ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌ | ಚಿತ್ರದುರ್ಗ: ಜಿಟಿಟಿಸಿ ಸ್ಥಾಪನೆ, ಮೀನುಗಾರಿಕೆಗೆ ಉತ್ತೇಜನ

Published 17 ಫೆಬ್ರುವರಿ 2024, 7:06 IST
Last Updated 17 ಫೆಬ್ರುವರಿ 2024, 7:06 IST
ಅಕ್ಷರ ಗಾತ್ರ

ಚಿತ್ರದುರ್ಗ: ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆ ಕೈಗೊಳ್ಳಲು ₹ 6 ಕೋಟಿ ಹಾಗೂ ಜಿಲ್ಲಾ ಖನಿಜ ನಿಧಿಯ ಮೂಲಕ ಮತ್ತೊಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸ್ಥಾಪಿಸುವುದನ್ನು ಹೊರತುಪಡಿಸಿ ಜಿಲ್ಲೆಗೆ ಯಾವುದೇ ವಿಶೇಷ ಆದ್ಯತೆಗಳು ಬಜೆಟ್‌ನಲ್ಲಿ ಸಿಕ್ಕಿಲ್ಲ.

ಬಹುನಿರೀಕ್ಷಿತ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆಗೆ ನಿಗದಿತ ಅನುದಾನ ಮೀಸಲಿಟ್ಟಿರುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿಲ್ಲ. ಅನುದಾನ ನೀಡುವುದಾಗಿ ವಾಗ್ದಾನ ನೀಡಿದ್ದ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮಾತ್ರ ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ. ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗ ಸೇರಿದಂತೆ ಜಿಲ್ಲೆಯ ಇತರ ಬೇಡಿಕೆಗಳಿಗೆ ಬಜೆಟ್‌ನಲ್ಲಿ ನಿರ್ದಿಷ್ಟ ಅನುದಾನ ಒದಗಿಸಿಲ್ಲ.

ಜಿಲ್ಲೆಯ ಪಾರಂಪರಿಕ ಬೆಳೆಯಾದ ಸಿರಿಧಾನ್ಯ, ಡೇ-ಕೇರ್ ಕಿಮೋಥೆರಪಿ ಕೇಂದ್ರ, ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾರ್ಯ ಸೇರಿ ಅನೇಕ ಕೊಡುಗೆಗಳು ಬಜೆಟ್‌ನಲ್ಲಿ ಘೋಷಣೆಯಾಗಿವೆ. ಇವು ಜಿಲ್ಲೆಯ ಜನರನ್ನು ಸಮಾಧಾನಪಡಿಸಬಲ್ಲವು.

ಮೀನುಗಾರಿಕೆಗೆ ಉತ್ತೇಜನ:

ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕು ಗಣಿಬಾಧಿತ ಪ್ರದೇಶದ ವ್ಯಾಪ್ತಿಯಲ್ಲಿವೆ. ಸಣ್ಣ, ಮಧ್ಯಮ ಹಾಗೂ ಭಾರಿ ಗಾತ್ರದ ಗಣಿಗಾರಿಕೆ ಇಲ್ಲಿ ನಡೆಯುತ್ತಿದೆ. ಈ ಪ್ರದೇಶದ ಜನಜೀವನ ಸುಧಾರಣೆಯ ನಿಟ್ಟಿನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡುವುದಾಗಿ ಮುಖ್ಯಮಂತ್ರಿ ₹ 6 ಕೋಟಿ ಘೋಷಣೆ ಮಾಡಿದ್ದಾರೆ.

ಗಣಿಬಾಧಿತ ಪ್ರದೇಶದಲ್ಲಿ ನೀರಿನ ಮೂಲಗಳು ಸರಿಯಾಗಿಲ್ಲ. ಇಲ್ಲಿ ಮೀನುಗಾರಿಕೆಗೆ ಯಾವ ರೀತಿಯ ಉತ್ತೇಜನ ನೀಡಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ.

ಭದ್ರಾ ಮೇಲ್ದಂಡೆಗಿಲ್ಲ ಒಲವು:

ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಹೋರಾಟ ಭುಗಿಲೆದ್ದಿದೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ನಡೆಯುತ್ತಿರುವ ಈ ಹೋರಾಟ ರಾಜಕೀಯ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ರೈತರು, ಹೋರಾಟಗಾರರ ಒಲವು ಗಳಿಸಲು ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ನಿರೀಕ್ಷೆ ಹುಸಿಯಾಗಿದೆ.

‘ಭದ್ರಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ 2023–24ನೇ ಬಜೆಟ್‌ನಲ್ಲಿ ₹ 5,300 ಕೋಟಿ ಅನುದಾನ ಘೋಷಣೆ ಮಾಡಿದೆ. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವ ನಿರೀಕ್ಷೆಯು ಹುಸಿಯಾಗಿದೆ’ ಎಂದು ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.

‘ಪ್ರಸಕ್ತ ಸಾಲಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ ರಾಜ್ಯ ಸರ್ಕಾರವು ಜಿಲ್ಲೆಯ 75 ಸಾವಿರ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದು ಮುಖ್ಯಮಂತ್ರಿ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗಾಗಲೇ ಚಿತ್ರದುರ್ಗ ಮತ್ತು ಚಳ್ಳಕೆರೆಯಲ್ಲಿವೆ. ಜಿಲ್ಲಾ ಖನಿಜ ನಿಧಿಯ ನೆರವಿನಿಂದ ಮತ್ತೊಂದು ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT