ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಬಂಧನಕ್ಕೆ ಖಂಡನೆ, ಕಾರ್ಮಿಕರ ಕಲ್ಯಾಣಕ್ಕೆ ಮನವಿ

ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರೈತರು, ಕಾರ್ಮಿಕರ ಪ್ರತಿಭಟನೆ
Last Updated 24 ಸೆಪ್ಟೆಂಬರ್ 2020, 10:55 IST
ಅಕ್ಷರ ಗಾತ್ರ

ಚಿತ್ರದುರ್ಗ: ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಿರುವರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತ ಸಂಘ ಹಾಗೂಕಾರ್ಮಿಕರ ಕಲ್ಯಾಣ ಮಂಡಳಿಗಳನ್ನು ವಿಲೀನಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಸದಸ್ಯರು ಗುರುವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಅಹೋರಾತ್ರಿ ಧರಣಿನಿರತರನ್ನು ಬಂಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿದರು. ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ‘ಧರಣಿನಿರತರನ್ನು ಬಂಧಿಸಿದ ಮಾತ್ರಕ್ಕೆ ರೈತರು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ. ಕಾಯ್ದೆ ಹಿಂಪಡೆಯುವವರೆಗೂ ರೈತರ ಹೋರಾಟ ನಿಲ್ಲದು’ ಎಂದು ಎಚ್ಚರಿಕೆ ನೀಡಿದರು.

‘ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗದು. ಕಾರ್ಪೊರೇಟ್ ಕಂಪನಿಗಳಿಗೆ ಮಣೆ ಹಾಕಲು ಸರ್ಕಾರ ಕಾಯ್ದೆಗಳನ್ನು ತಿದ್ದುಪಡಿ ಮಾಡಲು ಮುಂದಾಗಿದೆ. ಇದು ರೈತ ವಿರೋಧಿ ಕ್ರಮ ಎಂಬುದಾಗಿ ಗೊತ್ತಿದ್ದರೂ ಸರ್ಕಾರ ಅಂಗೀಕರಿಸಿರುವುದು ಎಷ್ಟು ಸರಿ?’ ಎಂದು ಪ್ರಶ್ನಿಸಿದರು.

‘ಸರ್ಕಾರದ ಕ್ರಮ ಖಂಡಿಸಿ ಸೆ.28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ರೈತರು ಜಾಗೃತರಾಗಿ ಬಂದ್‌ಗೆ ಪ್ರೋತ್ಸಾಹ ನೀಡುವ ಮೂಲಕ ಕಾಯ್ದೆ ಹಿಂಪಡೆಯುವಂತೆ ಒತ್ತಡ ಹೇರಬೇಕಿದೆ’ ಎಂದು ಮನವಿ ಮಾಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ನಾಗರಾಜ್, ಮುಖಂಡರಾದ ಶ್ರೀಕಂಠಮೂರ್ತಿ, ಮಲ್ಲಿಕಾರ್ಜುನ, ಕರಿಸಿದ್ದಯ್ಯ, ಎನ್.ಕೆ.ರಾಜಶೇಖರ್, ಎಂ.ಬಸವರಾಜಪ್ಪ, ವಡೆಯರಹಳ್ಳಿ ಬಸವರಾಜ್ ಇದ್ದರು.

ಮಂಡಳಿ ವಿಲೀನಕ್ಕೆ ವಿರೋಧ: ಕಾರ್ಮಿಕರ ಕಲ್ಯಾಣ ಮಂಡಳಿಗಳನ್ನು ವಿಲೀನಗೊಳಿಸುವುದನ್ನು ವಿರೋಧಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಕಾರ್ಮಿಕರ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಮುಖ್ಯಮಂತ್ರಿ, ಕಾರ್ಮಿಕ ಸಚಿವರಿಗೆ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

ಕೆಲಸವಿಲ್ಲದೆ ಕಂಗಾಲಾಗಿರುವ ಎಲ್ಲ ಕಟ್ಟಡ ಕಾರ್ಮಿಕರಿಗೆ ವಾರಕ್ಕೆ ₹ 2 ಸಾವಿರದಂತೆ ಮುಂದಿನ 6 ತಿಂಗಳವರೆಗೂ ಸಹಾಯಧನ ನೀಡಬೇಕು. ಆರೋಗ್ಯ ಸೇವೆ ಖಾಸಗೀಕರಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್, ‘ಕೊರೊನಾ ವ್ಯಾಪಿಸುತ್ತಿರುವ ಕಾರಣ ಮದುವೆ ಸಹಾಯಧನ, ಪಿಂಚಣಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು. ಸೇವಾಸಿಂಧು ಕೇಂದ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಯಬೇಕು’ ಎಂದು ಒತ್ತಾಯಿಸಿದರು.

‘ಕಾರ್ಮಿಕ ಕಚೇರಿಗಳಲ್ಲಿ ನಡೆಯುವ ಭ್ರಷ್ಟಾಚಾರ ತಡೆಯಬೇಕು. ನಕಲಿ ಏಜೆಂಟ್‌ ಹಾಗೂ ಬೋಗಸ್ ಸಂಘಗಳ ಹಾವಳಿ ತಪ್ಪಿಸಬೇಕು. ಸೆಸ್‌ ಸಂಗ್ರಹದಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು’ ಎಂದು ಕೋರಿದರು.

ಮುಖಂಡರಾದ ನಾಗರಾಜಚಾರಿ, ಷೇಖ್‌ಕಲೀಂವುಲ್ಲಾ, ಭಾಸ್ಕರಾಚಾರಿ, ಮಹಮ್ಮದ್ ಜಕ್ರಿಯಾಉಲ್ಲಾ, ಸಮೀಉಲ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT