ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳ್ಳಿಗೆ ತೆರಳಿ ಲಸಿಕೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ತಾಕೀತು

Last Updated 9 ಆಗಸ್ಟ್ 2021, 11:24 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೋವಿಡ್‌ನಿಂದ ಜನರನ್ನು ರಕ್ಷಿಸುವ ಉದ್ದೇಶದಿಂದ ಆರಂಭಿಸಿದ ಲಸಿಕೆ ಅಭಿಯಾನ ನಿರೀಕ್ಷಿತ ಪ್ರಗತಿ ಸಾಧಿಸದಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಸಮಾಧಾನ ವ್ಯಕ್ತಪಡಿಸಿದರು. ಜನರ ಮನವೊಲಿಸಿ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೃಷಿ, ತೋಟಗಾರಿಕೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೊರೊನಾ ಸೋಂಕಿನ ಮೂರನೇ ಅಲೆಗೆ ಸಂಬಂಧಿಸಿದಂತೆ ಮಾಡಿಕೊಂಡ ಸಿದ್ಧತೆಗಳ ಬಗ್ಗೆ ಚರ್ಚಿಸಿದರು.

‘ಕೋವಿಡ್‌ ಮೂರನೇ ಅಲೆಯ ಬಗ್ಗೆ ಖಚಿತತೆ ಇಲ್ಲ. ಮತ್ತೊಂದು ಅಲೆ ಬರಬಹುದೆಂದು ತಜ್ಞರು ಊಹೆ ಮಾಡಿದ್ದಾರೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಆಗಿರುವ ತೊಂದರೆಗಳು ಮೂರನೇ ಅಲೆಯ ಸಂದರ್ಭದಲ್ಲಿ ಆಗಬಾರದು. ಇದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವ ಅಗತ್ಯವಿದೆ. ಕೋವಿಡ್‌ ನಿಯಂತ್ರಣ ಕಾರ್ಯಕ್ಕೆ ಹಣಕಾಸಿನ ತೊಂದರೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ 49 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಶೇ 46 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದಾರೆ. ಅರ್ಧದಷ್ಟು ಜನರಿಗೂ ಲಸಿಕೆ ನೀಡಲು ಸಾಧ್ಯವಾಗಿಲ್ಲ. ಲಸಿಕೆ ಪಡೆಯದೇ ಇರುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಮನವೊಲಿಸಿ. ಔಷಧ, ಉಪಕರಣ, ಪರೀಕ್ಷಾ ಯಂತ್ರಗಳನ್ನು ಸಿದ್ಧಪಡಿಸಿಕೊಳ್ಳಿ’ ಎಂದು ತಾಕೀತು ಮಾಡಿದರು.

‘ಜಿಲ್ಲೆಯ ಪ್ರವಾಸಿತಾಣಗಳಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಈ ತಾಣಗಳ ಮೇಲೆ ನಿಗಾ ಇಡುವ ಅಗತ್ಯವಿದೆ. ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕಿದೆ. ಮಕ್ಕಳ ವೈದ್ಯರ ಪಾತ್ರ ಮಹತ್ವದ್ದಾಗಿದ್ದು, ಎಲ್ಲ ವೈದ್ಯರಿಗೆ ತರಬೇತಿ ನೀಡಿ. ರೋಗಿಗಳ ಪರೀಕ್ಷೆಗೆ ಖಾಸಗಿ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆಯೂ ಆಲೋಚಿಸಿ’ ಎಂದರು.

ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ, ‘ಕೋವಿಡ್‌ ನಿಯಂತ್ರಣದಲ್ಲಿದೆ. ಜನದಟ್ಟಣೆಯನ್ನು ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದೇಗುಲಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿ ಪೂಜೆ, ಪ್ರಸಾದ ವಿನಿಯೋಗಕ್ಕೆ ನಿರ್ಬಂಧ ವಿಧಿಸುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.

5 ಸಾವಿರ ಹೆಕ್ಟೇರ್‌ ಬೆಳೆ ಹಾನಿ

ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಸುರಿದ ಪರಿಣಾಮ ಜಿಲ್ಲೆಯ 5,069 ಹೆಕ್ಟೇರ್‌ ಪ್ರದೇಶದ ಬೆಳೆ ಹಾನಿಯಾಗಿದೆ. ಇದರಲ್ಲಿ 4,992 ಹೆಕ್ಟೇರ್‌ ಈರುಳ್ಳಿ ನಷ್ಟವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಡಾ.ಸವಿತಾ ಮಾಹಿತಿ ನೀಡಿದರು.

‘ಪ್ರಸಕ್ತ ವರ್ಷ 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ. ಮಳೆ ಹೆಚ್ಚು ಸುರಿದ ಪರಿಣಾಮ ಕೊಳೆ ರೋಗ ಕಾಣಿಸಿಕೊಂಡು ಈರುಳ್ಳಿ ಹಾಳಾಗುತ್ತಿದೆ. ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಪ್ರಕಾರ ಎಕರೆಗೆ ₹ 13,500 ಪರಿಹಾರ ಸಿಗಬಹುದು’ ಎಂದರು.

ಶ್ರೀರಾಮುಲು ಪ್ರತಿಕ್ರಿಯಿಸಿ, ‘ಪ್ರತಿ ಎಕರೆ ಈರುಳ್ಳಿ ಬೆಳೆಯಲು ₹ 40 ಸಾವಿರ ವೆಚ್ಚವಾಗುತ್ತದೆ. ಹೆಚ್ಚು ಮಳೆಯಾದರೆ ಈರುಳ್ಳಿ ಹಾನಿಯಾಗುತ್ತದೆ. ಈರುಳ್ಳಿ ಬದಲು ಪರ್ಯಾಯ ಬೆಳೆ ಬೆಳೆಯುವಂತೆ ರೈತರ ಮನವೊಲಿಸಬೇಕು’ ಎಂದು ಸೂಚನೆ ನೀಡಿದರು.

ದಂಡ ವಸೂಲಿಗೆ ಉಪಕರಣ

ಮಾಸ್ಕ್‌ ಧರಿಸದ ಹಾಗೂ ಅಂತರ ಕಾಯ್ದುಕೊಳ್ಳದೇ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸುವವರಿಂದ ದಂಡ ವಸೂಲಿ ಮಾಡಲು ಹೊಸ ಉಪಕರಣದ ನೆರವು ಪಡೆಯಲಾಗಿದೆ. ಇದರಿಂದ ದಂಡ ವಸೂಲಿ ಪ್ರಮಾಣ ಹೆಚ್ಚಾಗಿದೆ.

‘ದಂಡ ವಸೂಲಿ ಮಾಡಿ ರಸೀತಿ ನೀಡಲು ತಾಂತ್ರಿಕ ತೊಡಕು ಎದುರಾಗಿತ್ತು. ದಂಡ ವಸೂಲಿಗೆ ಉಪಕರಣವೊಂದನ್ನು ನೀಡಲು ಎಚ್‌ಡಿಎಫ್‌ಸಿ ಬ್ಯಾಂಕ್‌ ಮುಂದೆ ಬಂದಿದೆ. ಅದೇ ಬ್ಯಾಂಕಿನಲ್ಲಿ ಜಿಲ್ಲಾಧಿಕಾರಿ ಹೆಸರಿನಲ್ಲಿ ಖಾತೆ ತೆರೆದು 75 ಉಪಕರಣ ಪಡೆಯಲಾಗಿದೆ. 200 ಉಪಕರಣ ನೀಡುವಂತೆ ಬ್ಯಾಂಕಿಗೆ ಕೇಳಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಮಾಹಿತಿ ನೀಡಿದರು.

‘ನಗದು ರಹಿತವಾಗಿಯೂ ದಂಡ ಪಾವತಿಸಲು ಅವಕಾಶವಿದೆ. ಕಾರ್ಡ್‌ ಬಳಸಿಯೂ ದಂಡದ ಮೊತ್ತವನ್ನು ಪಾವತಿಸುವ ಅವಕಾಶ ಸಾರ್ವಜನಿಕರಿಗೆ ಸಿಕ್ಕಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನಂದಿನಿದೇವಿ, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಇದ್ದರು.


***

ಜಿಲ್ಲಾ ಆಸ್ಪತ್ರೆಯಲ್ಲಿ ನವಜಾತ ಶಿಶು ತೀವ್ರನಿಗಾ ಘಟಕವಿದೆ. ಮಕ್ಕಳ ತೀವ್ರ ನಿಗಾ ಘಟಕ ಸ್ಥಾಪಿಸುವ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುಮೋದನೆ ದೊರೆತರೆ ಅನುಕೂಲ.

ಡಾ.ಆರ್‌.ರಂಗನಾಥ್‌

ಜಿಲ್ಲಾ ಆರೋಗ್ಯಾಧಿಕಾರಿ

***

ಬಾಲಕಿಯ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ಕೊನೆಯ ಹಂತ ತಲುಪಿದೆ. ತಜ್ಞರ ವರದಿ ಬರುವುದು ಬಾಕಿ ಇದೆ. ವಾರದೊಳಗೆ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗುತ್ತದೆ.

ಜಿ.ರಾಧಿಕಾ

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT