ಭಾನುವಾರ, ಜನವರಿ 26, 2020
31 °C
ನೂರಾರು ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಚಿತ್ರದುರ್ಗ: ಮಾಸಿಕ ₹ 12 ಸಾವಿರ ವೇತನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಟ ₹ 12 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯ ಕಾರ್ಯಕರ್ತೆಯರು, ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್ ಸೆಂಟರ್‌ನ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನ್ಯಾಯಯುತವಾಗಿ ನಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ಸಮಿತಿ ಜಿಲ್ಲಾ ಘಟಕದ ಕಾರ್ಯದರ್ಶಿ ಲಕ್ಷ್ಮಿ ಮಾತನಾಡಿ, ‘ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ನಮ್ಮನ್ನು ನಿರ್ಲಕ್ಷೆ ಮನೋಭಾವದಿಂದ ನೋಡುತ್ತಿದೆ. ಆಶಾ ಕಾರ್ಯಕರ್ತೆಯರ ಕುರಿತು ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಪ್ರತಿಭಟನಾ ಕಾವು ಹೆಚ್ಚಾಗಲಿದೆ’ ಎಂದು ಎಚ್ಚರಿಸಿದರು.

‘ಸರ್ಕಾರ ಆರೋಗ್ಯ ಇಲಾಖೆ ಮೂಲಕ ಜಾರಿಗೊಳಿಸಿರುವ ಅನೇಕ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಆಶಾ ಕಾರ್ಯಕರ್ತೆಯರ ಶ್ರಮ ಅಧಿಕವಿದೆ. ಆದರೆ, ಅದಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ದುಡಿಯುವ ಕೈಗಳಿಗೆ ಅನ್ಯಾಯ ಮಾಡಲಾಗುತ್ತಿದೆ’ ಎಂದು ದೂರಿದರು.

‘ದಿನ ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಎಂಬುದನ್ನು ಪರಿಶೀಲಿಸಲು ಸರ್ಕಾರ ಸೂಚನೆ ನೀಡಿದೆಯಂತೆ. ನಿತ್ಯ ಬೆಳಿಗ್ಗೆ 8ರಿಂದ ಸಂಜೆ 6ರವರೆಗೂ ಕಷ್ಟಪಟ್ಟು ದುಡಿಯುವ ಆಶಾ ಕಾರ್ಯಕರ್ತೆಯರ ಮೇಲೆ ಈಗಿನ ಮುಖ್ಯಮಂತ್ರಿಗೆ ಕಾಳಜಿ ಇದ್ದಿದ್ದರೆ ಈ ರೀತಿ ಹೇಳುತ್ತಿರಲಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.

‘ಎಲ್ಲ ಸರ್ಕಾರಿ ನೌಕರರಿಗೆ ಬೆಳಿಗ್ಗೆ 10ರಿಂದ ಸಂಜೆ 5ರವರೆಗೂ ಗಡುವು ನಿಗದಿ ಪಡಿಸಿದೆ. ಅದನ್ನು ಮೀರಿ ನಾವು ಕೆಲಸ ಮಾಡುತ್ತಿದ್ದರು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ನಾವು ಮನುಷ್ಯರಲ್ಲವೇ’ ಎಂದು ಪ್ರಶ್ನಿಸಿದ ಅವರು, ‘ಪ್ರೋತ್ಸಾಹಧನ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರೆ, ಅದು ಮುಗಿದ ಅಧ್ಯಾಯ ಎಂಬ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಪ್ರೋತ್ಸಾಹಧನ ನೀಡದ ಹೊರತು ನಾವುಗಳು ಕೆಲಸಕ್ಕೆ ಹೋಗುವುದಿಲ್ಲ’ ಎಂದು ಎಚ್ಚರಿಸಿದರು.

‘ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಸರ್ಕಾರ ಕೊಡುತ್ತಿರುವ ₹4 ಸಾವಿರ ವೇತನದಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಆದ್ದರಿಂದ ವೇತನ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು.

ಸಂಘಟನೆ ಮುಖಂಡ ರವಿಕುಮಾರ್, ‘ಸರ್ಕಾರದಿಂದ ಈಗ ನೀಡಲಾಗುತ್ತಿರುವ ವೇತನದಿಂದ ಯಾವುದೇ ಪ್ರಯೋಜನ ಆಗುತ್ತಿಲ್ಲ. ಇದಕ್ಕೂ ಮುನ್ನ ಬೇರೆ ಕೆಲಸ ಮಾಡುತ್ತಿದ್ದಾಗ ದಿನಕ್ಕೆ ₹300ರಿಂದ ₹400 ದುಡಿಯುತ್ತಿದ್ದರು. ಆಶಾ ಕಾರ್ಯಕರ್ತೆಯರಾಗಿ ಕೆಲಸಕ್ಕೆ ಸೇರಿಕೊಂಡ ನಂತರ ಅದು ಇಲ್ಲದಂತಾಗಿದೆ. ಆದ್ದರಿಂದ ನ್ಯಾಯಯುತ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.

‘ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ ₹ 12 ಸಾವಿರ ವೇತನ ನಿಗದಿಪಡಿಸಬೇಕು. ಹಿಂದಿನ 15 ತಿಂಗಳಿನಿಂದಲೂ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನ ನೀಡಬೇಕು’ ಎಂದು ಸರ್ಕಾರಕ್ಕೆ ಕೋರಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು