ಸೋಮವಾರ, ಆಗಸ್ಟ್ 15, 2022
20 °C
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ

ಟೋಲ್‌ ಪ್ಲಾಜಾ ಬಳಿ ಆಂಬುಲೆನ್ಸ್‌ ಇರಲಿ: ಸಂಗಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಅಪಘಾತದಲ್ಲಿ ಗಾಯಗೊಂಡವರ ತ್ವರಿತ ಚಿಕಿತ್ಸೆಗೆ ಟೋಲ್‌ ಪ್ಲಾಜಾದ ಬಳಿ ಆಂಬುಲೆನ್ಸ್‌ ವ್ಯವಸ್ಥೆ ಕಲ್ಪಿಸಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಸೂಚಿಸಿದರು.

ರಸ್ತೆ ಸುರಕ್ಷತಾ ಕ್ರಮಗಳ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಅಪಘಾತದ ಸ್ಥಳವನ್ನು ಶೀಘ್ರವಾಗಿ ತಲುಪುವ ಬಗ್ಗೆ ಆಲೋಚಿಸಬೇಕಿದೆ. ಅಪಘಾತ ವಲಯ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್‌ ಇರುವಂತೆ ನೋಡಿಕೊಳ್ಳಬೇಕಿದೆ. ಟೋಲ್‌ ಪ್ಲಾಜಾದ ಬಳಿಯೂ ಆಂಬುಲೆನ್ಸ್‌ ಇದ್ದರೆ ಘಟನಾ ಸ್ಥಳವನ್ನು ಸುಲಭವಾಗಿ ತಲುಪಬಹುದು. ಸೂಚನಾ ಫಲಕ, ಪೊಲೀಸ್‌ ಹಾಗೂ ಆರೋಗ್ಯ ಇಲಾಖೆ ತುರ್ತು ಸಂಖ್ಯೆಗಳನ್ನು ಹೆದ್ದಾರಿಯಲ್ಲಿ ಅಳವಡಿಸಬೇಕು’ ಎಂದರು.

‘ಜಿಲ್ಲೆಯಲ್ಲಿ 36 ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಈ ಅಪಘಾತ ವಲಯಗಳಲ್ಲಿ ಜಾಗೃತಿ ಫಲಕ ಅಳವಡಿಸಿ ರಸ್ತೆ ಉಬ್ಬು ನಿರ್ಮಿಸಬೇಕು. ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಪ್ರಾಣ ಉಳಿಸಬಹುದು. ಈ ಕುರಿತು ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು’ ಎಂದರು.

‘ಅಪಘಾತದಲ್ಲಿ ಸಂಭವಿಸುವ ಸಾವಿನ ಪ್ರಮಾಣವನ್ನು ತಗ್ಗಿಸುವ ಅಗತ್ಯವಿದೆ. ಸಾರಿಗೆ ಹಾಗೂ ಪೊಲೀಸ್‌ ಇಲಾಖೆಯ ಮೇಲೂ ಹೆಚ್ಚಿನ ಜವಾಬ್ದಾರಿ ಇದೆ. ಅಪಘಾತ ವಲಯಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ. ಉತ್ತಮ ಮಳೆ ಸುರಿದ ಪರಿಣಾಮ ಜಿಲ್ಲೆಯ ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಕೆರೆಯ ಮೇಲಿನ ಸಂಚಾರ ಸುರಕ್ಷತೆಯ ಬಗ್ಗೆ ಎಚ್ಚರದಿಂದ ಇರುವ ಅಗತ್ಯವಿದೆ’ ಎಂದು ಹೇಳಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್.ಹೆಗಡೆ ಮಾತನಾಡಿ, ‘ಜಿಲ್ಲೆಯ ಅಪಘಾತ ವಲಯಗಳು ಹೆಚ್ಚಿನ ಪ್ರಮಾಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಟ್ಟಿವೆ. ಇಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗಮನ ಹರಿಸಬೇಕು. ಹೆದ್ದಾರಿಗೆ ಅನಧಿಕೃತವಾಗಿ ಸಂಪರ್ಕ ಕಲ್ಪಿಸಿದ ರಸ್ತೆಗಳನ್ನು ಕೂಡಲೇ ಮುಚ್ಚಬೇಕು’ ಎಂದು ಸೂಚನೆ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾಂವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಡಿವೈಎಸ್‍ಪಿ ತಿಪ್ಪೇಸ್ವಾಮಿ, ಸತೀಶ್‍ಬಾಬು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.