ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿ, ಬದುಕು ಸಮನ್ವಯ ಅಗತ್ಯ

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಸಲಹೆ
Last Updated 17 ಜನವರಿ 2021, 15:43 IST
ಅಕ್ಷರ ಗಾತ್ರ

ಚಿತ್ರದುರ್ಗ: ವೃತ್ತಿ ಮತ್ತು ವೈಯಕ್ತಿಕ ಬದುಕಿನ ನಡುವೆ ಸಮನ್ವಯ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಭಾನುವಾರ ಆಯೋಜಿಸಿದ್ದ ‘ಕೋವಿಡ್‌ ಮತ್ತು ಮಾಧ್ಯಮಗಳು’ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ‘ವೃತ್ತಿ ಧರ್ಮ ಮತ್ತು ಜೀವನ ಧರ್ಮ ಒಟ್ಟಾಗಿ ಸಾಗಬೇಕಿದೆ. ಧರ್ಮ ಮತ್ತು ವೃತ್ತಿಯನ್ನು ಬಿಟ್ಟು ಜೀವನವಿಲ್ಲ’ ಎಂದು ಹೇಳಿದರು.

‘ಪತ್ರಕರ್ತರು ಉತ್ತಮವಾಗಿ ಕಾರ್ಯನಿರ್ವಹಿಸಲು ಬೌದ್ಧಿಕತೆ ಅಗತ್ಯವಾಗಿ ಬೇಕು. ಬೌದ್ಧಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಪತ್ರಕರ್ತರು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ‘ಕೋವಿಡ್‌ ಸಂಕಷ್ಟ ಎದುರಾದಾಗ ಪತ್ರಕರ್ತರು ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಕೊರೊನಾ ಸೋಂಕಿಗೆ ಮುಖಾಮುಖಿಯಾಗಿ ರಜೆ ಪಡೆಯದೇ ಕೆಲಸ ಮಾಡಿದೆವು. ಆದರೂ, ಪತ್ರಿಕಾರಂಗ ಸಂಕಷ್ಟಕ್ಕೆ ಸಿಲುಕಿದೆ. ಈ ಸಂಕಷ್ಟದಿಂದ ಹೊರಗೆ ಬರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ’ ಎಂದು ಹೇಳಿದರು.

‘ಕೋವಿಡ್‌ನಿಂದ ರಾಜ್ಯದ ಹಲವು ಪತ್ರಕರ್ತರು ಮೃತಪಟ್ಟಿದ್ದಾರೆ. ಇಂತಹ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರವನ್ನು ಮನವೊಲಿಸಲಾಗಿದೆ. ರಾಜ್ಯ ಸರ್ಕಾರವೂ ಪತ್ರಕರ್ತರ ಬೇಡಿಕೆಗಳಿಗೆ ಸ್ಪಂದಿಸಿದೆ. ಆರೋಗ್ಯ ಭಾಗ್ಯ ಯೋಜನೆಯ ಫಲ ಎಲ್ಲರಿಗೂ ಸಿಗುವಂತೆ ಆಗಿದೆ’ ಎಂದರು.

ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ, ‘ತಂತ್ರಜ್ಞಾನ ಅಭಿವೃದ್ಧಿ ಹೊಂದಿದಂತೆ ಪತ್ರಿಕೋದ್ಯಮದಲ್ಲಿ ಬದಲಾವಣೆ ಕಾಣುತ್ತಿದೆ. ಬದಲಾವಣೆಗೆ ಹೊಂದಿಕೊಳ್ಳುವ ಪ್ರವೃತ್ತಿಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ವೃತ್ತಿ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು. ಅಧ್ಯಯನಶೀಲತೆ ಮೈಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಲಕ್ಷ್ಮಣ್‌, ಉಪಾಧ್ಯಕ್ಷರಾದ ಡಿ‌.ಕುಮಾರಸ್ವಾಮಿ, ನಾಗರಾಜ ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್‌ ಗೌಡಗೆರೆ, ಹಿರಿಯ ಪತ್ರಕರ್ತ ನರೇನಹಳ್ಳಿ ಅರುಣ್‌ ಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT