳಿ ಸಂದರ್ಭದಲ್ಲಿ ಕಾಲೇಜು ಆರಂಭಿಸುವುದಾಗಿ ಆಶ್ವಾಸನೆ ನೀಡಿದ್ದ ಸರ್ಕಾರ ತೀರ್ಮಾನ ಬದಲಿಸಿದೆ. ₹ 50 ಕೋಟಿ ಮಂಜೂರು ಮಾಡಿದರೂ, ಬಿಡಿಗಾಸು ಸಿಕ್ಕಿಲ್ಲ. ಇದರಿಂದ ಜಿಲ್ಲೆಯ ಜನರಿಗೆ ಬೇಸರವಾಗಿದೆ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಧ್ವನಿ ಎತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಹಲವು ಜಿಲ್ಲೆಯ ವೈದ್ಯಕೀಯ ಕಾಲೇಜುಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಉಡುಪಿ, ಕೊಪ್ಪಳ, ದೊಡ್ಡಬಳ್ಳಾಪುರ ಸೇರಿ ಹಲವು ಜಿಲ್ಲೆಗಳಿಗೆ ವೈದ್ಯಕೀಯ ಕಾಲೇಜು ಸಿಕ್ಕಿದೆ. ಬಯಲುಸೀಮೆ ಜಿಲ್ಲೆಯನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ವೈದ್ಯಕೀಯ ಕಾಲೇಜು ಮಂಜೂರಾಗಿ ಏಳು ವರ್ಷ ಕಳೆದಿವೆ. ಕಾಲೇಜಿಗೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿ, ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬೇಕು. ಕಾಲೇಜಿಗೆ ಡೀನ್‌ ನೇಮಕ ಆಗಬೇಕು. ಇಲ್ಲವಾದರೆ ಜಿಲ್ಲೆಯ ಎಲ್ಲ ಶಾಸಕರ ಮನೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮುಖಂಡರಾದ ಟಿ.ಆನಂದ್, ಶಶಾಂಕ್, ಗೋಪಿ, ವೀಣ ಗೌರಣ್ಣ, ಸುನಂದಮ್ಮ, ನಾಗರತ್ನ, ರತ್ನಮ್ಮ, ಓಬಳೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು