ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿಕ್ಷಾಟನೆ ತೊರೆದು ಸ್ವಾವಲಂಬನೆ ಬೆಳೆಸಿಕೊಳ್ಳಿ: ಸಂಸದ ಎ.ನಾರಾಯಣಸ್ವಾಮಿ

ಲಿಂಗತ್ವ ಅಲ್ಪಸಂಖ್ಯಾತರಿಗೆ ಸಂಸದ ಎ.ನಾರಾಯಣಸ್ವಾಮಿ ಸಲಹೆ
Last Updated 8 ಜೂನ್ 2021, 13:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಲಿಂಗತ್ವ ಅಲ್ಪಸಂಖ್ಯಾತರು ಭಿಕ್ಷಾಟನೆ ತೊರೆದು ಸ್ವಾವಲಂಬನೆ ಬೆಳೆಸಿಕೊಳ್ಳಬೇಕು. ಸ್ವಯಂ ಉದ್ಯೋಗಕ್ಕೆ ಅಗತ್ಯ ಇರುವ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.

ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಆವರಣದಲ್ಲಿ ಮಂಗಳವಾರ 47 ಜನ ಲಿಂಗತ್ವ ಅಲ್ಪಸಂಖ್ಯಾರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.

‘ಸಮಾಜ ಕಲ್ಯಾಣ ಇಲಾಖೆಯ ಸಚಿವನಾಗಿ ಕೆಲಸ ಮಾಡಿದ್ದೇನೆ. ದಲಿತ ಸಮುದಾಯದಲ್ಲಿ ಬೆಳೆದು ಬಂದಿರುವ ನಾನು ಭಿಕ್ಷಾಟನೆಯನ್ನು ಒಪ್ಪುವುದಿಲ್ಲ. ಭಿಕ್ಷಾಟನೆ ತೊರೆಯಲು ನೆರವು ನೀಡುತ್ತೇವೆ. ಆಸಕ್ತಿ ಇರುವವರು ಮುಂದೆ ಬಂದರೆ ಸ್ವಯಂ ಉದ್ಯೋಗಕ್ಕೆ ಬೆಂಬಲ ನೀಡುತ್ತೇವೆ’ ಎಂದು ಆಶ್ವಾಸನೆ ನೀಡಿದರು.

‘ಅನೇಕರು ನಿವೇಶನ ಹಾಗೂ ವಸತಿ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸೌಲಭ್ಯ ಕಲ್ಪಿಸಲು ಸಾಧ್ಯವಿದೆ. ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಬೇಡಿಕೆಯ ಮನವಿಯನ್ನು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿ. ಲಾಕ್‌ಡೌನ್‌ ತೆರವಾದ ಬಳಿಕ ಸಭೆ ನಡೆಸಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇಲ್ಲವಾದರೆ ಸ್ವಂತ ನೆರವು ನೀಡಲು ಸಿದ್ಧನಿದ್ದೇನೆ’ ಎಂದು ಹೇಳಿದರು.

ಲಸಿಕೆಗೆ ಸಲಹೆ:‘ಕೋವಿಡ್‌ ಮೂರನೇ ಅಲೆ ಕಾಣಿಸಿಕೊಂಡರೆ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ, ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಅಗತ್ಯವಿದೆ. ಲಸಿಕೆ ಪಡೆಯುವಂತೆ ಜನರ ಮನವೊಲಿಸುವ ಅಗತ್ಯವಿದೆ. ಸರ್ಕಾರಿ ಅಧಿಕಾರಿಗಳು ಬಡ ಜನರ ಮನೆಯ ಬಾಗಿಲಿಗೆ ತೆರಳಬೇಕು’ ಎಂದು ಹೇಳಿದರು.

‘ಚಳ್ಳಕೆರೆ ತಾಲ್ಲೂಕಿನ ಹಿರೇಹಳ್ಳಿ ಹಾಗೂ ಬಂಜಗೆರೆಗೆ ಭೇಟಿ ನೀಡಿದ್ದೆ. ಲಸಿಕೆ ಹಾಕಿಸಿಕೊಳ್ಳಲು ಜನರು ಮುಂದೆ ಬರುತ್ತಿಲ್ಲ ಎಂಬುದನ್ನು ಕಣ್ಣಾರೆ ಕಂಡಿದ್ದೇನೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಲ್ಲಿ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಮೂಡಿದೆ. ಈ ಭಾವನೆಯನ್ನು ಹೋಗಲಾಡಿಸಿ ಲಸಿಕೆ ನೀಡುವ ಜವಾಬ್ದಾರಿ ಸರ್ಕಾರಿ ಅಧಿಕಾರಿಗಳ ಮೇಲಿದೆ’ ಎಂದರು.

‘ಸಿಎಂ ಬದಲಾವಣೆ ಅಪ್ರಸ್ತುತ’

ಸಮರ್ಥ ಆಡಳಿತ ನಡೆಸುತ್ತಿರುವ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಚರ್ಚೆ ಬಿಜೆಪಿಯಲ್ಲಿ ನಡೆಯುತ್ತಿಲ್ಲ. ಇದಕ್ಕಾಗಿ ಯಾರಾದರೂ ದೆಹಲಿಗೆ ಹೋದರೆ ಅದು ಹುಚ್ಚುತನ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಅನುಭವಿ ರಾಜಕಾರಣಿ. ನಿನ್ನೆ, ಮೊನ್ನೆ ರಾಜಕೀಯಕ್ಕೆ ಬಂದವರಲ್ಲ. 40 ವರ್ಷದಿಂದ ರಾಜಕಾರಣದಲ್ಲಿರುವ ಅವರಿಗೆ ಮುತ್ಸದ್ಧಿತನ ಬೆಳೆದಿದೆ. ಎಲ್ಲವನ್ನೂ ಸರಿ ಮಾಡುವ ಸಾಮರ್ಥ್ಯ ಅವರಲ್ಲಿದೆ. ಪಕ್ಷದೊಳಗಿನ ಭಿನ್ನಮತ ಶೀಘ್ರವೇ ಶಮನವಾಗಲಿದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರೊಬ್ಬರೂ ಮಾತನಾಡಬಾರದು. ಸಹಿ ಸಂಗ್ರಹ ಮಾಡುವುದು ತಪ್ಪು ಎಂಬುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್‌ ಕಟೀಲ್‌ ಸ್ಪಷ್ಟಪಡಿಸಿದ್ದಾರೆ. ಇಂತಹ ಬೆಳವಣಿಗೆಗಳು ನಡೆಯಬಾರದು’ ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುರುಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT