ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಸೇವೆ ಮುಂದುವರಿಸಲು ಒತ್ತಾಯಿಸಿ ಪ್ರತಿಭಟನೆ

ಕೋವಿಡ್‌ ನಿರ್ವಹಣೆಗೆ ನಿಯೋಜನೆಗೊಂಡಿದ್ದ ವೈದ್ಯಕೀಯ ಸಿಬ್ಬಂದಿ
Last Updated 18 ಮಾರ್ಚ್ 2022, 13:54 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೋವಿಡ್‌ ನಿರ್ವಹಣೆಗೆ ಗುತ್ತಿಗೆ ಆಧಾರದ ಮೇರೆಗೆ ನಿಯೋಜನೆಗೊಂಡಿದ್ದ ವೈದ್ಯಕೀಯ ಸಿಬ್ಬಂದಿಯ ಸೇವೆಯನ್ನು ಮುಂದುವರಿಸುವಂತೆ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘ ಶುಕ್ರವಾರ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಕೆಲಸ ಕಳೆದುಕೊಳ್ಳುವ ಆತಂಕವನ್ನು ಹೊರಹಾಕಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ (ಎನ್‌ಎಚ್‌ಎಂ) ಅಡಿಯಲ್ಲಿ ಕೆಲಸಕ್ಕೆ ನಿಯೋಜಿಸುವಂತೆ ಒತ್ತಾಯಿಸಿದರು.

ಕೋವಿಡ್‌ ಉತ್ತುಂಗದ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಸೋಂಕಿತರಿಗೆ ತುರ್ತು ಹಾಗೂ ಉತ್ತಮ ಸೇವೆ ನೀಡುವ ಉದ್ದೇಶದಿಂದ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ. ಶುಶ್ರೂಷಕರು, ಪ್ರಯೋಗಾಲಯ ಸಿಬ್ಬಂದಿ, ಫಾರ್ಮಸಿಸ್ಟ್‌, ದತ್ತಾಂಶ ನಮೂದಕರು, ಕ್ಷ–ಕಿರಣ ತಂತ್ರಜ್ಞರು ಹಾಗೂ ಡಿ ಗ್ರೂಪ್‌ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಅನುದಾನದಡಿ ನೇಮಕಗೊಂಡವರ ಅವಧಿ ಮಾರ್ಚ್‌ 31ಕ್ಕೆ ಕೊನೆಯಾಗಲಿದೆ ಎಂದು ಆತಂಕ ಹೊರಹಾಕಿದರು.

ಕೋವಿಡ್‌ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇವೆ. ಕುಟುಂಬದಿಂದ ದೂರ ಉಳಿದು ವೈದ್ಯಕೀಯ ಸೇವೆ ಒದಗಿಸಿದ್ದೇವೆ. ಅನೇಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯೋಗ ಕಳೆದುಕೊಂಡರೆ ತೊಂದರೆ ಉಂಟಾಗುತ್ತದೆ. ಜೀವನ ನಿರ್ವಹಣೆಗೆ ಪರದಾಡುವ ಸ್ಥಿತಿ ಸೃಷ್ಟಿಯಾಗುತ್ತದೆ. ಮಾನವೀಯ ದೃಷ್ಟಿಯಿಂದ ಕೆಲಸದಲ್ಲಿ ಮುಂದುವರಿಯಲು ಸರ್ಕಾರ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಕೊರೊನಾ ವಾರಿಯರ್ಸ್‍ಗಳಾಗಿ ಕರ್ತವ್ಯ ನಿರ್ವಹಿಸಿರುವ ಎಲ್ಲಾ ಸಿಬ್ಬಂದಿಯನ್ನು ಮಾರ್ಚ್‌ 31ನಂತರವೂ ಮುಂದುವರಿಸಬೇಕು. ಜಿಲ್ಲೆಗೆ ಮಂಜೂರಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಾತಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದವರನ್ನು ಪರಿಗಣಿಸಬೇಕು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ಮುಖಂಡ ಪ್ರತಾಪ್‌ ಜೋಗಿ,ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷ ರುದ್ರಮುನಿ.ಕೆ.ಬಿ, ಕಾರ್ಯದರ್ಶಿ ರಾಜಕೋಟೇಶ್ವರರಾವ್, ಖಜಾಂಚಿ ವೀರೇಶ್.ಎನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT