ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Published 29 ಆಗಸ್ಟ್ 2024, 15:55 IST
Last Updated 29 ಆಗಸ್ಟ್ 2024, 15:55 IST
ಅಕ್ಷರ ಗಾತ್ರ

ಹೊಸದುರ್ಗ: ಪಟ್ಟಣದ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪು ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಎಲ್.ಆರ್.ವೈದ್ಯನಾಥನ್ ವರದಿಯಂತೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಬೇಕು. ಅವರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೂ ಕಲ್ಪಿಸಬೇಕು. ಅವರನ್ನೂ ಮುಖ್ಯೋಪಾಧ್ಯಾಯ ಹುದ್ದೆಗೆ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಹೊಸದುರ್ಗದಲ್ಲಿ 130 ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಕೇವಲ 11 ಜನ ದೈಹಿಕ ಶಿಕ್ಷಣ ಶಿಕ್ಷಕರಿದ್ದಾರೆ. ಎಲ್ಲಾ ಶಾಲೆಗಳಲ್ಲಿ ದೈಹಿಕ ಶಿಕ್ಷಣದ ಪಠ್ಯ ಪುಸ್ತಕಗಳಿದ್ದು, ಶಿಕ್ಷಕರಿಲ್ಲ. ಎಷ್ಟೋ ಶಾಲೆಗಳಲ್ಲಿ ಬೋಧನೆಯೇ ನಡೆಯುತ್ತಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದೈಹಿಕ ಶಿಕ್ಷಣವನ್ನು ಸೇರಿಸಬೇಕು. ಸುಮಾರು ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ನಡೆದಿಲ್ಲ. ಬಿ.ಪಿ.ಇಡಿ ಮತ್ತು ಡಿ.ಪಿ.ಇಡಿ ಮುಗಿಸಿರುವವರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಸರ್ಕಾರ ಕೂಡಲೇ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಆದೇಶ ನೀಡಬೇಕು ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಂತೇಶ್ ಒತ್ತಾಯಿಸಿದರು.

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಬಿಇಒ ಸೈಯದ್ ಮೋಸಿನ್ ತಿಳಿಸಿದರು.

ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಕಾರ್ಯದರ್ಶಿ ಮಲ್ಲಿಕಾರ್ಜುನ್, ಸಂಘಟನಾ ಕಾರ್ಯದರ್ಶಿ ದೇವರಾಜ್, ರವಿಕುಮಾರ್, ಶಿವಕುಮಾರ್, ಗೌರವಾಧ್ಯಕ್ಷ ದಿವಾಕರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT