ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯ ಸಾಧನೆಗೆ ಯಾವುದೂ ಅಡ್ಡಿಯಾಗುವುದಿಲ್ಲ: ಜಿಲ್ಲಾಧಿಕಾರಿ

ಮಹಿಳಾ ದಿನಾಚರಣೆಯಲ್ಲಿ ಅನುಭವ ಹಂಚಿಕೊಂಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್‌.ಜೆ
Last Updated 9 ಮಾರ್ಚ್ 2023, 11:13 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೇಂದ್ರೀಯ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪರೀಕ್ಷೆ ಎದುರಾದಾಗ ನಾನು ಒಂಬತ್ತು ತಿಂಗಳ ಗರ್ಭಿಣಿ. ಛಲ ಬಿಡದೇ ಪರೀಕ್ಷೆ ಎದುರಿಸಿ ಭಾರತೀಯ ಆಡಳಿತಾತ್ಮಕ ಸೇವೆಗೆ (ಐಎಎಸ್‌) ಆಯ್ಕೆಯಾದೆ. ಮಹಿಳೆಯ ಸಾಧನೆಗೆ ಯಾವುದೂ ಅಡ್ಡಿಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್‌.ಜೆ. ಅನುಭವ ಹಂಚಿಕೊಂಡರು.

ಇಲ್ಲಿನ ತರಾಸು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಎನ್‌ಆರ್‌ಎಲ್‌ಎಂ ಸಂಜೀವಿನಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಮಹಿಳೆಯಾಗಿ ಜನಿಸಲು ಪುಣ್ಯ ಮಾಡಬೇಕು. ಜನ್ಮನೀಡುವ ಶಕ್ತಿಯನ್ನು ಪ್ರಕೃತಿ ಮಹಿಳೆಯರಿಗೆ ಮಾತ್ರ ನೀಡಿದೆ. ಮಹಿಳೆಯರು ಯಾವುದೇ ಸಂದರ್ಭ ಹಾಗೂ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ಶಕ್ತಿಯನ್ನು ಹೊಂದಿದ್ದಾರೆ. ಮಹಿಳೆಯರನ್ನು ಅಡುಗೆ ಮನೆಗೆ ಸೀಮತಗೊಳಿಸಬಾರದು’ ಎಂದು ಸಲಹೆ ನೀಡಿದರು.

‘ಸಾಧನೆಗೆ ಯಾವುದೂ ಅಡ್ಡಿಯಾಗುವುದಿಲ್ಲ. ತೀರ್ಮಾನ ತೆಗೆದುಕೊಳ್ಳುವ ಸಾಮರ್ಥ್ಯ ಮಹಿಳೆಗೂ ಇದೆ. ಇದನ್ನು ಸಮಾಜ ಒಪ್ಪಿಕೊಂಡಿದೆ. ಮಹಿಳೆ ಮಾಡಿರುವ ಸಾಧನೆಯನ್ನು ಗುರುತಿಸಬೇಕು. ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಬೇಕು’ ಎಂದು ಸಲಹೆ
ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ ಮಾತನಾಡಿ, ‘ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಕಸ ವಿಂಗಡಣೆಯ ಜವಾಬ್ದಾರಿ ನೀಡಲಾಗಿದೆ. ಜೊತೆಗೆ ಕಸ ವಿಂಗಡಣೆಯ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸಲು ತರಬೇತಿ ಸಿಕ್ಕಿದೆ. 97 ಮಹಿಳೆಯರ ತರಬೇತಿ ಪೂರ್ಣಗೊಂಡಿದ್ದು, ಇನ್ನೂ 31 ಮಹಿಳೆಯರು ತರಬೇತಿ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ 74 ಮಹಿಳೆಯರು ಕಸ ವಿಂಗಡಣೆಯ ವಾಹನದ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ’
ಎಂದರು.

‘ಕೃಷಿಯಲ್ಲಿ ಮಹಿಳೆಯರ ಪಾತ್ರ ಅಗಾಧವಾದುದು. ಗ್ರಾಮೀಣ ಭಾಗದ ಶೇ 80ರಷ್ಟು ಮಹಿಳೆಯರು ಕೃಷಿಯಲ್ಲಿ ಭಾಗಿಯಾಗಿದ್ದಾರೆ. ಕೃಷಿಯಲ್ಲಿನ ಕಠಿಣ ಕೆಲಸಗಳನ್ನು ಮಹಿಳೆಯರು ನಿರ್ವಹಿಸುತ್ತಾರೆ. ಮಹಿಳೆಯರಲ್ಲಿ ನಿಷ್ಠೆ, ಆತ್ಮವಿಶ್ವಾಸ, ಸ್ವಾಭಿಮಾನ ಇದೆ. ಹಾಗಾಗಿ ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕ್‍ಗಳು ಆರ್ಥಿಕವಾಗಿ ಸಹಾಯ ಮಾಡುತ್ತವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್, ‘1910 ಕ್ಲಾರಾ ಜಟ್ ಮಹಿಳಾ ದಿನಾಚರಣೆಗೆ ಅಡಿಪಾಯ ಹಾಕಿದರು. 1975ರಲ್ಲಿ ವಿಶ್ವ ಸಂಸ್ಥೆಯಿಂದ ಅಧಿಕೃತವಾಗಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿನ ಮಹಿಳೆಯರ ಸಾಧನೆಯನ್ನು ಸಂಭ್ರಮಿಸುವ ದಿನವಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಲಿಂಗಸಮಾನತೆಗಾಗಿ ನಾವಿನ್ಯತೆ ಹಾಗೂ ತಂತ್ರಜ್ಞಾನ’ ಎಂಬುದು ಪ್ರಸಕ್ತ ವರ್ಷದ ಮಹಿಳಾ ದಿನದ ಧ್ಯೇಯವಾಗಿದೆ. ನಾವಿನ್ಯತೆ ಹಾಗೂ ತಂತ್ರಜ್ಞಾನ ಕ್ಷೇತ್ರ ಮುಂದುವರಿದರೂ ಈ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಶೇ 22 ರಷ್ಟು ಮಾತ್ರ. ಈ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಾಧನೆ ಮಾಡುವಲ್ಲಿ ಪ್ರೇರಣೆ ನೀಡಬೇಕಿದೆ’ ಎಂದರು.

ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ ಮಕ್ಕಳನ್ನು ಸನ್ಮಾನಿಸಲಾಯಿತು. ಉತ್ತಮ ಸಾಧನೆ ತೋರಿದ ಗ್ರಾಮ ಪಂಚಾಯಿತಿ ಮಹಿಳಾ ಒಕ್ಕೂಟಗಳಿಗೆ ಪ್ರೋತ್ಸಾಹಧನ ನೀಡಲಾಯಿತು. ಅಂಗನವಾಡಿ ಕಾರ್ಯಕರ್ತೆಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯೆ ರೇಖಾ, ಎನ್‌ಆರ್‌ಎಂಎಲ್ ಯೋಜನಾ ನಿರ್ದೇಶಕ ಕೆ.ಎನ್. ಮಹಾಂತೇಶಪ್ಪ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಕೊಲ್ಲಿ ಲಕ್ಷ್ಮಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿ.ಕೆ. ಶೀಲಾ, ಬಾಲ ನ್ಯಾಯಮಂಡಳಿ ಸದಸ್ಯೆ ಸುಮನ ಅಂಗಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT