ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ರಾಜ್ಯೋತ್ಸವದ ಅಂಗವಾಗಿ 4 ಲಕ್ಷ ಜನರಿಂದ ಸಾಮೂಹಿಕ ಗಾಯನ

ಕೋಟಿ ಕಂಠಗಳಲ್ಲಿ ಗೀತೆ ಗಾಯನಕ್ಕೆ ಜಿಲ್ಲೆಯಾದ್ಯಂತ ಸಕಲ ಸಿದ್ಧತೆ
Last Updated 20 ಅಕ್ಟೋಬರ್ 2022, 5:37 IST
ಅಕ್ಷರ ಗಾತ್ರ

ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಬೆಳಿಗ್ಗೆ 11ಕ್ಕೆ ರಾಜ್ಯದಾದ್ಯಂತ ‘ನನ್ನ ನಾಡು ನನ್ನ ಹಾಡು’ ಘೋಷವಾಕ್ಯದೊಂದಿಗೆ ಕೋಟಿ ಕಂಠಗಳಲ್ಲಿ ಗೀತೆ ಗಾಯನ ನಡೆಯಲಿದೆ. ಜಿಲ್ಲೆಯಲ್ಲಿ 4 ಲಕ್ಷ ಜನರಿಂದ ಗೀತ ಗಾಯನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ, ಐತಿಹಾಸಿಕ ಕೋಟೆ, ಬಾಲಕ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಕಾಲೇಜು, ಎಸ್‌.ಆರ್‌.ಎಸ್‌ ಕಾಲೇಜು, ಎಸ್‌.ಜೆ.ಎಂ.ಐ.ಟಿ ಕಾಲೇಜು, ಅರವಿಂದ ಗಾರ್ಮೆಂಟ್ಸ್‌, ನಾಯಕನಹಟ್ಟಿಯ ಗುರು ತಿಪ್ಪೇರುದ್ರ ಸ್ವಾಮಿ ದೇವಸ್ಥಾನ, ಗುಡ್ಡದ ರಂಗವ್ವನಹಳ್ಳಿಯ ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಹೊಸದುರ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್‌.ನಿಜಲಿಂಗಪ್ಪ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಮೊಳಕಾಲ್ಮುರು, ಹಿರಿಯೂರು, ಹೊಳಲ್ಕೆರೆ, ಚಳ್ಳಕೆರೆ ಹಾಗೂ ತಳುಕಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ವಿವರಿಸಿದರು.

‘ಸಾಮೂಹಿಕ ಗೀತ ಗಾಯನ ಜರುಗುವ ಪ್ರತಿ ಸ್ಥಳದಲ್ಲಿ 1000ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ. ಸಾಮೂಹಿಕ ಗೀತ ಗಾಯನದಲ್ಲಿ ಪಾಲ್ಗೊಳ್ಳುವವರು ಅ. 28ರೊಳಗೆ https://kannadasiri.karnataka.gov.in/kkg/public ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು’ ಎಂದು
ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ,‘ಸಂಗೀತ ಶಿಕ್ಷಕರಿಂದ ಹಾಗೂ ಶಿಕ್ಷಣ ಸಂಸ್ಥೆಗಳಿಂದ ಸಾಮೂಹಿಕ ಗೀತ ಗಾಯನ ಮಾಡುವವರ ನೋಂದಣಿ ಅವಕಾಶ ಕೊಡಲಾಗಿದೆ. ಜಿಲ್ಲೆಯ ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಲ್ಲಿ ಸಹ ಗೀತ ಗಾಯನ ಮಾಡಲು ತಿಳಿಸಲಾಗಿದೆ. ಗೀತೆಗಳ ಗಾಯನದ ತರಬೇತಿಗಳನ್ನು ಶಾಲಾ ಕಾಲೇಜುಗಳಲ್ಲಿ ನೀಡಲಾಗುತ್ತಿದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಂಗಸ್ವಾಮಿ, ಉಪವಿಭಾಗಾಧಿಕಾರಿ ಚಂದ್ರಯ್ಯ, ಡಿವೈಎಸ್‌ಪಿ ತಿಪ್ಪೇಸ್ವಾಮಿ ಇದ್ದರು.

ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ

ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ.1 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅದಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 7.30ಕ್ಕೆ ಕನ್ನಡಾಂಬೆ ಭಾವಚಿತ್ರದ ಮೆರವಣಿಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ನಮ್ಮ ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಬೆಳಿಗ್ಗೆ 9 ಗಂಟೆಗೆ ಪೊಲೀಸ್‌ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಜೆ ತ.ರಾ.ಸು. ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT