ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ವಾಂತಿ, ಭೇದಿ ಪ್ರಕರಣ: ಸಚಿವ ಸುಧಾಕರ್‌ ಕಾರಿಗೆ ಮುತ್ತಿಗೆ

ಪರಿಹಾರಕ್ಕೆ ಪಟ್ಟುಹಿಡಿದ ಪ್ರತಿಭಟನಕಾರರು, ನಿಷ್ಪಕ್ಷಪಾತ ತನಿಖೆಗೆ ಆಗ್ರಹ
Published 2 ಆಗಸ್ಟ್ 2023, 5:31 IST
Last Updated 2 ಆಗಸ್ಟ್ 2023, 5:31 IST
ಅಕ್ಷರ ಗಾತ್ರ

ಚಿತ್ರದುರ್ಗ: ವಾಂತಿ–ಭೇದಿ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬ ಹಾಗೂ ಅಸ್ವಸ್ಥಗೊಂಡವರಿಗೆ ನ್ಯಾಯಯುತ ಪರಿಹಾರ ನೀಡಬೇಕು ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಪಟ್ಟುಹಿಡಿದು ಕವಾಡಿಗರಹಟ್ಟಿಯ ಜನರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಕಾರು ತಡೆದು ಪ್ರತಿಭಟನೆ ನಡೆಸಿದರು.

ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ರಾತ್ರಿ ಭೇಟಿ ನೀಡಿದ ಸಚಿವರು, ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು. ಮಕ್ಕಳ ವಿಭಾಗ, ಯುರಾಲಜಿ, ತುರ್ತು ಚಿಕಿತ್ಸಾ ಘಟಕಗಳಿಗೆ ತೆರಳಿ ಮಾಹಿತಿ ಪಡೆದರು. ಅಸ್ವಸ್ಥರ ಆರೋಗ್ಯ ಸುಧಾರಿಸುವವರೆಗೂ ಚಿಕಿತ್ಸೆ ಮುಂದುವರಿಸುವಂತೆ ವೈದ್ಯರಿಗೆ ನಿರ್ದೇಶನ ನೀಡಿದರು.

‘ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರವಾಗಿ ಪರಿಹಾರ ನೀಡಲಾಗುವುದು. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ಸತ್ಯಾಸತ್ಯೆ ತಿಳಿಯಲಿದೆ’ ಎಂದು ಮಾಧ್ಯಮ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಸ್ಥಳದಲ್ಲಿ ಜಮಾಯಿಸಿದ್ದ ಜನರು ಇದರಿಂದ ಕು‍ಪಿತಗೊಂಡರು. ₹ 25 ಲಕ್ಷ ಪರಿಹಾರದ ಮೊತ್ತವನ್ನು ತಕ್ಷಣವೇ ಘೋಷಣೆ ಮಾಡುವಂತೆ ಪಟ್ಟುಹಿಡಿದರು. ಸಚಿವರು ಸಮಜಾಯಿಷಿ ನೀಡುತ್ತ ಕಾರು ಏರಲು ಮುಂದಾದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಕಾರರು ಕಾರು ತಡೆದು ಧರಣಿ ಕುಳಿತರು. ಸಚಿವರ ವಿರುದ್ಧ ಧಿಕ್ಕಾರ ಕೂಗಿದರು. ಪೊಲೀಸರು ಹಾಗೂ ಹರಳಯ್ಯ ಗುರುಪೀಠದ ಬಸವ ಹರಳಯ್ಯ ಸ್ವಾಮೀಜಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

‘ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ನೀಡಲಾಗುವುದು. ವೈಯಕ್ತಿಕವಾಗಿಯೂ ನೆರವು ನೀಡಲಾಗುವುದು’ ಎಂದು ಸಚಿವರು ಭರವಸೆ ನೀಡಿದರು. ಬಳಿಕ ಕಾರು ತೆರಳಲು ಪ್ರತಿಭಟನಕಾರರು ಅವಕಾಶ ಮಾಡಿಕೊಟ್ಟರು.

ಸಚಿವರು ಕವಾಡಿಗರಹಟ್ಟಿಗೆ ತೆರಳಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT