ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಲಾಕ್‍ಡೌನ್‌ ವಿನಾಯಿತಿ- ಸಂಜೆಯವರೆಗೆ ಅವಕಾಶ

Last Updated 22 ಜೂನ್ 2021, 6:03 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೇರಿದ್ದ ಲಾಕ್‌ಡೌನ್‌ ನಿರ್ಬಂಧವನ್ನು ಇನ್ನಷ್ಟು ಸಡಿಲಗೊಳಿಸಲಾಗಿದ್ದು, ಎಲ್ಲ ರೀತಿಯ ಮಳಿಗೆ, ಅಂಗಡಿಗಳು ಸಂಜೆ 5ಗಂಟೆಯವರೆಗೆ ಬಾಗಿಲು ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿದೆ.

ಕೊರೊನಾ ಸೋಂಕು ದೃಢಪಡುವ ಪ್ರಮಾಣ ಕಡಿಮೆಯಾಗುತ್ತಿರುವ ಪರಿಣಾಮ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಆದರೆ, ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಲಾಕ್‌ಡೌನ್‌ ಮುಂದುವರಿಯಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

‘ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣುತ್ತಿದೆ. ಹೀಗಾಗಿ, ಚಿತ್ರದುರ್ಗ ಜಿಲ್ಲೆಗೂ ಜೂನ್ 20ರ ಮಾರ್ಗಸೂಚಿ ಅನ್ವಯ ವಿನಾಯಿತಿ ನೀಡಲಾಗಿದೆ’ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅಧಿಸೂಚನೆ ಹೊರಡಿಸಿದ್ದಾರೆ.

ಸರ್ಕಾರದ ಹೊಸ ಮಾರ್ಗಸೂಚಿಗಳಲ್ಲಿ ಸೂಚಿಸಲಾಗಿರುವ ಚಟುವಟಿಕೆಗಳಿಗೆ ವಿನಾಯಿತಿಯನ್ನು ನೀಡಲಾಗಿದೆ. ಈ ಆದೇಶವು ಚಿತ್ರದುರ್ಗ ಜಿಲ್ಲೆಯಾದ್ಯಂತ ಜುಲೈ 5ರ ಮುಂಜಾನೆ 5 ರವರೆಗೆ ಜಾರಿಯಲ್ಲಿ ಇರಲಿದೆ. ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ.

ಪ್ರತಿ ದಿನ ಸಂಜೆ 7 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಶುಕ್ರವಾರ ಸಂಜೆ 7 ರಿಂದ ಸೋಮವಾರ ಮುಂಜಾನೆ 5 ರ ವರೆಗೆ ವಾರಾಂತ್ಯದ ಲಾಕ್‌ಡೌನ್‌ ಇರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರವರೆಗೆ ನಿರ್ವಹಿಸಲು ಅನುಮತಿ ನೀಡಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.

‘ಸರ್ಕಾರದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ನಿಯಮಿತವಾಗಿ ಪರಿಸ್ಥಿತಿ ಅವಲೋಕಿಸಿ ಕ್ರಮಕೈಗೊಳ್ಳಲು ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT