ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನ್ಯ ತಡೆಗೆ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಿ

ಕಾನೂನಿನ ಅರಿವು-ನೆರವು ನೀಡಿ ದೌರ್ಜನ್ಯ ತಡೆಯಿರಿ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
Last Updated 23 ನವೆಂಬರ್ 2020, 17:04 IST
ಅಕ್ಷರ ಗಾತ್ರ

ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ಬಹುಬೇಗ ಇತ್ಯರ್ಥ ಪಡಿಸಲು ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಬೇಕು ಎಂಬ ಒತ್ತಾಯ ಸಮಿತಿ ಸದಸ್ಯರಿಂದ ಕೇಳಿಬಂತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯ ರಾಜಪ್ಪ, ‘ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸಲಾಗಿದೆ. ಅದೇ ಮಾದರಿಯಲ್ಲಿ ಇಲ್ಲೂ ಸ್ಥಾಪಿಸಬೇಕು’ ಎಂದು ಮನವಿ ಮಾಡಿದರು. ಇದಕ್ಕೆ ಇತರೆ ಸದಸ್ಯರು ದನಿಗೂಡಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ‘ಸಮಿತಿ ಮುಂದಿಟ್ಟಿರುವ ಸದಸ್ಯರ ಪ್ರಸ್ತಾವವನ್ನು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದ ಅವರು, ‘ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡುವುದು ಒಂದೆಡೆಯಾದರೆ, ಎಲ್ಲದಕ್ಕಿಂತಲೂ ಮುಖ್ಯವಾಗಿ ದೌರ್ಜನ್ಯ ತಡೆಗೆ ಮುಂದಾಗಬೇಕು. ಅದಕ್ಕಾಗಿ ಕಾನೂನಿನ ಅರಿವು- ನೆರವು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಮತಾ, ‘2020-21ನೇ ಸಾಲಿನಲ್ಲಿ ₹ 14 ಲಕ್ಷ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

₹ 26 ಲಕ್ಷ ಪರಿಹಾರ:‘2020ರ ಜುಲೈ 1ರಿಂದ ನ. 15ರವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ಅತ್ಯಾಚಾರ, ಕೊಲೆ, ಜಾತಿನಿಂದನೆ ಸೇರಿದಂತೆ ಒಟ್ಟು 24 ಪ್ರಕರಣಗಳು ದಾಖಲಾಗಿವೆ. ಒಟ್ಟು ₹ 26.30 ಲಕ್ಷ ಪರಿಹಾರ ಒದಗಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

‘ಸಮಸ್ಯೆ ಇರುವ ಕಡೆ ಸಮಿತಿ ಸದಸ್ಯರು ಖುದ್ದಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಲು ಮುಂದಾಗೋಣ’ ಎಂದು ಸದಸ್ಯರು ಒಮ್ಮತದ ಅಭಿಪ್ರಾಯಕ್ಕೆ ಬಂದರು.

ಸಮಿತಿ ಸದಸ್ಯ ಅರುಣ್‌ಕುಮಾರ್, ‘ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ಜನರಿಗೆ ಬೇಡ ಜಂಗಮ (ಪರಿಶಿಷ್ಟ ಜಾತಿ) ಪ್ರಮಾಣ ಪತ್ರ ನೀಡಲಾಗಿದೆ. ಇದರಿಂದ ನಿಜವಾದ ಪರಿಶಿಷ್ಟರಿಗೆ ಅನ್ಯಾಯವಾಗಲಿದೆ. ಆದ ಕಾರಣ ನೀಡಿರುವ ಪ್ರಮಾಣ ಪತ್ರ ರದ್ದುಗೊಳಿಸಬೇಕು’ ಎಂದು ಸಭೆಯ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು.

ಅಧಿಕಾರಿಗಳ ನಾಮನಿರ್ದೇಶನ: ನಿವೃತ್ತಿ, ವರ್ಗಾವಣೆ ಕಾರಣಕ್ಕೆ ತೆರವಾಗಿದ್ದ ಸದಸ್ಯತ್ವಕ್ಕೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಿ.ರೇಖಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜನಾಯ್ಕ್ ಅವರನ್ನು ನಾಮನಿರ್ದೇಶನ ಮಾಡಲಾಯಿತು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಟಿ. ಯೋಗೇಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಸಮಿತಿ ಸದಸ್ಯರಾದ ಕೃಷ್ಣಪ್ಪ, ಬೋರಯ್ಯ, ಸಿದ್ದಮ್ಮ, ಫಾದರ್ ರಾಜು, ಭಕ್ತ ಪ್ರಹ್ಲಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT