ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಳ: ಬಿಜೆಪಿ ದ್ವಂದ್ವ ನಿಲುವು

ಐಕ್ಯತಾ ಸಮಾವೇಶದ ಲಾಂಚನ ಬಿಡುಗಡೆ ಮಾಡಿದ ಜಿ.ಪರಮೇಶ್ವರ ಆರೋಪ
Last Updated 5 ಜನವರಿ 2023, 11:16 IST
ಅಕ್ಷರ ಗಾತ್ರ

ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಿಸಿರುವುದಾಗಿ ಬಿಜೆಪಿ ಪ್ರಚಾರ ಮಾಡುತ್ತಿದೆ. ಆದರೆ, ಇಂಥ ಯಾವುದೇ ಪ್ರಸ್ತಾವ ಸರ್ಕಾರದ ಎದುರು ಇಲ್ಲವೆಂದು ಕೇಂದ್ರ ಸಚಿವರು ಲೋಕಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಈ ದ್ವಂದ್ವ ನಿಲುವಿನ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸ್ಪಷ್ಟಪಡಿಸಲಿ ಎಂದು ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್‌ ಒತ್ತಾಯಿಸಿದರು.

ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡದ ಐಕ್ಯತಾ ಸಮಾವೇಶದ ಲಾಂಚನವನ್ನು ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಕೋಲಾರದ ಸಂಸದ ಮುನಿಸ್ವಾಮಿ ಅವರು ಲೋಕಸಭೆಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಲಿಖಿತ ಉತ್ತರ ನೀಡಿದ್ದಾರೆ. ಈ ಮೂಲಕ ಬಿಜೆಪಿಯ ಉದ್ದೇಶ ಸ್ಪಷ್ಟವಾಗಿದೆ. ಇದಕ್ಕೆ ಬಿಜೆಪಿ ನಾಯಕರು ಜನರಿಗೆ ಉತ್ತರ ನೀಡಬೇಕು’ ಎಂದು ಒತ್ತಾಯಿಸಿದರು.

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಐದು ವರ್ಷದ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಏಳಿಗೆಗೆ ₹ 88 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. 2018ರ ಬಜೆಟ್‌ನಲ್ಲಿ ₹ 29 ಸಾವಿರ ಕೋಟಿಯನ್ನು ಮೀಸಲಿಡಲಾಗಿತ್ತು. ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ಅದೇ ಪ್ರಮಾಣದ ಅನುದಾನ ನೀಡಿತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಈ ಅನುದಾನ ಕಡಿತ ಮಾಡಿದೆ’ ಎಂದು ದೂರಿದರು.

‘ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹ 2.6 ಲಕ್ಷ ಕೋಟಿ ಬಜೆಟ್‌ ಮಂಡಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಶೇ 24ರಷ್ಟು ಅನುದಾನ ಮೀಸಲಿಡಬೇಕಿತ್ತು. ₹ 42 ಸಾವಿರ ಕೋಟಿಯ ಬದಲು ₹ 28 ಸಾವಿರ ಕೋಟಿ ಮಾತ್ರ ನೀಡಲಾಗಿದೆ. ₹ 8 ಸಾವಿರ ಕೋಟಿ ಅನುದಾನವನ್ನು ರಸ್ತೆ ಅಭಿವೃದ್ಧಿ ಕಾಮಗಾರಿಯಂತಹ ಅನ್ಯ ಉದ್ದೇಶಕ್ಕೆ ಬಳಕೆ ಮಾಡಲಾಗಿದೆ. ಬಿಜೆಪಿಯ ಮನಸ್ಥಿತಿ ಇದರಿಂದ ಅರ್ಥವಾಗಿದೆ. ನಡ್ಡಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದು ಆಗ್ರಹಿಸಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಮಯದಲ್ಲಿ ಸಮುದಾಯದ ಏಳಿಗೆಗಾಗಿ ಅನೇಕ ಯೋಜನೆ ನೀಡಿದೆ. ಸಾವಿರಾರು ವರ್ಷ ಶೋಷಣೆಗೆ ಒಳಗಾದ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡಿದೆ. ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಒತ್ತು ನೀಡಿದೆ. ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂಬುದನ್ನು ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಜ.8ರಂದು ಬೆಳಿಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ಪ್ರಥಮ ಬಾರಿಗೆ ಎರಡೂ ಸಮುದಾಯ ಒಂದೇ ವೇದಿಕೆಯಡಿ ಸೇರಲಿವೆ. ಕಾಂಗ್ರೆಸ್ ಬಲವರ್ದನೆ ಹಾಗೂ ದೂರದೃಷ್ಟಿ ಕುರಿತು ಚಿಂತನೆ ನಡೆಸಲಾಗುತ್ತದೆ. ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಬಿ.ಕೆ.ಹರಿಪ್ರಸಾದ್‌, ಕೆ.ಸಿ.ವೇಣುಗೋಪಾಲ ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನೂ ಆಹ್ವಾನಿಸಲಾಗಿದೆ’ ಎಂದರು.

ಮಾಜಿ ಸಚಿವರಾದ ಎಚ್.ಆಂಜನೇಯ, ಡಾ.ಎಚ್.ಸಿ.ಮಹದೇವಪ್ಪ, ರಾಜ್ಯಸಭೆಯ ಮಾಜಿ ಸದಸ್ಯ ಎಚ್.ಹನುಮಂತಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್, ವಿಧಾನಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಮುಖಂಡ ಹನುಮಲಿ ಷಣ್ಮುಖಪ್ಪ, ಸೋಮಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT