ಬುಧವಾರ, ಜೂನ್ 16, 2021
28 °C

1,600 ಟನ್‌ ಆಮ್ಲಜನಕಕ್ಕೆ ಕೋರಿಕೆ: ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ರಾಜ್ಯಕ್ಕೆ ಪೂರೈಕೆ ಆಗುವ 800 ಟನ್‌ ವೈದ್ಯಕೀಯ ಆಮ್ಲಜನಕದ ಪ್ರಮಾಣವನ್ನು 1,600 ಟನ್‌ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಕೇಂದ್ರ ಸಚಿವ ಪೀಯೂಷ್‌ ಗೋಯಲ್‌ ಹಾಗೂ ಪ್ರಹ್ಲಾದ್‌ ಜೋಶಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು.

ಭದ್ರಾವತಿಗೆ ತೆರಳುತ್ತಿದ್ದ ಅವರು ಮಾರ್ಗಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೊರೊನಾ ಸೋಂಕು ಏಕಾಏಕಿ ಹೆಚ್ಚಳ ಆಗಿದ್ದರಿಂದ ಸಮಸ್ಯೆ ಉಂಟಾಗಿದೆ. ಆಮ್ಲಜನಕಕ್ಕೆ ಬೇಡಿಕೆ ಅಧಿಕವಾಗಿದೆ. ಹೆಚ್ಚುವರಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಭದ್ರಾವತಿಯ ಬಲ್ಡೋಟ ಕಂಪನಿಯ ಆಮ್ಲಜನಕ ಉತ್ಪಾದನಾ ಘಟಕದ ಪುನರಾರಂಭಕ್ಕೆ ಪ್ರಯತ್ನಿಸಲಾಗುತ್ತಿದೆ’ ಎಂದರು.

‘ಆಮ್ಲಜನಕದ ಕೊರತೆ ನೀಗಿಸಲು ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. ರೆಮ್‌ಡಿಸಿವಿರ್‌ ಚುಚ್ಚುಮದ್ದು ಕೊರತೆಯೂ ನೀಗಲಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೋವಿಡ್‌ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು’ ಎಂದು ಹೇಳಿದರು.

‘ಚಿತ್ರದುರ್ಗ ಜಿಲ್ಲೆಯಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಗಮನ ಸೆಳೆದಿದ್ದಾರೆ. ಈ ಕುರಿತು ರಾಜ್ಯ ಮಟ್ಟದ ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಮೇ 12ರವರೆಗೆ ಲಾಕ್‌ಡೌನ್‌ ಇದ್ದು, ಅಲ್ಲಿಯವರೆಗೆ ಕೈಗಾರಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಬೆಡ್‌ ಬ್ಲಾಕಿಂಗ್‌ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ’ ಎಂದು ಪ್ರತಿಕ್ರಿಯೆ ನೀಡಿದರು.

***

ಜಿಲ್ಲೆಯಲ್ಲಿ ಸೋಂಕಿನ ತೀವ್ರತೆ ಕಡಿಮೆ ಎಂಬುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ವಾಸ್ತವ ಪರಿಸ್ಥಿತಿ ಭಿನ್ನವಾಗಿದೆ. ಕಡಿಮೆ ಪರೀಕ್ಷೆಯಿಂದ ಉದಾಸೀನ ಸಲ್ಲದು. ಜಿಲ್ಲೆಯ ಪರಿಸ್ಥಿತಿ ಬಗ್ಗೆ ಸಚಿವರಿಗೆ ವಿವರಿಸಿದ್ದೇನೆ.

–ಜಿ.ಎಚ್‌.ತಿಪ್ಪಾರೆಡ್ಡಿ, ಶಾಸಕ, ಚಿತ್ರದುರ್ಗ

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು