ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕಾರಣ ಬಿಟ್ಟು ಕರ್ತವ್ಯ ನಿರ್ವಹಿಸಿ : ಶಾಸಕ ಟಿ.ರಘುಮೂರ್ತಿ ಕಿವಿಮಾತು

ಸರ್ಕಾರಿ ನೌಕರರಿಗೆ ಶಾಸಕ ಟಿ.ರಘುಮೂರ್ತಿ ಕಿವಿಮಾತು
Published 25 ಜುಲೈ 2023, 6:05 IST
Last Updated 25 ಜುಲೈ 2023, 6:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಸರ್ಕಾರಿ ನೌಕರರಿಗೆ ರಾಜಕಾರಣ ಬೇಕಾಗಿಲ್ಲ. ಯಾವುದೇ ಸರ್ಕಾರವಿರಲಿ ನೌಕರರು ಪ್ರಾಮಾಣಿಕವಾಗಿ ತಮ್ಮ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಲಸಹೆ ನೀಡಿದರು.

ನಗರದ ತರಾಸು ರಂಗಮಂದಿರದಲ್ಲಿ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸರ್ಕಾರದಲ್ಲಿ ನಾವೂ ಒಬ್ಬರು ಎಂಬ ಮನೋಭಾವದಿಂದ ನೌಕರರು ಸೇವೆ ಸಲ್ಲಿಸಬೇಕು. ಸಾರ್ವಜನಿಕರ ಬಗ್ಗೆ ಕಾಳಜಿ ಹೊಂದಬೇಕು. ಸಮಾಜ ಸೇವೆಗೆ ಇದು ಉತ್ತಮ ಅವಕಾಶ. ನೌಕರರು, ಜನಪ್ರತಿನಿಧಿಗಳು ಎರಡು ಚಕ್ರಗಳಿದ್ದಂತೆ. ಸರ್ಕಾರದ ಜೊತೆಗಿದ್ದು, ನೌಕರರು ತಮ್ಮ ವೃತ್ತಿಯನ್ನು ಮಾಡಬೇಕು’ ಎಂದು ಸಲಹೆ ನೀಡಿದರು.

ಇಚ್ಚಾಶಕ್ತಿ, ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು. ರಾಜ್ಯ ಸರ್ಕಾರಿ ನೌಕರರ ಆಶ್ವಾಸನೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮವಹಿಸಲಿದೆ ಎಂದು ಭರವಸೆ ನೀಡಿದರು.

ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ನೀಡಿದ ಭರವಸೆಯನ್ನು ಸರ್ಕಾರ ರಚಿಸಿದ ಬಳಿಕ ಜಾರಿಗೊಳಿಸಲಾಗುತ್ತಿದೆ. ಮಹತ್ವಾಕಾಂಕ್ಷಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಯಶಸ್ವಿಗೊಳಿಸಲು ರಾಜ್ಯ ಸರ್ಕಾರಿ ನೌಕರರು ಹೆಚ್ಚಿನ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ ಹೇಳಿದರು.

ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕ್ಕೆ ಸೀಮಿತವಾಗದೇ ಸಾಮಾನ್ಯ ವಿಷಯಕ್ಕೂ ಹೆಚ್ಚಿನ ಗಮನಹರಿಸಬೇಕು. ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಪ್ರಚಲಿತ ಘಟನೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

7ನೇ ವೇತನ ಆಯೋಗ ಜಾರಿ ಹಾಗೂ ಎನ್‌ಪಿಎಸ್‌ನಿಂದ ಒಪಿಎಸ್‌ ಜಾರಿ ವಿಚಾರವನ್ನು ಸರ್ಕಾರ ಸಹಾನುಭೂತಿಯಿಂದ ಪರಿಗಣಿಸಬೇಕು. ಇದರಿಂದ ರಾಜ್ಯದ 3 ಲಕ್ಷ ಎನ್‌ಪಿಎಸ್‌ ನೌಕರರ ಕುಟುಂಬಕ್ಕೆ ಭದ್ರತೆ ಸಿಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿ ವರ್ಷ ರಾಜ್ಯದಲ್ಲಿ 8 ಸಾವಿರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು 250 ಮಕ್ಕಳಿಗೆ ತಲಾ ₹ 1,000 ನಗದು, ಸ್ಮರಣಿಕೆ ನೀಡಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.

‘ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕೇವಲ ಸರ್ಕಾರಿ ನೌಕರಿ ಪಡೆಯಲು ಮಾತ್ರ ವಿದ್ಯಾಭ್ಯಾಸ ಮಾಡದೆ ವೃತ್ತಿ ಕೌಶಲ ಬೆಳೆಸಿಕೊಳ್ಳಲು ಮುಂದಾಗಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸಲಹೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌, ಶಾಸಕ ಟಿ.ರಘುಮೂರ್ತಿ ಅವರನ್ನು ಸನ್ಮಾನಿಸಲಾಯಿತು. ವಿಧಾನಪರಿಷತ್‌ ಸದಸ್ಯ ಕೆ.ಎಸ್‌. ನವೀನ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್‌, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ತಿಮ್ಮಾರೆಡ್ಡಿ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್‌ ಕೆ.ಜಿ. ಜಗದೀಶ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್‌ ರೆಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌. ರಾಜು, ಸಂಘದ ಹಿರಿಯ ಉಪಾಧ್ಯಕ್ಷ ಎಂ.ಸಿ. ರುದ್ರಪ್ಪ, ಎಸ್‌.ಬಸವರಾಜ್‌, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ್‌ ಬಳ್ಳಾರಿ, ರಾಜ್ಯ ಕಾರ್ಯದರ್ಶಿ ಸದಾನಂದ ನೆಲ್ಕುದರಿ, ಕಾರ್ಯದರ್ಶಿ ವೇಣುಗೋಪಾಲ್‌ ಇದ್ದರು.

ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ. ಇದರಿಂದ ಅವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ

- ಡಿ.ಸುಧಾಕರ್‌ ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT