ಚಿತ್ರದುರ್ಗ: ‘ಕಳೆದೊಂದು ವರ್ಷದಿಂದ ನಡೆದಿರುವ 2 ರಾಷ್ಟ್ರೀಯ ಲೋಕಅದಾಲತ್‌ನಲ್ಲಿ ಜಿಲ್ಲೆಯ 4,973 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಸೆ.14ರಂದು 3ನೇ ಲೋಕ ಅದಾಲತ್ ನಡೆಯಲಿದ್ದು ಜಿಲ್ಲೆಯ ಕಕ್ಷಿದಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣ ಇತ್ಯರ್ಥಗೊಳಿಸಲು ಮುಂದಾಗಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ ಹೇಳಿದರು.
‘ಕಳೆದ ಲೋಕ್ ಅದಾಲತ್‍ನಲ್ಲಿ 1,16,278 ವ್ಯಾಜ್ಯ ಪೂರ್ವ ಪ್ರಕರಣಗಳ ಜೊತೆಗೆ, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ಜೋಡಿಗಳ ಮನವೊಲಿಸಿ ಒಂದುಗೂಡಿಸಲಾಗಿದೆ. ಈ ಮೂಲಕ ಕೌಟುಂಬಿಕ ಕಲಹದಿಂದ ಕುಟುಂಬದಲ್ಲಿ ಉಂಟಾಗಿದ್ದ ಗೊಂದಲಗಳನ್ನು ಬಗೆಹರಿಸಲಾಗಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದ್ದ 3 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. 1 ಮೋಟಾರ್ ವಾಹನ ಅಪಘಾತ ಪ್ರಕರಣ ಹಾಗೂ 2 ಚೆಕ್‌ಬೌನ್ಸ್ ಪ್ರಕರಣ ಇತ್ಯರ್ಥಪಡಿಸಲಾಗಿದೆ’ ಎಂದರು.
‘ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಕ್ಷಗಾರರು ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಲೋಕ ಅದಾಲತ್‍ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರೆ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ’ ಎಂದರು.
‘ಗಂಭೀರ ಸ್ವರೂಪದ ಅಪರಾಧಿಕ ಪ್ರಕರಣಗಳನ್ನು ಹೊರತುಪಡಿಸಿ ಇತರೆ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು. ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಲೋಕ ಅದಾಲತ್‍ನಲ್ಲಿ ಭಾಗವಹಿಸಬಹುದು’ ಎಂದರು.
ಸಾರ್ವಜನಿಕರು ಲೋಕ ಅದಾಲತ್ ಕುರಿತ ಮಾಹಿತಿಗೆ dlsachitradurga2@gmail.com ಇಮೇಲ್, ಕಾರ್ಯದರ್ಶಿಯವರ ಕಚೇರಿ ಮೊಬೈಲ್ ಸಂಖ್ಯೆ 9141193935, ಕಚೇರಿ ದೂರವಾಣಿ ಸಂಖ್ಯೆ08194- 222322 ಸಂಪರ್ಕಿಸಹಬುದು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.