ಚಿತ್ರದುರ್ಗ: ಒಳಮೀಸಲು ಜಾರಿಗೆ ಪಟ್ಟುಹಿಡಿದಿರುವ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪದಾಧಿಕಾರಿಗಳ ಸಭೆ ಒತ್ತಾಯಿಸಿದೆ.
ಭೋವಿ ಗುರುಪೀಠದಲ್ಲಿ ಶುಕ್ರವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮುನಿಯಪ್ಪ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮುನಿಯಪ್ಪ ಅವರನ್ನು ಘೇರಾವ್ ಮಾಡಿ ಪ್ರತಿಭಟನೆ ನಡೆಸಲು ಸಭೆ ತೀರ್ಮಾನಿಸಿದೆ.
ಚಳಿಗಾಲದ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಲು ಮುನಿಯಪ್ಪ ಆಗ್ರಹಿಸಿರುವುದು ಜನವಿರೋಧಿಯಾದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ತಾರತಮ್ಯ ಉಂಟು ಮಾಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹುನ್ನಾರವಾಗಿದೆ ಸಭೆ ಆರೋಪಿಸಿದೆ.
‘ಸಂವಿಧಾನದ ಆಶಯದ ಮೇಲೆ ಪ್ರಮಾಣ ವಚನ ಸ್ವೀಕರಿಸಿರುವ ಸಚಿವ ಮುನಿಯಪ್ಪ ಅವರು ಜಾತಿವಾದಿಯಾಗಿ ವರ್ತಿಸುತ್ತಿದ್ದಾರೆ. ಅವರ ನಡುವಳಿಕೆ ಅನುಮಾನಾಸ್ಪದವಾಗಿದೆ. ಸದಾಶಿವ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು, ಕಪೋಲಕಲ್ಪಿತ ವಿಷಯಗಳೇ ತುಂಬಿವೆ’ ಎಂದು ಒಕ್ಕೂಟದ ಕಾರ್ಯಾಧ್ಯಕ್ಷ ರಾಘವೇಂದ್ರ ನಾಯ್ಕ್ ಅಸಮಾಧಾನ ಹೊರಹಾಕಿದ್ದಾರೆ.
ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ರವಿ ಮಾಕಳಿ, ‘ಸಚಿವ ಕೆ.ಎಚ್.ಮುನಿಯಪ್ಪ ಅವರ ವಿರುದ್ಧ ಹೋರಾಟ ರೂಪಿಸಲು ಮೀಸಲಾತಿ ಸಂರಕ್ಷಣಾ ಒಕ್ಕೂಟ ನಿರ್ಧರಿಸಿದೆ. ಪರಿಶಿಷ್ಟ ಜಾತಿಯ ಭೋವಿ, ಲಂಬಾಣಿ, ಕೊರಚ, ಕೊರಮ ಜನಾಂಗದ ನಿಯೋಗ ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಬಳಿಗೆ ತೆರಳಿ ಚರ್ಚಿಸುವ ಅಗತ್ಯವಿದೆ’ ಎಂದು ಹೇಳಿದ್ದಾರೆ.
ಇಳಕಲ್ ಮಹಾಂತಪ್ಪ ಶಾಖಾ ಮಠದ ಸಿದ್ಧಲಿಂಗ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಲಂಬಾಣಿ ಗುರುಪೀಠದ ಸೇವಾಲಾಲ್ ಸರ್ದಾರ್ ಸ್ವಾಮೀಜಿ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಂಗಾನಾಯ್ಕ್ ಗೋಂಧಿ, ಸಂಘಟನಾ ಕಾರ್ಯದರ್ಶಿ ರವಿಕಾಂತ್ ಅಂಗಡಿ, ಸಾಮಾಜಿಕ ಚಿಂತಕರಾದ ರೂಪಾನಾಯ್ಕ್, ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪೇಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್.ಆನಂದಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.