ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಅಸ್ವಸ್ಥಗೊಂಡ 39 ಮಕ್ಕಳು ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿ–ಭೇದಿ
Published 27 ಡಿಸೆಂಬರ್ 2023, 14:35 IST
Last Updated 27 ಡಿಸೆಂಬರ್ 2023, 14:35 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಬೀರಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಬಿಸಿಯೂಟ ಸೇವಿಸಿದ ಮಕ್ಕಳಲ್ಲಿ ವಾಂತಿ–ಭೇದಿ ಕಾಣಿಸಿಕೊಂಡಿದ್ದು, ಅಸ್ವಸ್ಥಗೊಂಡ 39 ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಪ್ರತ್ಯೇಕ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಕಲುಷಿತ ಆಹಾರ ಸೇವನೆಯಿಂದ ವಾಂತಿ–ಭೇದಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

62 ಮಕ್ಕಳ ದಾಖಲಾತಿ ಇರುವ ಶಾಲೆಗೆ ಬುಧವಾರ 45 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಧ್ಯಾಹ್ನ 12.45ಕ್ಕೆ ಈ ಮಕ್ಕಳಿಗೆ ಬಿಸಿಯೂಟ ನೀಡಲಾಗಿತ್ತು. ಊಟ ಸೇವಿಸಿದ ಒಂದೂವರೆ ಗಂಟೆಯ ಬಳಿಕ ನಾಲ್ವರು ವಿದ್ಯಾರ್ಥಿಗಳಲ್ಲಿ ವಾಂತಿ–ಭೇದಿ ಕಾಣಿಸಿಕೊಂಡಿದೆ. ಬಳಿಕ ಮತ್ತೆ ಕೆಲವು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರಿಂದ ಆಂಬುಲೆನ್ಸ್‌ ಮೂಲಕ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಶಾಲೆ ಮುಗಿಸಿ ಮನೆಗೆ ಮರಳಿದ ಬಳಿಕ ಮತ್ತಷ್ಟು ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

‘ಶಾಲೆಯಿಂದ ಮನೆಗೆ ಮರಳಿದ ಮೊಮ್ಮಗಳು ತೀವ್ರವಾಗಿ ನಿತ್ರಾಣಗೊಂಡಿದ್ದಳು. ಬಿಸಿಯೂಟ ಸೇವಿಸಿದ ಬಳಿಕ ತಲೆ ಸುತ್ತು ಕಾಣಿಸಿಕೊಂಡಿತ್ತು ಎಂಬುದಾಗಿ ಮಾಹಿತಿ ನೀಡಿದಳು. ಶಾಲೆಯ ಬಳಿಗೆ ಧಾವಿಸಿದಾಗ ಹಲವು ವಿದ್ಯಾರ್ಥಿಗಳನ್ನು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಮೊಮ್ಮಗಳ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ’ ಎಂದು ಪಾಲಕರಾದ ಶಾರದಮ್ಮ ತಿಳಿಸಿದ್ದಾರೆ.

‘ಆಸ್ಪತ್ರೆಗೆ ದಾಖಲಾದ ಎಲ್ಲ 39 ಮಕ್ಕಳು ಚೇತರಿಸಿಕೊಂಡಿದ್ದು, ಆರೋಗ್ಯ ಸ್ಥಿರವಾಗಿದೆ. ಕಲುಷಿತ ಆಹಾರ ಸೇವಿನೆಯಿಂದ ಈ ತೊಂದರೆ ಉಂಟಾಗಿರುವ ಸಾಧ್ಯತೆ ಇದೆ. ಪಾಲಕರು ಭಯಪಡುವ ಅಗತ್ಯವಿಲ್ಲ’ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಸ್ಪಷ್ಟಪಡಿಸಿದ್ದಾರೆ.

****

ಕೆಲ ಮಕ್ಕಳು ಜ್ವರದಿಂದ ಬಳಲುತ್ತಿದ್ದರು. ಇವರಲ್ಲಿ ವಾಂತಿ–ಭೇದಿ ಕಾಣಿಸಿಕೊಂಡಿದೆ. ಬಳಿಕ ಎಲ್ಲ ಮಕ್ಕಳು ಅಸ್ವಸ್ಥರಾಗಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

-ಕೆ.ರವಿಶಂಕರ್‌ ರೆಡ್ಡಿ, ಡಿಡಿಪಿಐ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT