ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜು, ಬಡವರ ಪರ ಬಜೆಟ್‌ಗೆ ಆಗ್ರಹ

ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಎರಡು ಸಂಘಟನೆಗಳಿಂದ ಪ್ರತಿಭಟನೆ
Last Updated 3 ಮಾರ್ಚ್ 2021, 13:18 IST
ಅಕ್ಷರ ಗಾತ್ರ

ಚಿತ್ರದುರ್ಗ: ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ, ಬಡವರ ಪರ ಬಜೆಟ್‌ ಮಂಡಿಸಬೇಕು ಎಂದು ಆಗ್ರಹಿಸಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ವೃತ್ತದ ಬಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ ಅವರ ಮೂಲಕ ಮನವಿ ರವಾನಿಸಿದರು.

ದಿನಗೂಲಿ ಮತ್ತು ವಲಸೆ ಕಾರ್ಮಿಕರು, ಮನೆ ಕೆಲಸದ ಮಹಿಳೆಯರು, ಬೀದಿ ಬದಿ ವ್ಯಾಪಾರಿಗಳು, ಅಸಂಘಟಿತ ಕಾರ್ಮಿಕರಿಗೆ ಕೋವಿಡ್‌ ಕಾರಣದಿಂದಾಗಿ ಹತ್ತುತಿಂಗಳು ಕೆಲಸ ಇಲ್ಲ. ಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಮಾನವ ಹಕ್ಕುಗಳ ವೇದಿಕೆ ಕಾರ್ಯಕರ್ತರು ಅಳಲು ತೋಡಿಕೊಂಡರು.

ವೇದಿಕೆ ರಾಜ್ಯ ಸಂಚಾಲಕ ಎಚ್.ಎನ್.ಶಿವಮೂರ್ತಿ ಭೀಮನಕೆರೆ, ‘ಕಾರ್ಮಿಕರು ಕೆಲಸ ಕಳೆದುಕೊಂಡು ಭೀತಿಯಲ್ಲಿ ದಿನ ದೂಡುತ್ತಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಗೆ ವಿಶೇಷ ಅನುದಾನ ಬಿಡುಗಡೆಗೊಳಿಸಬೇಕು. ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಪ್ರತಿ ತಿಂಗಳು ₹ 2 ಸಾವಿರ ಮಾಸಾಶನ ನೀಡಬೇಕು’ ಎಂದು ಒತ್ತಾಯಿಸಿದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯಕ್ಕೆ ₹ 10 ಲಕ್ಷದವರೆಗೂ ವಿಶೇಷ ಅನುದಾನವನ್ನು ಬಜೆಟ್‌ನಲ್ಲೇ ಘೋಷಿಸಬೇಕು’ ಎಂದು ಕೋರಿದರು.

ಜಿಲ್ಲಾ ಸಂಚಾಲಕ ಎನ್.ಪ್ರಕಾಶ್, ಪಿ.ರೇಣುಕಮ್ಮ, ಎಚ್.ಭೀಮಣ್ಣ, ಪಿ.ಜಯಣ್ಣ, ಎಲ್.ತಿಮ್ಮಕ್ಕ, ರಾಜಣ್ಣ ಇದ್ದರು.

ನವ ನಿರ್ಮಾಣ ಸೇನೆ: ಚಿತ್ರದುರ್ಗ ನಗರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಟ್ಟು ಭೂಮಿ ಪೂಜೆ ತ್ವರಿತವಾಗಿ ನೆರವೇರಿಸಬೇಕು ಎಂದು ನವ ನಿರ್ಮಾಣ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲೆ ಬರಪೀಡಿತ ಪ್ರದೇಶವಾಗಿದ್ದು, ಅತಿ ಹೆಚ್ಚು ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ವಾಸಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ಬಗೆಯ ಚಿಕಿತ್ಸೆ ದೊರಯುತ್ತಿಲ್ಲ. ಬೆಂಗಳೂರು, ದಾವಣಗೆರೆ, ಉಡುಪಿಯ ಮಣಿಪಾಲ್‌ಗೆ ರೋಗಿಗಳನ್ನು ಕರೆದುಕೊಂಡು ಹೋಗುವಂತೆ ಹೇಳಿ ಇಲ್ಲಿನ ವೈದ್ಯರು ಜವಾಬ್ದಾರಿಯಿಂದ ನುಣುಕೊಳ್ಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಸೇನೆಯ ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್, ‘ದೊಡ್ಡಬಳ್ಳಾಪುರ, ಉಡುಪಿ, ಕೊಪ್ಪಳ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಅದೇ ರೀತಿ ಚಿತ್ರದುರ್ಗಕ್ಕೂ ಆದ್ಯತೆ ನೀಡಬೇಕು. ಒಂದು ವೇಳೆ ಬಜೆಟ್‌ನಲ್ಲಿ ಅನುದಾನ ಮೀಸಲಿಡದಿದ್ದರೆ, ಜಿಲ್ಲೆಯ ಎಲ್ಲಾ ಶಾಸಕರ ಮನೆಗಳ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸೇನೆ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ವೀಣಾ ಗೌರಣ್ಣ, ತಾಲ್ಲೂಕು ಅಧ್ಯಕ್ಷ ಟಿ.ಆನಂದ್, ವಿನೋದಮ್ಮ, ನಾಗೇಂದ್ರಮ್ಮ, ರತ್ನಮ್ಮ, ಸುನಂದಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT