ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿತ್ರದುರ್ಗ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Published 23 ಜನವರಿ 2024, 16:11 IST
Last Updated 23 ಜನವರಿ 2024, 16:11 IST
ಅಕ್ಷರ ಗಾತ್ರ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿದ್ದ ಚಿತ್ರದುರ್ಗ ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ವ್ಯಾಪಾರಿ ಸಮೂಹ ಸಹಕಾರ ನೀಡಿ ಮಾರುಕಟ್ಟೆ ವಹಿವಾಟು ನಡೆಸಲಿಲ್ಲ. ಕಾಮಗಾರಿ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿಳಂಬ ನೀತಿಯನ್ನು ವಿರೋಧಿಸಿ ನಡೆಸಿದ ಬಂದ್‌ಗೆ ಆಡಳಿತಾರೂಢ ಕಾಂಗ್ರೆಸ್‌ ಮತ್ತು ವಿರೋಧ ಪಕ್ಷ ಬಿಜೆಪಿ ಬೆಂಬಲ ಸೂಚಿಸಿದ್ದವು. ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದ ಬಿಜೆಪಿ ಬಂದ್‌ನಿಂದ ದೂರ ಉಳಿಯಿತು. ಕಾಂಗ್ರೆಸ್‌ ಶಾಸಕರು ಹೋರಾಟದಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ನಗರದಲ್ಲಿ ಖಾಸಗಿ ಬಸ್‌ ಸಂಚಾರ ಸ್ಥಗಿತಗೊಂಡಿತ್ತು. ಕೆಎಸ್‌ಆರ್‌ಟಿಸಿ ಬಸ್‌ಗಳು ನಗರದ ಹೊರಭಾಗದ ಹೆದ್ದಾರಿಯಲ್ಲಿ ಮಾತ್ರ ಸಂಚರಿಸಿದವು. ಆಟೊ ಮತ್ತಿತರ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.  ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲೆ–ಕಾಲೇಜುಗಳಿಗೆ ರಜೆ ಘೋಷಿಸಿದ್ದವು. 

ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಹೋರಾಟಗಾರರು ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು. ‘2025ಕ್ಕೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಭರವಸೆ ನೀಡಿದೆ. ಬಾಕಿ ಉಳಿದಿರುವ ಕಾಮಗಾರಿ ಗಮನಿಸಿದರೆ ಇದು ಅಸಾಧ್ಯ ಎಂಬುದು ಖಚಿತವಾಗಲಿದೆ. ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ₹ 5,300 ಕೋಟಿ ಅನುದಾನ ಬಿಡುಗಡೆಗೆ ಹಿಂದೇಟು ಹಾಕುವ ಸಾಧ್ಯತೆ ಇದೆ. ಕೇಂದ್ರದ ಅನುದಾನಕ್ಕೆ ಕಾಯದೇ ರಾಜ್ಯ ಸರ್ಕಾರ ಕಾಮಗಾರಿಗೆ ವೇಗ ನೀಡಬೇಕು’ ಎಂದು ಆಗ್ರಹಿಸಿದರು.

ಚಿತ್ರದುರ್ಗ ಬಂದ್‌ ನಡೆಸಿದ ಪ್ರತಿಭಟನಕಾರರು ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು
ಚಿತ್ರದುರ್ಗ ಬಂದ್‌ ನಡೆಸಿದ ಪ್ರತಿಭಟನಕಾರರು ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT