ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪ್ರಾತಿನಿಧ್ಯಕ್ಕಾಗಿ ಸಂಘಟಿತರಾಗಿ

ರಾಜ್ಯ ಉಪ್ಪಾರ ಸಂಘದ ಸಭೆಯಲ್ಲಿ ಪುರುಷೋತ್ತಮಾನಂದಪುರಿ ಸ್ವಾಮೀಜಿ
Last Updated 9 ನವೆಂಬರ್ 2020, 7:38 IST
ಅಕ್ಷರ ಗಾತ್ರ

ಹೊಸದುರ್ಗ: ‘ಎಲ್ಲ ಕ್ಷೇತ್ರದಲ್ಲಿಯೂ ಹಿಂದುಳಿದಿರುವ ಉಪ್ಪಾರ ಸಮಾಜ ರಾಜಕೀಯ ಪ್ರಾತಿನಿಧ್ಯ ಪಡೆಯಲು ಸಂಘಟಿತ ಹೋರಾಟ ಮಾಡಬೇಕು’ ಎಂದು ಪುರುಷೋತ್ತಮಾನಂದಪುರಿ ಸ್ವಾಮೀಜಿ ಕರೆ ನೀಡಿದರು.

ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಭಾನುವಾರ ನಡೆದ ರಾಜ್ಯ ಉಪ್ಪಾರ ಸಂಘದ ವಿಶೇಷ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಪರಿಶಿಷ್ಟ ಪಂಗಡದ ಮೀಸಲಾತಿ ಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಇದಕ್ಕಾಗಿ ಹಂಪಿ ವಿಶ್ವವಿದ್ಯಾನಿಲಯದಿಂದ ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ಈ ವರದಿಯು 2021ರ ಫೆಬ್ರುವರಿ ಒಳಗೆ ಬರುವ ನಿರೀಕ್ಷೆಯಿದೆ. ಆ ವರದಿ ಬಂದ ತಕ್ಷಣ ಈ ಬಗ್ಗೆ ರಾಜ್ಯದ 30 ಜಿಲ್ಲೆಗಳಲ್ಲಿಯೂ ಪಾದಯಾತ್ರೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ಮಾಡಿ, ಎಸ್‌ಟಿ ಮೀಸಲಾತಿ ಕೊಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಆರ್‌.ಮೂರ್ತಿ ಉಪ್ಪಾರ್‌ ಮಾತನಾಡಿ, ‘ದೇಶದಲ್ಲಿ 2 ಕೋಟಿ ಹಾಗೂ ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಉಪ್ಪಾರರನ್ನು ಸರ್ಕಾರಗಳು ಮತದಾನಕ್ಕೆ ಮಾತ್ರ ಬಳಸಿಕೊಳ್ಳುತ್ತಿವೆ. ಆದರೆ, ಈ ಸಮಾಜದ ಬೆಂಬಲ ಪಡೆದು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಸಮುದಾಯದ ಅಭಿವೃದ್ಧಿಗೆ ಸರಿಯಾದ ಸೌಲಭ್ಯ ಒದಗಿಸುತ್ತಿಲ್ಲ. ಹಾಗಾಗಿ, ಸಮಾಜದ ಪ್ರಗತಿಗೆ ಪುರುಷೋತ್ತಮಾನಂದಪುರಿ ಶ್ರೀಗಳು ಕೈಗೊಳ್ಳುವ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು’ ಎಂದು ಮನವಿ ಮಾಡಿದರು.

ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಪ್ರಧಾನ ಕಾರ್ಯದರ್ಶಿ ವೆಂಕೋಬ, ಗೌರವಾಧ್ಯಕ್ಷ ತುರ್ಚಘಟ್ಟದ ಬಸವರಾಜಪ್ಪ, ಕಾರ್ಯಾಧ್ಯಕ್ಷ ಲಕ್ಷ್ಮಣ್‌ ಉಪ್ಪಾರ್‌ ಮಾತನಾಡಿದರು.

ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಯರ್ರಿಸ್ವಾಮಿ, ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್‌, ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್‌, ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಮಂಜುನಾಥ್‌, ಜಿಲ್ಲಾ ಪಂಚಾಯಿತಿ ಸದಸ್ಯೆ ವಿಶಾಲಾಕ್ಷಿ ನಟರಾಜು, ಸರಸ್ವತಿ ಚಿನ್ಮಯಿ, ನಾಗರಾಜು, ಮಾರುತಿ, ಭೀಮಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT