ಮಂಗಳವಾರ, ಜನವರಿ 19, 2021
27 °C
ಮುಖ್ಯಮಂತ್ರಿಗೆ ಕಾಂಗ್ರೆಸ್‌ ಮುಖಂಡ ಕೆ.ಎಚ್‌.ಮುನಿಯಪ್ಪ ಸಲಹೆ

ರೈಲ್ವೆ ಯೋಜನೆ ಸಾಕಾರಕ್ಕೆ ಮುಂದಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕಾರ್ಯಪ್ರವೃತ್ತರಾಗಿ ಅಗತ್ಯ ಅನುದಾನ ಮಂಜೂರು ಮಾಡಿ ಎಂದು ಕಾಂಗ್ರೆಸ್‌ ಮುಖಂಡ ಕೆ.ಎಚ್‌.ಮುನಿಯಪ್ಪ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದರು.

ಚನ್ನಗಿರಿಗೆ ತೆರಳುತ್ತಿದ್ದ ಅವರು ಭಾನುವಾರ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ರೈಲ್ವೆ ಖಾತೆ ಸಚಿವರಾಗಿದ್ದ ಸಂದರ್ಭದಲ್ಲಿ ಮಂಜೂರಾಗಿದ್ದ ಯೋಜನೆಗಳನ್ನು ನೆನಪಿಸಿಕೊಂಡರು.

‘ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಆಪರೇಷನ್‌ ಕಮಲದಲ್ಲಿ ಮುಳುಗಿದೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ರೈಲ್ವೆ ಯೋಜನೆಗಳು ಸಾಕಾರಗೊಂಡರೆ ರಾಜ್ಯದ ಆರ್ಥಿಕತೆಗೆ ಅನುಕೂಲವಾಗುತ್ತದೆ. ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ’ ಎಂದು ಆಗ್ರಹಿಸಿದರು.

‘ಪ್ರಯಾಣ ವೆಚ್ಚ, ಸಮಯದ ಉಳಿತಾಯದ ದೃಷ್ಟಿಯಿಂದ ಯುಪಿಎ ಸರ್ಕಾರ ರೈಲ್ವೆ ಸಂಪರ್ಕಜಾಲ ಅಭಿವೃದ್ಧಿಪಡಿಸಿತು. ರೈತರು ಬೆಳೆದ ಉತ್ಪನ್ನಗಳ ಸಾಗಣೆಗೂ ಇದು ನೆರವಾಗುತ್ತದೆ. ಪೆಟ್ರೋಲ್‌, ಡೀಸೆಲ್‌ ಬಳಕೆ ಕುಗ್ಗಿ, ಪರಿಸರ ಮಾಲಿನ್ಯ ಪ್ರಮಾಣ ಕಡಿಮೆಯಾಗುತ್ತದೆ. 2010ರಿಂದ 12ರವರೆಗೆ ಹಲವು ರೈಲ್ವೆ ಯೋಜನೆಗಳು ರೂಪುಗೊಂಡವು. ಆಗ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಭೂಮಿ ಹಾಗೂ ಅರ್ಧ ವೆಚ್ಚ ಭರಿಸುವ ಆಶ್ವಾಸನೆ ನೀಡಿದ್ದರು’ ಎಂದರು.

‘ದಾವಣಗೆರೆ– ಚಿತ್ರದುರ್ಗ– ತುಮಕೂರು ನೇರ ರೈಲು ಮಾರ್ಗಕ್ಕೆ ಅನುಮೋದನೆ ದೊರೆತು ದಶಕ ಸಮೀಪಿಸುತ್ತಿದೆ. ಬಿಹಾರ, ಉತ್ತರಪ್ರದೇಶ, ತಮಿಳುನಾಡು, ಕೇರಳ, ರಾಜಸ್ಥಾನ, ಮಧ್ಯಪ್ರದೇಶಗಳಲ್ಲಿಯೂ ಅನೇಕ ರೈಲ್ವೆ ಯೋಜನೆಗಳನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ರೂಪಿಸಲಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರೈಲ್ವೆ ಜಾಲ ನಿರೀಕ್ಷಿತ ಸುಧಾರಣೆ ಕಂಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಜನಾದೇಶವನ್ನು ದುರುಪಯೋಗ ಮಾಡಿಕೊಂಡಿರುವ ಬಿಜೆಪಿ, ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದೆ. ಮೈಕೊರೆಯುವ ಚಳಿಯಲ್ಲಿ ಪಂಜಾಬ್‌ ಮತ್ತು ಹರಿಯಾಣ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಮೆಚ್ಚಿಸುವ ಉದ್ದೇಶದಿಂದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ರೈತರ ವಿರುದ್ಧ ಆರೋಪ ಮಾಡಿದ್ದಾರೆ’ ಎಂದು ಕಿಡಿಕಾರಿದರು.

‘ಕೈಗಾರಿಕೋದ್ಯಮಿಗಳ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಮೀನಮೇಷ ಎಣಿಸುತ್ತಿದೆ. ಮಾತುಕತೆ ನಡೆಸಿ ರೈತರ ಸಮಸ್ಯೆ ಇತ್ಯರ್ಥ ಮಾಡಲು ಹಿಂದೇಟು ಹಾಕುತ್ತಿದೆ. ಇದೇ ಧೋರಣೆ ಮುಂದುವರಿದರೆ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮ ನಡೆಸಲಿದೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕೆ.ಪಿ.ಸಂಪತ್, ಕೃಷ್ಣಮೂರ್ತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು