ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿಕ್ಷಾಟನೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟಿಸಿದ ರೈತರು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ
Last Updated 23 ಅಕ್ಟೋಬರ್ 2020, 15:34 IST
ಅಕ್ಷರ ಗಾತ್ರ

ಚಿತ್ರದುರ್ಗ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಬೊಕ್ಕಸದಲ್ಲಿ ಹಣವಿಲ್ಲ ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕೃಷಿಕರು ಭಿಕ್ಷಾಟನೆ ಮಾಡಿ ಪ್ರತಿಭಟನೆ ನಡೆಸಿದರು.

ರೈತ ಭವನದ ಎದುರು ಶುಕ್ರವಾರ ಜಮಾಯಿಸಿದ ಪ್ರತಿಭಟನಾಕಾರರು ಬಿ.ಡಿ.ರಸ್ತೆ ಸೇರಿದಂತೆ ನಗರದ ಹಲವೆಡೆ ಭಿಕ್ಷಾಟನೆ ಮಾಡಿದರು. ವಿನೂತನ ಪ್ರತಿಭಟನೆಯ ಮೂಲಕ ಸಂಗ್ರಹವಾಗಿರುವ ₹ 4,160 ಸ್ವೀಕರಿಸಬೇಕು, ಇಲ್ಲವೇ ಬೆಂಬಲ ಬೆಲೆ ನೀಡಬೇಕು ಎಂದು ಸವಾಲು ಹಾಕಿದರು.

‘ಕೇಂದ್ರ ಸರ್ಕಾರ 18 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ, ಹಣ ಮಾತ್ರ ಇನ್ನೂ ರೈತರಿಗೆ ಸಿಕ್ಕಿಲ್ಲ. ಜಿಲ್ಲೆಯಲ್ಲಿ ನೂರಾರು ಕೋಟಿ ಮೌಲ್ಯದ ಈರುಳ್ಳಿ ನಷ್ಟವಾಗಿದೆ. ಶೇಂಗಾ, ಮೆಕ್ಕೆಜೋಳ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆ ನೈಜವಾಗಿ ಸಮೀಕ್ಷೆ ಮಾಡುತ್ತಿಲ್ಲ. ಆದರೆ, ಕೋವಿಡ್‌ ನೆಪದಲ್ಲಿ ಕೋಟ್ಯಂತರ ರೂಪಾಯಿ ಲೂಟಿಯಾಗುತ್ತಿದೆ’ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕರಪ್ಪ ಆರೋಪಿಸಿದರು.

ರೈತ ಸಂಘದ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ, ‘ಮಳೆ ಹೆಚ್ಚಾಗಿದ್ದರಿಂದ ಶೇಂಗಾ ಇಳುವರಿ ಕುಸಿದಿದೆ. ಈರುಳ್ಳಿ ಬೆಳೆಗೆ ಮಾಡಿದ ವೆಚ್ಚವೂ ಕೈಗೆ ಸಿಕ್ಕಿಲ್ಲ. ಖರೀದಿ ಕೇಂದ್ರಗಳನ್ನು ತೆರೆದರೆ ರೈತರಿಗೆ ಅನುಕೂಲವಾಗುತ್ತದೆ. ಮೆಕ್ಕೆಜೋಳಕ್ಕೆ ಸರ್ಕಾರ ₹ 1,850 ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ, ಮಾರುಕಟ್ಟೆಯಲ್ಲಿ ₹ 1,350ಕ್ಕಿಂತ ಹೆಚ್ಚು ಬೆಲೆ ರೈತರಿಗೆ ಸಿಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ರಾಜ್ಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೆ.ಸಿ.ಹೊರಕೇರಪ್ಪ, ಎಂ.ಬಿ.ತಿಪ್ಪೇಸ್ವಾಮಿ, ಧನಂಜಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT