ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ ಅಂತ್ಯಕ್ಕೆ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ

Last Updated 17 ಏಪ್ರಿಲ್ 2022, 3:16 IST
ಅಕ್ಷರ ಗಾತ್ರ

ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲು ಮಾರ್ಗದ ಭೂಸ್ವಾಧೀನಕ್ಕೆ ಕಂದಾಯ, ಭೂಮಾಪನ, ರೈಲ್ವೆ, ಲೋಕೋಪಯೋಗಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಜಂಟಿ ಸರ್ವೇ ಕಾರ್ಯಕೈಗೊಳ್ಳಬೇಕು ಎಂದು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್‌ ಕುಮಾರ್‌ ಜಿಲ್ಲಾಧಿಕಾರಿಗೆ ಸೂಚನೆನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ‘ದಾವಣಗೆರೆ- ಚಿತ್ರದುರ್ಗ-ತುಮಕೂರು’ ನೂತನ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಸ್ಥಿತಿಗತಿ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ‘ಮೇ ಅಂತ್ಯದ ವೇಳೆಗೆ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ ನೀಡಲು ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ. ಆದ್ದರಿಂದ ತ್ವರಿತಗತಿಯಲ್ಲಿ ಕೆಲಸ ಪ್ರಾರಂಭಿಸಿ ಮೇ ತಿಂಗಳ ಮಧ್ಯದ ವೇಳೆಗೆ ಮೊದಲ ಹಂತದ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜತೆಗೆ ರೈಲ್ವೆ ಇಲಾಖೆಗೆ ಭೂಮಿಯನ್ನು ಸಂಪೂರ್ಣವಾಗಿ ಹಸ್ತಾಂತರಿಸಬೇಕು’ ಎಂದು ತಾಕೀತುಮಾಡಿದರು.

‘ಜಂಟಿ ಸರ್ವೇ ಕಾರ್ಯ ತಂಡದ ಅಧಿಕಾರಿಗಳು ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಬೇಕು. ಅಧಿಸೂಚನೆ ಹೊರಡಿಸಿದ ಭೂಮಿಯನ್ನು ಸ್ವಾಧೀನಕ್ಕೆ ಪಡೆದು ಕೊಂಡು ಸಂತ್ರಸ್ಥರಿಗೆ ಪರಿಹಾರ ಧನ ವಿತರಿಸಬೇಕು. ಭೂಸ್ವಾಧೀನಕ್ಕೆ ಅಗತ್ಯ ಇರುವ ₹ 200 ಕೋಟಿ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಯಾವುದೇ ಗೊಂದಲಕ್ಕೆ ಒಳಗಾಗದೆ ಐದು ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಆರ್‌.ಚಂದ್ರಯ್ಯ ಮಾತನಾಡಿ, ‘ಮೇ ಮಧ್ಯದ ಅವಧಿಗೆ ಮೊದಲ ಹಂತವನ್ನು ಪೂರ್ಣಗೊಳಿಸಿ ಅದೇ ವೇಗದಲ್ಲಿ 2 ಹಂತದ ಭೂ ಸ್ವಾಧೀನ ಪ್ರಕ್ರಿಯೆ ನಡೆಸಲಾಗುವುದು. ಬಹುತೇಕ ಜೂನ್ ಅಂತ್ಯಕ್ಕೆ 2ನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ’ ಎಂದು ತಿಳಿಸಿದರು.

‘ಹಿರಿಯೂರು ತಾಲ್ಲೂಕಿನಲ್ಲಿ 461.6 ಎಕರೆ ಜಮೀನಿನ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಒಂದು ವಾರದಲ್ಲಿ ಭೂಮಿ ವಶಕ್ಕೆ ಪಡೆದು ಪರಭಾರೆ ಮಾಡಲಾಗುವುದು. ಚಿತ್ರದುರ್ಗ ತಾಲೂಕಿನಲ್ಲಿ 243.29 ಎಕರೆ ಜಮೀನನ್ನು ಭೂಸ್ವಾಧೀನಕ್ಕೆ ಗುರುತಿಸಲಾಗಿದೆ. ರೈಲ್ವೆ ಇಲಾಖೆಯಿಂದ ಹೆಚ್ಚುವರಿ ಭೂಮಿಯನ್ನು ಕೇಳಿದ್ದರಿಂದ, ಎರಡನೇ ಹಂತದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್‌ನಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

‘ಹಿರಿಯೂರು ತಾಲ್ಲೂಕಿಗೆ ₹ 77 ಕೋಟಿ ಪರಿಹಾರ‌ ಬಿಡುಗಡೆಯಾಗಿದ್ದು, ಈಗಾಗಲೇ ಸುಮಾರು ₹ 49 ಕೋಟಿ ಪರಿಹಾರ ವಿತರಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 183 ಎಕರೆ ಭೂಮಿ ಸ್ವಾಧೀನಕ್ಕೆ ಪರಿಹಾರ ನಿಗದಿಪಡಿಸಲಾಗಿದೆ’ ಎಂದು ವಿವರಿಸಿದರು. ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ, ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಎನ್‌. ಸತೀಶ್‌ ಬಾಬು, ಭೂದಾಖಲೆ ಇಲಾಖೆ ಉಪನಿರ್ದೇಶಕ ರಾಮಾಂಜನೇಯ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT