ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ಪರ ಘೋಷಣೆ: ಗಡಿಪಾರಿಗೆ ಆಗ್ರಹ

Last Updated 21 ಫೆಬ್ರುವರಿ 2020, 20:15 IST
ಅಕ್ಷರ ಗಾತ್ರ

ಚಿತ್ರದುರ್ಗ: ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್‌ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಕುಮಾರ್‌ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ದೇಶದ್ರೋಹಿ ಕೃತ್ಯ ಎಸಗಿದ ಯುವತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಕುಮ್ಮಕ್ಕು ನೀಡಿದ ಶಕ್ತಿಗಳ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನಾ ಸಭೆಯಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂಬ ಘೋಷಣೆಯನ್ನು ಅಮೂಲ್ಯ ಕೂಗಿದ್ದರು.

ಅಮೂಲ್ಯ ವರ್ತನೆಯನ್ನು ವೇದಿಕೆ ತೀವ್ರವಾಗಿ ಖಂಡಿಸುತ್ತದೆ. ಭಾರತದಲ್ಲಿ ವಾಸವಿದ್ದು, ದೇಶದ ಸೌಲಭ್ಯ ಪಡೆದು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ದೇಶದ್ರೋಹದ ಕೃತ್ಯ. ಶತ್ರು ರಾಷ್ಟ್ರದ ಪರ ಮಾತನಾಡುವುದು ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಶತ್ರು ರಾಷ್ಟ್ರದ ಉಗ್ರರು ಅಕ್ರಮವಾಗಿ ದೇಶದೊಳಗೆ ನುಸುಳುವುದನ್ನು ತಡೆಯುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಿದ ಶಕ್ತಿಗಳು ದೇಶದ್ರೋಹಕ್ಕೆ ಕುಮ್ಮಕ್ಕು ನೀಡುತ್ತಿವೆ. ಇಂತವರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಇದ್ದರೆ ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಕೆ.ಮಹಂತೇಶ್‌ ಕಳವಳ ವ್ಯಕ್ತಪಡಿಸಿದರು.

ವೇದಿಕೆ ಮುಖಂಡರಾದ ತಿಪ್ಪೇಸ್ವಾಮಿ, ದಯಾನಂದ, ರಾಘವೇಂದ್ರ, ಮಾರುತಿ ಸಿರಿಗೆರೆ, ನಾಗರಾಜು, ಓಬಳೇಶ್ ಯಾದವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT