ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಜನಪರ ಯೋಜನೆ ಪ್ರತಿಯೊಬ್ಬರಿಗೂ ತಿಳಿಸಿ: ಶಾಸಕ ಜಿ.ಎಚ್. ತಿಪ್ಪಾರೆಡ್ಡಿ

ಕಾರ್ಯಕರ್ತರ ಪೂರ್ವಭಾವಿ ಸಭೆ
Last Updated 5 ಜನವರಿ 2019, 15:52 IST
ಅಕ್ಷರ ಗಾತ್ರ

ಚಿತ್ರದುರ್ಗ:ಪ್ರಧಾನಿ ನರೇಂದ್ರಮೋದಿ ಅವರು ನಾಲ್ಕೂವರೆ ವರ್ಷದಲ್ಲಿ ದೇಶದ ಜನತೆಗಾಗಿ ಕೈಗೊಂಡ ಜನಪ್ರಿಯ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಶನಿವಾರ ಪಕ್ಷದಿಂದ ಹಮ್ಮಿಕೊಂಡಿದ್ದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳ, ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತ ಗೆಲುವು ಸಾಧಿಸಲು ಸಂಚು ರೂಪಿಸುತ್ತಿದ್ದಾರೆ. ಆದರೆ, ಇದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದರು.

‘ಪ್ರಧಾನಿಯ ಹೆಸರು ದೇಶ-ವಿದೇಶಗಳಲ್ಲಿ ಖ್ಯಾತಿ ಗಳಿಸಿದೆ. ಅವರೇ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಬಹುಜನರ ಆಸೆಯಾಗಿದೆ. ಕಾರ್ಯಕರ್ತರು ನಿರ್ಲಕ್ಷ್ಯ ತೋರದೆ ಈಗಿನಿಂದಲೇಬೂತ್‌ಮಟ್ಟದಲ್ಲಿ ಎಲ್ಲರ ವಿಶ್ವಾಸ ಗಳಿಸಿ ಪಕ್ಷವನ್ನು ಬಲಪಡಿಸಲು ಮುಂದಾಗಬೇಕು’ ಎಂದು ಹೇಳಿದರು.

‘ಚಿತ್ರದುರ್ಗದಲ್ಲಿ ರಸ್ತೆಗಳು ಹಾಳಾಗಿವೆ. ಸ್ಥಳೀಯ ಶಾಸಕರು ಅಭಿವೃದ್ಧಿ ಕಡೆ ಗಮನ ಹರಿಸುತ್ತಿಲ್ಲ ಎಂದು ಕಾಂಗ್ರೆಸ್‌ನಕೆಲವರು ದೂರುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಅನುದಾನದಿಂದ ಇಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದರೂ ಕಂಡು ಕಾಣದಂತೆ ವರ್ತಿಸುವವರ ಟೀಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ’ ಎಂದರು.

‘ದೇಶದ ಇತಿಹಾಸದಲ್ಲೇ ಮೊದಲ ಬಾರಿ ರೈತರ 18 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಿದ್ದು, ಮೋದಿ ಸರ್ಕಾರ ಎಂಬುದನ್ನು ಕಾಂಗ್ರೆಸ್‌ನವರು ಅರ್ಥಮಾಡಿಕೊಳ್ಳಲಿ’ ಎಂದ ಅವರು, ‘ಮೋದಿ ಅವರ ಸಾಧನೆಯ ಪಟ್ಟಿಯನ್ನು ಜನತೆಯ ಮುಂದಿಟ್ಟು ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗೆದ್ದರೆ, ಸಮ್ಮಿಶ್ರ ಸರ್ಕಾರ ತನ್ನಷ್ಟಕ್ಕೆ ತಾನೇ ಪತನವಾಗುತ್ತದೆ. ಆದ್ದರಿಂದ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಮುಖಂಡರು ಹಗುರವಾಗಿ ಪರಿಗಣಿಸದೇ ಜಾಗ್ರತೆಯಿಂದ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.

ಲೋಕಸಭಾ ಉಸ್ತುವಾರಿ ಟಿ.ಜಿ. ನರೇಂದ್ರನಾಥ್, ವಿಭಾಗೀಯ ಸಹ ಪ್ರಭಾರಿ ಜಿ.ಎಂ. ಸುರೇಶ್, ಮುಖಂಡರಾದ ಸುರೇಶ್ ಸಿದ್ದಾಪುರ, ಮುರುಳಿ,ಸಿದ್ದೇಶ್‌ಯಾದವ್, ವೆಂಕಟಸ್ವಾಮಿ, ಮಲ್ಲಿಕಾರ್ಜುನ್, ದಗ್ಗೆ ಶಿವಪ್ರಕಾಶ್, ನಾಗರಾಜ್‌ ಬೇದ್ರೆ, ತಿಪ್ಪೇಸ್ವಾಮಿ, ನವೀನ್ ಚಾಲುಕ್ಯ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ವಿ. ತಿಮ್ಮಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT