ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಖರ್ಗೆ ಘೋಷಿಸಿ; ಸಿದ್ದರಾಮಯ್ಯಗೆ ಕಟೀಲ್ ಸವಾಲು

ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸವಾಲು
Last Updated 24 ಜುಲೈ 2021, 8:29 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಂಬರುವ ವಿಧಾಸನಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಣೆ ಮಾಡಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

‘ಮುಖ್ಯಮಂತ್ರಿ ಸ್ಥಾನಕ್ಕೆ ದಲಿತ ನಾಯಕರನ್ನು ಆಯ್ಕೆ ಮಾಡಿ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಶನಿವಾರ ಇಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ತಿರುಗೇಟು ನೀಡಿದರು.

‘ದಲಿತರ ಬಗ್ಗೆ ಪ್ರೀತಿ, ವಿಶ್ವಾಸವಿದ್ದರೆ ಮೊದಲು ನೀವು ನಿರ್ಧಾರ ಪ್ರಕಟಿಸಿ. ನೀವು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಬಿಡಿ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದಲಿತ ನಾಯಕರನ್ನು ತುಳಿದಿರಿ. ಇಡೀ ಸಮುದಾಯವನ್ನು ಮರೆತು ಅಧಿಕಾರ ನಡೆಸಿದ್ದೀರಿ. ನಿಮಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರೊಬ್ಬ ನಾಯಕ ಎಂಬುದರ ಬಗ್ಗೆ ತಕಾರು ಇಲ್ಲ. ಅವರ ಬಗ್ಗೆ ಅಪಾರ ಗೌರವವಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ತಂದ ಡಾ.ಜಿ.ಪರಮೇಶ್ವರ ಅವರನ್ನು ಸ್ವಜಾತಿಯವರ ನೆರವಿನಿಂದ ಕೊರಟಿಗೆರೆ ಕ್ಷೇತ್ರದಲ್ಲಿ ಸೋಲಿಸಿದರು. ಸಂಸದರಾದ ಶ್ರೀನಿವಾಸಪ್ರಸಾದ್‌, ಮಲ್ಲಿಕಾರ್ಜುನ ಖರ್ಗೆ, ಬಿ.ಎನ್‌.ಚಂದ್ರಪ್ಪ, ಆರ್‌.ಧ್ರುವನಾರಾಯಣ ಅವರನ್ನು ಸೋಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಮುಗಿಸುವ ಷಡ್ಯಂತ್ರ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ’ ಎಂದು ಹೇಳಿದರು.

‘ದಲಿತರ ಸ್ವಾಭಿಮಾನದ ಸಂಕೇತದಂತಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಅವಮಾನಿಸಿದೆ. ದೇಶದ ಮೊದಲ ಸಚಿವ ಸಂಪುಟದ ಸದಸ್ಯರಾಗಿದ್ದ ಅವರು ರಾಜೀನಾಮೆ ನೀಡುವಂತಹ ಪರಿಸ್ಥಿತಿ ಸೃಷ್ಟಿಸಿ, ಲೋಕಸಭಾ ಚುನಾವಣೆಯಲ್ಲಿಯೂ ಸೋಲಿಸಿದೆ. ಅಂತ್ಯಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ನೀಡಲಿಲ್ಲ. ಈಗ ದಲಿತರ ಬಗ್ಗೆ ಹುಸಿ ಪ್ರೀತಿ ತೋರುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT