ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗದ 222 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ದೀಪಾ ಅಧ್ಯಕ್ಷತೆಯಲ್ಲಿ ಸಭೆ
Last Updated 1 ಏಪ್ರಿಲ್ 2021, 11:34 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ 1,400 ಗ್ರಾಮಗಳ ಪೈಕಿ 222 ಗ್ರಾಮಗಳು ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತವೆ ಎಂಬ ಸಂಗತಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ದೀಪಾ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಬೆಳಕಿಗೆ ಬಂದಿದೆ.

ಕುಡಿಯುವ ನೀರಿನ ಕೊರತೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಚರ್ಚೆಯ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಈ ಮಾಹಿತಿ ನೀಡಿದರು.

ಉಸ್ತುವಾರಿ ಕಾರ್ಯದರ್ಶಿ ಎಂ.ದೀಪಾ ಮಾತನಾಡಿ, ‘ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಬೇಸಿಗೆ ಸಂದರ್ಭದಲ್ಲಿ ಈ ಸಮಸ್ಯೆ ಇನ್ನಷ್ಟು ತೀವ್ರವಾಗುತ್ತದೆ. ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಗುರುತಿಸಿ. ನೀರು ಪೂರೈಕೆಗೆ ಉತ್ತಮ ಕ್ರಿಯಾ ಯೋಜನೆ ಸಿದ್ಧಪಡಿಸಿ’ ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ‘ನೀರಿನ ಕೊರತೆ ಎದುರಿಸುತ್ತಿರುವ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಬೇಕು. ತಹಶೀಲ್ದಾರ್‌ ಹಾಗೂ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಸಮಿತಿಯ ಸಭೆಯ ಅನುಮೋದನೆ ಪಡೆಯಬೇಕು. ನೀರು ಪೂರೈಕೆಗೆ ಸಂಬಂಧಿಸಿದ ಬಿಲ್‌ ವಿಚಾರದಲ್ಲಿ ತೊಂದರೆ ಆಗದಂತೆ ಎಚ್ಚರ ವಹಿಸಬೇಕು’ ಎಂದರು.

ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು. ನರೇಗಾ, ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಸೂಚನೆ ನೀಡಲಾಯಿತು.

‘ಕೋವಿಡ್‌ ಎದುರಿಸಲು ಸಜ್ಜಾಗಿ’

ಕೋವಿಡ್‌ ಎರಡನೇ ಅಲೆ ಕಾಣಿಸಿಕೊಂಡಿದ್ದು, ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಕೋವಿಡ್‌ ಪರೀಕ್ಷೆ ಹೆಚ್ಚಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ದೀಪಾ ಸೂಚನೆ ನೀಡಿದರು.

‘ಸರ್ಕಾರದ ಮಾರ್ಗಸೂಚಿಯಂತೆ ನಿತ್ಯ ಕನಿಷ್ಠ 1,600 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿ ಸಂಗ್ರಹಿಸಬೇಕು. ಜನಸಂದಣಿ ಹೆಚ್ಚಾಗಿರುವ ಹಾಗೂ ಜನ ಸಂಚಾರ ದಟ್ಟವಾಗಿರುವ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆ ಮಾಡಬೇಕು’ ಎಂದರು.

‘ಜನವರಿಯಲ್ಲಿ 429, ಫೆಬ್ರುವರಿಯಲ್ಲಿ 194 ಹಾಗೂ ಮಾರ್ಚ್ ತಿಂಗಳಲ್ಲಿ 288 ಪ್ರಕರಣಗಳು ವರದಿಯಾಗಿವೆ. ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ. ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಔಷಧ ಸೇರಿ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರತಿಯೊಬ್ಬರ ಮೇಲೆ ನಿಗಾವಹಿಸಬೇಕು’ ಎಂದು ತಾಕೀತು ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾಂವಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಹಮದ್ ಮುಬಿನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT