ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಕಾಲೇಜಿಗೆ 92 ಎಕರೆ ಜಾಗ ಹಸ್ತಾಂತರ

ದಿಶಾ ಸಭೆಯಲ್ಲಿ ಸಚಿವ ಎ. ನಾರಾಯಣಸ್ವಾಮಿ ಸೂಚನೆ
Last Updated 29 ಡಿಸೆಂಬರ್ 2022, 5:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸಾಕಷ್ಟು ವಿಳಂಬವಾಗಿದೆ. ಕೂಡಲೇ ತಾಲ್ಲೂಕಿನ ಇಂಗಳದಾಳ್‌ ಬಳಿಯ 92 ಎಕರೆ ಜಾಗವನ್ನು ಕಾಲೇಜಿಗೆ ಹಸ್ತಾಂತರಿಸುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಜಿಲ್ಲಾಧಿಕಾರಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ) ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು ಎಂಬುದು ಜಿಲ್ಲೆಯ ಬಹಳ ವರ್ಷಗಳ ಬೇಡಿಕೆಯಾಗಿದೆ. ಕಾಲೇಜು ನಿರ್ಮಾಣದ ವಿಚಾರದಲ್ಲಿ ಏಕೆ ವಿಳಂಬವಾಗುತ್ತಿದೆ’ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್‌. ಬಸವರಾಜ್ ಅವರನ್ನು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಸವರಾಜ್‌, ‘ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸಂಬಂಧಿಸಿ ಈಗಾಗಲೇ ವಿಶೇಷಾಧಿಕಾರಿಯನ್ನು ನೇಮಿಸಲಾಗಿದೆ. ಕಾಲೇಜು ಮತ್ತು ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ’ ಎಂದು ಹೇಳಿದರು.

‘ಇಂಗಳದಾಳ್‌ ಬಳಿಯ ಡಿಮ್ಡ್‌ ಅರಣ್ಯದಲ್ಲಿ 92 ಎಕರೆ ಡಿನೋಟಿಫೈ ಆಗಿರುವ ಜಮೀನು ಇದೆ. ಈ ಜಾಗವನ್ನು ಕಾಲೇಜಿಗೆ ಹಸ್ತಾಂತರಿಸಲು ಅಗತ್ಯ ಕ್ರಮವಹಿಸಬೇಕು. ಜತೆಗೆ ತಾತ್ಕಾಲಿಕವಾಗಿ ಕಾಲೇಜು ಪ್ರಾರಂಭಿಸಲು ಸೂಕ್ತ ಸ್ಥಳ ನಿಗದಿ ಮಾಡಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಹಾದುಹೋಗಿರುವ ಎರಡು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪದೇ ಪದೇ ಅಪಘಾತವಾಗುವ ಸ್ಥಳಗಳನ್ನು ಕಪ್ಪುಚುಕ್ಕೆ ವಲಯಗಳನ್ನಾಗಿ ಪೊಲೀಸ್‌ ಇಲಾಖೆ ಗುರುತಿಸಿದೆ. ಅದೇ ರೀತಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೂ ಇಂತಹ ವಲಯಗಳನ್ನು ಗುರುತಿಸಿದ್ದಾರೆ. ಆದರೆ ಈ ಸಂಖ್ಯೆಯಲ್ಲಿ ವ್ಯತ್ಯಾಸವಿದೆ’ ಎಂದರು.

‘ಪೊಲೀಸ್‌ ಇಲಾಖೆಯು ಅಪಘಾತಗಳ ಸಂಖ್ಯೆಗಳ ಆಧಾರದಲ್ಲಿ ಗುರುತಿಸಿರುವ ಕಪ್ಪುಚುಕ್ಕೆ ವಲಯಗಳಲ್ಲಿ ಅಪಘಾತ ತಡೆಗೆ ಕೆಲವು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಈ ಹಿಂದೆಯೂ ಕೂಡ ಸೂಚಿಸಲಾಗಿತ್ತು. ಅಪಘಾತವಾಗಿ ಜನರ ಪ್ರಾಣ ಹೋದರೆ ತಂದುಕೊಡಲು ಸಾಧ್ಯವೇ’ ಎಂದು ಸಚಿವರು ಪ್ರಶ್ನಿಸಿದರು.

‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಇದುವರೆಗೂ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ. ಕೆಲವೆಡೆ ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ಕಿಲೋಮೀಟರ್‌ಗಟ್ಟಲೆ ಸುತ್ತಿಬಳಸಿ ಹೋಗುವ ಪರಿಸ್ಥಿತಿ ಇದೆ. ಹೀಗಾಗಿ ಅಗತ್ಯ ಅಂಡರ್‌ಪಾಸ್‌ಗಳು, ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ಸೂಚನೆ ನೀಡಲಾಗಿತ್ತು. ಜತೆಗೆ ಬೆಂಗಳೂರು ಮತ್ತು ದಾವಣಗೆರೆಯಿಂದ ಚಿತ್ರದುರ್ಗ ನಗರಕ್ಕೆ ಪ್ರವೇಶ ಮಾಡಬೇಕಾದ ಕಡೆ ಹೆದ್ದಾರಿಯಲ್ಲಿ ಸೂಕ್ತ ಮಾರ್ಗಸೂಚಿ ಫಲಕವನ್ನು ಅಳವಡಿಸದೇ ಇರುವುದು ಸಮಸ್ಯೆ ಸೃಷ್ಟಿಸಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಪಘಾತಗಳನ್ನು ತಡೆಗಟ್ಟಲು ಕಪ್ಪುಚುಕ್ಕೆ ವಲಯದಲ್ಲಿ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

‘ಅಜ್ಜಂಪುರ ವೈಜಂಕ್ಷನ್‌ ಬಳಿ 1.9 ಕಿ.ಮೀ ಸ್ಥಗಿತವಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯ ಕೆಲಸ ನಿರ್ವಹಿಸಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು. ಕೆಲವರು ಭೂ ಪರಿಹಾರ ಹಣ ಪಡೆದರೂ ನ್ಯಾಯಾಲಯದ ಮೊರೆಹೋಗಿದ್ದಾರೆ. ಇದು ಗಂಭೀರ ವಿಷಯವಾಗಿದ್ದು, ಸಮಸ್ಯೆ ಇತ್ಯರ್ಥಕ್ಕೆ ಆ ಭಾಗದ ಜನರು ಕೇಳಿದಷ್ಟು ಹಣ ನೀಡಲು ನಾವು ಸಿದ್ಧರಿದ್ದೇವೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ ಆದರ್ಶ ಗ್ರಾಮ ಯೋಜನೆಯಡಿ 97 ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಂಡಿವೆ. ಈ ಗ್ರಾಮಗಳನ್ನು ಗುಡಿಸಲು ಮುಕ್ತವಾಗಿಸಿ ಮಾದರಿ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 10.40 ಲಕ್ಷ ಜನರು ಬೂಸ್ಟರ್‌ ಡೋಸ್‌ ಪಡೆಯಲು ಅರ್ಹರಾಗಿದ್ದು, ವಿಶೇಷ ಶಿಬಿರ ಆಯೋಜಿಸಿ, ಅರ್ಹರೆಲ್ಲರಿಗೂ ಲಸಿಕೆ ನೀಡಿಕೆಗೆ ಕ್ರಮ ವಹಿಸಬೇಕು ಎಂದು ಸಚಿವರು ಡಿಎಚ್‌ಒಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್‌ಒ ಡಾ.ರಂಗನಾಥ್‌, ‘ಬೂಸ್ಟರ್‌ ಡೋಸ್‌ ಗುರಿ ಪೂರ್ಣಗೊಳಿಸಲು ಈಗಾಗಲೇ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. 37 ಸಾವಿರ ಡೋಸ್‌ ಕೋವ್ಯಾಕ್ಸಿನ್‌ ದಾಸ್ತಾನು ಇದೆ. ಕೋವಿಶೀಲ್ಡ್‌ ಶೀಘ್ರದಲ್ಲಿ ಸರಬರಾಜು ಆಗಲಿದೆ’ ಎಂದರು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಎಸ್‌. ದಿವಾಕರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ್‌, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸಿ.ಎಸ್‌. ಗಾಯತ್ರಿ ಇದ್ದರು.

ಭೂಸ್ವಾಧೀನ ಪ್ರಕ್ರಿಯೆಗೆ ವೇಗ

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗಿದೆ. ದಾವಣಗೆರೆಯಿಂದ ಭರಮಸಾಗರದವರೆಗೆ ನೇರ ರೈಲು ಮಾರ್ಗಕ್ಕೆ ಅಗತ್ಯವಿರುವ ಭೂಮಿ ಹಸ್ತಾಂತರ ಪ್ರಕ್ರಿಯೆ ಮುಗಿದಿದ್ದು, ಈಗಾಗಲೇ ಟೆಂಡರ್‌ ಪ್ರಕ್ರಿಯೆ ನಡೆದಿದೆ.

ಟೆಂಡರ್‌ ಪ್ರಕ್ರಿಯೆ ನಂತರ ಕಾಮಗಾರಿ ಪ್ರಾರಂಭವಾಗಲಿದೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ₹131 ಕೋಟಿ ಅವಶ್ಯಕತೆ ಇದೆ. ಈ ಪೈಕಿ ಈಗಾಗಲೇ ₹ 71 ಕೋಟಿ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT