ಶುಕ್ರವಾರ, ಜನವರಿ 22, 2021
27 °C
ತಂಬಾಕು ನಿಯಂತ್ರಣ ಕುರಿತ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ತಂಬಾಕು ಉತ್ಪನ್ನದಲ್ಲಿ ಸಂದೇಶ ಇಲ್ಲದಿದ್ದರೆ ಎಫ್‌ಐಆರ್ ದಾಖಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ‘ಕೋಟ್ಪಾ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಪಡಿಸಿದ ಎಚ್ಚರಿಕೆಯ ಸಂದೇಶ (ಶೇ 85) ಇಲ್ಲದ ಹಾಗೂ ಬಿಡಿಯಾಗಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳ ಮೇಲೆ ಎಫ್‍ಐಆರ್ ದಾಖಲಿಸಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ತಂಬಾಕು ಉತ್ಪನ್ನ ಮತ್ತು ಮಾರಾಟ ಮಾಡುವ ಸ್ಥಳಗಳಲ್ಲಿ ಆಗಿಂದಾಗ್ಗೆ ದಾಳಿ ನಡೆಸಬೇಕು. ನಿಯಮ ಪಾಲಿಸದಿದ್ದರೆ, ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ರಾಜ್ಯ ತಂಬಾಕು ನಿಯಂತ್ರಣಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್, ‘ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಸ್ಥಳಗಳಲ್ಲಿ ತಂಬಾಕು ಮುಕ್ತವಾಗಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಮೇಲೂ ಇದೆ. ಜತೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರಭುದೇವ್, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಇದ್ದರು.

ಜಾಗೃತಿ ಮೂಡಿಸಲು ಅನುಮೋದನೆ

ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಜಂಟಿ ಖಾತೆಯಲ್ಲಿ ಒಟ್ಟು ₹ 2.8 ಲಕ್ಷ ಮೊತ್ತ ಸಂಗ್ರಹಿಸಲಾಗಿದೆ. ಈ ಹಣದಲ್ಲಿ ತಂಬಾಕು ಸೇವನೆ ದುಷ್ಪರಿಣಾಮ ಕುರಿತ ಸೆಕ್ಷನ್–4ರ ನಾಮಫಲಕಗಳನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಗೋಡೆ ಬರಹಗಳನ್ನು ಬರೆಸುವ ಮೂಲಕ ಜಾಗೃತಿ ಮೂಡಿಸಲು ಸಭೆ ಅನುಮೋದನೆ ನೀಡಿತು.

ಜನಸಂದಣಿ ಇರುವ ಸಾರ್ವಜನಿಕ ಸ್ಥಳ, ಐತಿಹಾಸಿಕ ಪ್ರದೇಶಗಳಲ್ಲೂ ತಂಬಾಕು ನಿಷೇಧ ಕುರಿತ ನಾಮಫಲಕ ಅಳವಡಿಸಬೇಕು ಎಂದು ಸಭೆ ತೀರ್ಮಾನಿಸಿತು.

ಕ್ಯಾನ್ಸರ್‌ಕಾರಕ ರಾಸಾಯನಿಕ ಪರೀಕ್ಷೆಗೆ  

‘ಪಾನ್‍ಮಸಾಲದಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಆದ ಕಾರಣ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪಾನ್‍ಮಸಾಲ ಉತ್ಪನ್ನ ಖರೀದಿಸಿ ನೋಯ್ಡಾ ಹಾಗೂ ದೆಹಲಿಯ ಪ್ರಯೋಗಶಾಲೆಗೆ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಮಹಾಂತೇಶ್ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.