ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ

ಸ್ವರಾಜ್ ಇಂಡಿಯಾ ಪಕ್ಷದ ಮುಖಂಡ ಜೆ.ಯಾದವರೆಡ್ಡಿ ಕಳವಳ
Last Updated 2 ನವೆಂಬರ್ 2019, 12:23 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿರೋಧ ಪಕ್ಷ ಮುಕ್ತ ಭಾರತ ನಿರ್ಮಾಣಕ್ಕೆ ಮುಂದಾಗಿರುವ ಬಿಜೆಪಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಪಾಯದಲ್ಲಿ ಸಿಲುಕಿಸಿದೆ. ಸರ್ವಾಧಿಕಾರಿ ಮಾದರಿ‌ ಅಧಿಕಾರವನ್ನು ಹೇರಲು ಹವಣಿಸುತ್ತಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಯಾದವರೆಡ್ಡಿ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣ ಮಾಡುವುದಾಗಿ ಬಿಜೆಪಿ ಹೇಳುತ್ತಿತ್ತು. ಆದರೆ, ಈಗ ಬಿಜೆಪಿಯನ್ನು ಪ್ರಶ್ನಿಸುವ ಪ್ರತಿಯೊಬ್ಬರ ಮೇಲೂ ದಬ್ಬಾಳಿಕೆ ನಡೆಯುತ್ತಿದೆ. ದೇಶದಲ್ಲಿ ಉಸಿರು ಕಟ್ಟಿಸುವ ವಾತಾವರಣ ನಿರ್ಮಾಣವಾಗಿದೆ’ ಎಂದು ಹರಿಹಾಯ್ದರು.

‘ಪತ್ರಕರ್ತ ಹಾಗೂ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನ ಅಭಿವ್ಯಕ್ತಿ ಸ್ವಾತಂತ್ರದ ದಮನ. ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಮಾಧ್ಯಮ ಅಪಾಯಕ್ಕೆ ಸಿಲುಕಿದೆ ಎಂಬುದರ ಮುನ್ಸೂಚನೆ ಇದು. ರಾಜ್ಯ ಸರ್ಕಾರದ ದಮನಕಾರಿ ನಡೆ ಖಂಡನೀಯ’ ಎಂದರು.

‘ನರಸಿಂಹಮೂರ್ತಿ ಅವರು ಎರಡು ದಶಕಗಳಿಂದ ಸಾರ್ವಜನಿಕ ಬದುಕಿನಲ್ಲಿ ಇದ್ದಾರೆ. ಹಲವು ಸಾಮಾಜಿಕ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಗೌರಿ ಲಂಕೇಶ್ ಅವರ ಮಾರ್ಗದರ್ಶನದಲ್ಲಿ ಹರಿತವಾದ ಲೇಖನಗಳ ಮೂಲಕ ಸರ್ಕಾರವನ್ನು ಎಚ್ಚರಿಸಿದ್ದಾರೆ. ಪ್ರಭುತ್ವವನ್ನು ಪ್ರಶ್ನಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ. 15 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರ ನಡೆಯುತ್ತಿದೆ’ ಎಂದು ಆರೋಪಿಸಿದರು.

‘ಬಿಜೆಪಿ ಹಾಗೂ ಸಂಘಪರಿವಾರಕ್ಕೆ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡವಳಿಕೆ ಇದನ್ನು ತೋರಿಸುತ್ತಿದೆ. ರಾಷ್ಟ್ರೀಯತೆ ಹೆಸರಿನಲ್ಲಿ ಕನ್ನಡ ಸೇರಿ ಪ್ರಾದೇಶಿಕ ಭಾಷೆಯ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರಿಕೆಯ ಪ್ರಯತ್ನಗಳು ನಡೆಯುತ್ತಿವೆ. ಕನ್ನಡ ಭಾಷೆಯ ಗೌರವ ಕಾಪಾಡುವ ಕೆಲಸವನ್ನು ರಾಜ್ಯ ಸರ್ಕಾರ ಕೂಡ ಮಾಡುತ್ತಿಲ್ಲ’ ಎಂದು ಕಿಡಿಕಾರಿದರು.

‘ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರ ಹಾಳಾಗಲಿದೆ. ಅಸ್ಥಿರ ಬೆಲೆ, ಬರ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ವಿದೇಶಿ ಕಂಪನಿಗಳು ಉತ್ಪನ್ನಗಳನ್ನು ಮಾರಾಟ ಮಾಡಲು ಇದರಿಂದ ಅನುಕೂಲವಾಗಲಿದೆ. ಇದು ರೈತರ ಹೊಟ್ಟೆ ಮೇಲೆ ಹೊಡೆಯುವ ಕರಾಳ ಶಾಸನ’ ಎಂದರು.

‘ನೆರೆ ಹಾವಳಿಯಿಂದ ತತ್ತರಿಸಿದ ಜನರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ, ಟಿಪ್ಪು ವಿಚಾರವನ್ನು ಮುನ್ನೆಲೆಗೆ ತಂದಿದೆ. ಪಠ್ಯದಿಂದ ಟಿಪ್ಪು ಇತಿಹಾಸ ಕಿತ್ತುಹಾಕುವ ಹುನ್ನಾರ ನಡೆಯುತ್ತಿದೆ. ಗಾಂಧೀಜಿ ಹಾಗೂ ಅಂಬೇಡ್ಕರ್‌ ಜಯಂತಿ ಬಿಟ್ಟು ಎಲ್ಲ ಜಯಂತಿಗಳನ್ನು ಸರ್ಕಾರ ರದ್ದು ಮಾಡಿದರೆ ಒಳಿತು’ ಎಂದು ಆಗ್ರಹಿಸಿದರು.ಮುಖಂಡರಾದ ಸುರೇಶ್ ಬಾಬು, ಕಾಂತರಾಜ್, ದೊಡ್ಡಮಲ್ಲಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT