ಚಿತ್ರದುರ್ಗ: ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು ಸೋಮವಾರ ಎಚ್ಚರಿಕೆ ನೀಡಿದರು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಸೇರಿದ ಒಕ್ಕೂಟದ ಸದಸ್ಯರು ರಾಜ್ಯಪಾಲರು, ಬಿಜೆಪಿ, ಜೆಡಿಎಸ್ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾಮಾಜಿಕ ನ್ಯಾಯದ ಹರಿಕಾರ ಎನಿಸಿರುವ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ಸ್ವಚ್ಛ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿಗಳ ತೇಜೋವಧೆ ಮಾಡಲಾಗುತ್ತಿದೆ. ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಇದೇ ಪ್ರವೃತ್ತಿ ಮುಂದುವರಿಸಿದರೆ ಶೋಷಿತ ಸಮುದಾಯಗಳು ಬೀದಿಗಿಳಿದು ಹೋರಾಟ ನಡೆಸಲಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪಾತ್ರ ಇಲ್ಲ. ಅವರ ಪತ್ನಿ ನ್ಯಾಯಯುತವಾಗಿ ನಿವೇಶನ ಪಡೆದಿದ್ದಾರೆ. ಎಲ್ಲಾ ಪಕ್ಷಗಳ ಮುಖಂಡರು 50:50 ನಿಯಮದಂತೆ ನಿವೇಶನ ಪಡೆದಿದ್ದಾರೆ. ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ರಾಜಕಾರಣ ಮಾಡಿರುವ ಸಿದ್ದರಾಮಯ್ಯ ಅವರ ವಿರುದ್ಧ ಅಪಚಾರ ಎಸಗಲು ಯತ್ನಿಸುತ್ತಿರುವುದು ಖಂಡನೀಯ ಎಂದರು.
ರಾಜ್ಯಪಾಲರ ಪ್ರತಿಕೃತಿ ದಹನ
ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕಾದ ರಾಜ್ಯಪಾಲರು ಬಿಜೆಪಿಯ ಏಂಜೆಂಟರಂತೆ ವರ್ತಿಸುತ್ತಿದ್ದಾರೆ. ಅವರ ವಿರುದ್ಧ ಬೆಂಗಳೂರು ಚಲೋ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.