ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳಮೀಸಲು, ವೇತನ ಹೆಚ್ಚಳ, ಬಡ್ತಿಗೆ ಆಗ್ರಹ

ದಲಿತ ಸಂಘರ್ಷ ಸಮಿತಿ, ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ನೌಕರರ ಪ್ರತಿಭಟನೆ
Last Updated 22 ಸೆಪ್ಟೆಂಬರ್ 2020, 13:22 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಾಸಿಕ ಗೌರವಧನವನ್ನು ₹ 12 ಸಾವಿರಕ್ಕೆ ಏರಿಸಲು ಆಶಾ ಕಾರ್ಯಕರ್ತೆಯರು, ಸದಾಶಿವ ಆಯೋಗದ ವರದಿಯನ್ನು ಅಧಿವೇಶನದಲ್ಲಿ ಮಂಡಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಹಾಗೂ ಕನಿಷ್ಠ ವೇತನ ನಿಗದಿಪಡಿಸುವಂತೆ ಗ್ರಾಮ ಪಂಚಾಯಿತಿ ನೌಕರರು ಮಂಗಳವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗೌರವ ಧನ ಹೆಚ್ಚಿಸುವ ಆಶ್ವಾಸನೆ ನೀಡಿದ್ದ ಸರ್ಕಾರ ಮಾತಿಗೆ ತಪ್ಪಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.

ಎಐಯುಟಿಯುಸಿ ಜಿಲ್ಲಾ ಸಂಚಾಲಕ ಎಚ್‌.ರವಿಕುಮಾರ್‌ ಮಾತನಾಡಿ, ‘ಆಶಾ ಕಾರ್ಯಕರ್ತೆಯರ ಸೇವೆಯನ್ನು ಗಮನಿಸಿ ವೇತನ ಹೆಚ್ಚಿಸಬೇಕಿತ್ತು. ಅವರ ಸೇವೆಯನ್ನು ಕಾಯಂಗೊಳಿಸಬೇಕಿತ್ತು. ಆದರೆ, ಸರ್ಕಾರವೇ ಶೋಷಣೆ ಮಾಡುತ್ತಿರುವುದು ವಿಪರ್ಯಾಸ’ ಎಂದು ಆರೋಪಿಸಿದರು.

‘ಆಶಾ ಕಾರ್ಯಕರ್ತೆಯರ ಹೋರಾಟವನ್ನು ಸರ್ಕಾರ ಕಡೆಗಣಿಸುತ್ತಿದೆ. ಸುಳ್ಳು ಆಶ್ವಾಸನೆ ನೀಡಿ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದೆ. ಮಹಿಳಯರ ನೋವಿಗೆ ಮಿಡಿಯದ ಸರ್ಕಾರ ಅಧಿಕಾರಶಾಹಿಯಾಗಿ ಉಳಿಯುತ್ತಿದೆ. ಗೌರವಧನ ಹೆಚ್ಚಳ ಸೇರಿ ಇತರ ಬೇಡಿಕೆಗೆ ಸ್ಪಂದಿಸಬೇಕು’ ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷೆ ಗಿರಿಜಮ್ಮ ಇದ್ದರು.

ವರದಿ ಮಂಡನೆಗೆ ಒತ್ತಾಯ:ಒಳಮೀಸಲಾತಿಗೆ ಸಂಬಂಧಿಸಿದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ಸುರಿಯುತ್ತಿದ್ದ ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಜಾತಿಗಳ ನಡುವೆ ಮೀಸಲಾತಿ ನ್ಯಾಯಯುತವಾಗಿ ಹಂಚಿಕೆಯಾಗಿಲ್ಲ. ಒಳಮೀಸಲಾತಿ ನೀಡುವಂತೆ ಎರಡೂವರೆ ದಶಕದಿಂದ ಕೂಗು ಕೇಳಿಬರುತ್ತಿದೆ. ಆದರೆ, ಸರ್ಕಾರಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾಗಿ 8 ವರ್ಷ ಕಳೆದರೂ ವಿಧಾನಮಂಡಲದಲ್ಲಿ ಮಂಡನೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಳಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಈಚೆಗೆ ನೀಡಿದ ಅಭಿಪ್ರಾಯ ಹೋರಾಟಗಾರರಿಗೆ ಹುಮ್ಮಸ್ಸು ತುಂಬಿದೆ. ಒಳಮೀಸಲಾತಿ ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುವುದು ಸ್ಪಷ್ಟವಾಗಿದೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಮಂಡಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಚ್‌.ಮಂಜುನಾಥ್‌, ಜಿಲ್ಲಾ ಸಂಘಟನಾ ಅಧ್ಯಕ್ಷ ಆರ್‌.ಭೀಮಣ್ಣ, ಮುಖಂಡರಾದ ಮಲ್ಲೇಶ್‌, ಶಾಂತಕುಮಾರ್‌, ಸುಪ್ರೀಂ ಚಕ್ರವರ್ತಿ ಇದ್ದರು.

ಬಡ್ತಿಗೆ ಪರಿಗಣಿಸಲು ಆಗ್ರಹ:ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್‌, ಪಂಪ್‌ ಆಪರೇಟರ್‌, ಕಾರ್ಯಕದರ್ಶಿ ಸೇರಿದಂತೆ ಇತರ ಹುದ್ದೆಗಳ ಬಡ್ತಿಗೆ ಅರ್ಹರನ್ನು ಪರಿಗಣಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಪಂಪ್‌ ಆಪರೇಟರ್‌ಗಳನ್ನು ಬಿಲ್‌ ಕಲೆಕ್ಟರ್‌ ಹುದ್ದೆಗೆ ಹಾಗೂ ಬಿಲ್‌ ಕಲೆಕ್ಟರ್‌ಗಳಿಗೆ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಬೇಕು. ಈ ಬಗ್ಗೆ ಹಲವು ಬಾರಿ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಕನಿಷ್ಠ ವೇತನವೂ ಪಾವತಿ ಆಗುತ್ತಿಲ್ಲ. ಸರ್ಕಾರ ರೂಪಿಸಿದ ನಿಯಮಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಖಂಡರಾದ ಬಿ.ಎಂ.ಮಲಿಯಪ್ಪ, ಒ.ಶಶಿಕುಮಾರ್‌, ಎ.ಮಾರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT