ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಉದಾಸೀನ ಮಾಡಿದರೆ ಅಪಾಯ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

ಕೋವಿಡ್‌ ವಾರಿಯರ್ಸ್‌ಗೆ ಸನ್ಮಾನ
Last Updated 25 ಅಕ್ಟೋಬರ್ 2021, 11:10 IST
ಅಕ್ಷರ ಗಾತ್ರ

ಚಿತ್ರದುರ್ಗ: ಲಸಿಕೆ ಪಡೆದವರು ಕೋವಿಡ್‌ ಮಾರ್ಗಸೂಚಿ ಪಾಲನೆ ಮಾಡದೇ ಉದಾಸೀನತೆ ತೋರಿದರೆ ಅಪಾಯ ಎದುರಿಸಬೇಕಾಗುತ್ತದೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.

ದೇಶ 100 ಕೋಟಿ ಕೋವಿಡ್‌ ಲಸಿಕೆ ನೀಡಿದ ಸಂಭ್ರಮದ ಭಾಗವಾಗಿ ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕೋವಿಡ್‌ ಲಸಿಕೆ ಪಡೆದ ಅನೇಕರು ಸೋಂಕಿನ ಬಗ್ಗೆ ಉದಾಸೀನತೆ ತೋರುತ್ತಿದ್ದಾರೆ. ಮಾಸ್ಕ್‌ ಧರಿಸುವ ಹಾಗೂ ಸ್ಯಾನಿಟೈಸರ್‌ ಬಳಕೆ ಮಾಡುವುದನ್ನು ನಿಲ್ಲಿಸಿದ್ದಾರೆ. ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದನ್ನು ಮರೆಯುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕೋವಿಡ್ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕಿಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಅವರ ಶ್ರಮದಿಂದ ದೇಶದಲ್ಲಿ 100 ಕೋಟಿ ಲಸಿಕೆ ನೀಡಲು ಸಾಧ್ಯವಾಗಿದೆ. ಜೀವದ ಹಂಗುತೊರೆದು ಕೆಲಸ ಮಾಡಿದ ಆರೋಗ್ಯ ಇಲಾಖೆ ಸಿಬ್ಬಂದಿಯ ಕಾರ್ಯವನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಹೇಳಿದರು.

‘ಕೋವಿಡ್‌ ಅತ್ಯಂತ ಅಪಾಯಕಾರಿಯಾಗಿ ದೇಶವನ್ನು ಆವರಿಸಿತ್ತು. ಅನೇಕರು ಪೋಷಕರನ್ನು ಕಳೆದುಕೊಂಡಿದ್ದಾರೆ. ಹಲವು ಮಕ್ಕಳು ಅನಾಥರಾಗಿದ್ದಾರೆ. ಇಂತಹ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ’ ಎಂದು ಹೇಳಿದರು.

9.8 ಲಕ್ಷ ಜನರಿಗೆ ಲಸಿಕೆ

ಜಿಲ್ಲೆಯ 12 ಲಕ್ಷ ಜನರನ್ನು ಲಸಿಕೆಗೆ ಗುರುತಿಸಲಾಗಿತ್ತು. ಇದರಲ್ಲಿ 9.8 ಲಕ್ಷ ಜನರಿಗೆ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ರಂಗನಾಥ್ ತಿಳಿಸಿದರು.

‘ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ಪ್ರದೇಶದಲ್ಲಿ ಶೇ 70ರಷ್ಟು ಹಾಗೂ ನಗರ ಪ್ರದೇಶದಲ್ಲಿ ಶೇ 97 ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಲಸಿಕೆ ಕಾರ್ಯದಲ್ಲಿ ಶೇ 100ರಷ್ಟು ಪ್ರಗತಿ ಸಾಧಿಸಲು ಆಶಾ ಕಾರ್ಯಕರ್ತೆಯರು ಶ್ರಮಿಸಬೇಕು’ ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದರಿನಾಥ್, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿ ದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಜೆ. ಬಸವರಾಜ್, ಆರ್‌ಸಿಎಚ್‌ ಅಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT