ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
Published 17 ಮಾರ್ಚ್ 2024, 14:29 IST
Last Updated 17 ಮಾರ್ಚ್ 2024, 14:29 IST
ಅಕ್ಷರ ಗಾತ್ರ

ಚಿತ್ರದುರ್ಗ: ಕನ್ನಡ ಭಾಷೆ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಜಾರಿಗೆ ಬಂದಿದೆ. ಇದರಂತೆ ಜಿಲ್ಲೆಯಾದ್ಯಂತ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ 60ಕ್ಕಿಂತ ಹೆಚ್ಚಾಗಿ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕನ್ನಡ ಭಾಷೆಯನ್ನು ನಾಮಫಲಕಗಳ ಮೇಲ್ಭಾಗದಲ್ಲಿ ಪ್ರದರ್ಶಿಸಬೇಕು’ ಎಂದು ತಿಳಿಸಿದರು.

‘ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು ಅಥವಾ ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕ್‌ಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿರುವ ಹೆಸರುಗಳಲ್ಲಿ ಶೇ 60ರಷ್ಟು ಕನ್ನಡ ಬಳಕೆ ಮಾಡಬೇಕು. ಈ ವಿಚಾರದಲ್ಲಿ ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಬೇಕು’ ಎಂದರು.

‘ಟೆಂಡರ್ ಅಧಿಸೂಚನೆ, ಜಾಹೀರಾತು, ಅರ್ಜಿ ನಮೂನೆ, ಡಿಜಿಟಲ್ ನಮೂನೆ, ಪ್ರಮಾಣ ಪತ್ರಗಳು ಕನ್ನಡದಲ್ಲಿ ಇರಬೇಕು. ಯೋಜನೆಗೆ ಸಂಬಂಧಿಸಿದ ಫಲಕ ಸೇರಿದಂತೆ ಪ್ರತಿಯೊಂದು ಕನ್ನಡದಲ್ಲಿ ಇರಬೇಕು’ ಎಂದು ತಿಳಿಸಿದರು.

‌‘ಎಲ್ಲಾ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಸಹ ಇರಬೇಕು. ಜಾಹೀರಾತು ವಿಷಯಗಳ ಶೇಕಡವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಗದಿಪಡಿಸಿದಂತೆ ಇರಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಜೆ.ಸೋಮಶೇಖರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಕೆ.ಮಲ್ಲಿಕಾರ್ಜುನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT