ಮಂಗಳವಾರ, ಜೂನ್ 28, 2022
21 °C
ಬಿಜೆಪಿ ಪ್ರಕೋಷ್ಠಗಳ ಸಮಾವೇಶದಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

ಭಾರತದ ಆಡಳಿತ ವ್ಯವಸ್ಥೆ ಸುಭದ್ರ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ನೆರೆಹೊರೆಯ ದೇಶಗಳಲ್ಲಿ ಹಣ ನೀಡಿದರೂ ಅಗತ್ಯ ವಸ್ತುಗಳು ಲಭ್ಯವಾಗುತ್ತಿಲ್ಲ. ಆದರೆ, ಭಾರತದಲ್ಲಿ ಇಂತಹ ಸ್ಥಿತಿ ಸೃಷ್ಟಿಯಾಗಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಅತ್ಯುತ್ತಮವಾಗಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.

ಇಲ್ಲಿನ ಜೆಎಂಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಕೋಷ್ಠಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಶ್ರೀಲಂಕಾ, ಪಾಕಿಸ್ತಾನ, ನೇಪಾಳ, ಬಾಂಗ್ಲಾ, ಆಫ್ಘಾನಿಸ್ತಾನದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಆದರೆ, ಭಾರತದಲ್ಲಿ ಇಂತಹ ಸ್ಥಿತಿ ಇಲ್ಲ. ಆರ್ಥಿಕತೆಯ ಕಠಿಣ ಪರಿಸ್ಥಿತಿಯ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಇಳಿಕೆ ಮಾಡಿದ್ದಾರೆ. ಇದನ್ನು ಸಹಿಸಿಕೊಳ್ಳದ ವಿರೋಧ ಪಕ್ಷಗಳು ವಿನಾ ಕಾರಣ ಕೊಂಕು ಮಾತನಾಡುತ್ತಿವೆ’ ಎಂದು ಕಿಡಿಕಾರಿದರು.

‘ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಇಡೀ ಜಗತ್ತಿನ ಮೇಲೆ ಬೀರಿದೆ. ಇಂತಹ ವಿಷಮ ಸ್ಥಿತಿಯಲ್ಲಿಯೂ ಉತ್ತಮ ಆರ್ಥಿಕ ನಿರ್ಧಾರಗಳಿಂದ ದೇಶ ಮುನ್ನಡೆಯುತ್ತಿದೆ. ರಾಜ್ಯ ಸರ್ಕಾರ ಗಂಗಾ ಕಲ್ಯಾಣ ಯೋಜನೆಗೆ ಹೆಚ್ಚು ಅನುದಾನ ಮೀಸಲಿಟ್ಟಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ 18 ಹೊಸ ಯೋಜನೆಗಳನ್ನು ರೂಪಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ಪ್ರಕೋಷ್ಠದ ಪದಾಧಿಕಾರಿಗಳು ಮತದಾರರಿಗೆ ತಿಳಿಸ ಬೇಕು’ ಎಂದು ಕಿವಿಮಾತು ಹೇಳಿದರು.

‘ವಿದ್ಯುನ್ಮಾನ ಮತಯಂತ್ರದ (ಇವಿಎಂ) ಕುರಿತು ವಿರೋಧ ಪಕ್ಷಗಳು ಅನುಮಾನ ವ್ಯಕ್ತಪಡಿಸುತ್ತಿವೆ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಚುನಾವಣೆ ಫಲಿತಾಂಶವನ್ನು ಅನುಮಾನಿಸುವುದು ಮತದಾರನನ್ನು ಅವಮಾನಿಸಿದಂತೆ. ಪಶ್ಚಿಮ ಬಂಗಾಳದಲ್ಲಿಯೂ ಇವಿಎಂ ಉಪಯೋಗಿಸಿ ಚುನಾವಣೆ ನಡೆಸಲಾಗಿದೆ. ಹಾಗಾದರೆ ಅಲ್ಲಿ ಮೋಸ ನಡೆಯಲಿಲ್ಲವೇ’ ಎಂದು ಪ್ರಶ್ನಿಸಿದರು.

ಬಿಜೆಪಿಯ ಜಿಲ್ಲಾ ಪ್ರಭಾರಿ ಪ್ರೇಮಕುಮಾರ್ ಮಾತನಾಡಿ, ‘ಬಿಜೆಪಿ ಉನ್ನತ ಜಾತಿಗೆ ಸೀಮಿತವಾಗಿದೆ ಎಂಬ ಅರ್ಥದಲ್ಲಿ ಈ ಹಿಂದೆ ಮೂದಲಿಸಲಾಗುತ್ತಿತ್ತು. ಆಗ ಬಿಜೆಪಿ ನಾಯಕರ ಸಂಖ್ಯೆಯೂ ವಿರಳವಾಗಿತ್ತು. ಇಂದು ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷ ಸಾಕಷ್ಟು ನಾಯಕರನ್ನು ಬೆಳೆಸಿದೆ. ಎಲ್ಲ ವರ್ಗಗಳನ್ನು ಪಕ್ಷ ಹಾಗೂ ಪಕ್ಷದ ಕಾರ್ಯಕ್ರಮಗಳು ತಲುಪಬೇಕು. ಪ್ರಕೋಷ್ಠಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.

ಪ್ರಕೋಷ್ಠಗಳ ಸಹಸಂಯೋಜಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ರಾಜ್ಯ ಶಿಕ್ಷಣ ಸಹ ಸಂಚಾಲಕ ಹಾಗೂ ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಸುರೇಶ್, ಬಿಜೆಪಿ ಜಿಲ್ಲಾ ಖಜಾಂಚಿ ಮಾಧುರಿ ಗಿರೀಶ್, ಮೊರಾರ್ಜಿ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು