ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಕೆ ಹರಿಪ್ರಸಾದ್‌ರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿ: ಪ್ರಣಾವಾನಂದ ಸ್ವಾಮೀಜಿ ಒತ್ತಾಯ

Published 26 ಜೂನ್ 2023, 11:44 IST
Last Updated 26 ಜೂನ್ 2023, 11:44 IST
ಅಕ್ಷರ ಗಾತ್ರ

ಚಿತ್ರದುರ್ಗ: ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದರೆ ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣಾವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.

‘34 ವರ್ಷಗಳಿಂದ ರಾಜಕಾರಣದಲ್ಲಿರುವ ಹರಿಪ್ರಸಾದ್‌ ಅವರು ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿದ್ದಾರೆ. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಜತೆ ನಿಕಟ ಸಂಪರ್ಕ ಹೊಂದಿದ್ದ ಅವರು ಭ್ರಷ್ಟಾಚಾರ ರಹಿತ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಹೊರಗೆ ಇಟ್ಟುರುವುದು ಸಮುದಾಯದಲ್ಲಿ ಬೇಸರ ಮೂಡಿಸಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಈಡಿಗ, ಬಿಲ್ಲವ ಮತ್ತು ನಾಮದಾರಿ ಎಂಬ ಹೆಸರಿನಿಂದ ಕರೆಯುವ ಸಮುದಾಯ ದಕ್ಷಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಜನಸಂಖ್ಯೆ ಹೊಂದಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಮತಗಳೇ ನಿರ್ಣಾಯಕ. ಕಾಂಗ್ರೆಸ್‌ ಪ್ರತಿನಿಧಿಸುತ್ತಿರುವ ನಾಲ್ವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಕಲ್ಪಿಸಲಾಗಿದೆ. ಹರಿಪ್ರಸಾದ್‌ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ರೂಪಿಸಲಾಗಿದೆ’ ಎಂದು ಆರೋಪಿಸಿದರು.

‘ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಬಳಿಕ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಡಿಮೆಯಾಗಿದೆ. ಕಾಂಗ್ರೆಸ್‌, ಬಿಜೆಪಿ ಸೇರಿ ಯಾವುದೇ ರಾಜಕೀಯ ಪಕ್ಷದಲ್ಲಿ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ. ಇದೇ ರೀತಿಯ ನಿರ್ಲಕ್ಷ್ಯ ಮುಂದುವರಿದರೆ ಸಮುದಾಯ ಪ್ರತ್ಯೇಕ ರಾಜಕೀಯ ಪಕ್ಷ ರಚಿಸಿಕೊಳ್ಳಲಿದೆ. ಈ ಬಗ್ಗೆ ಚರ್ಚಿಸಲು ಚಿಂತನ–ಮಂಥನ ಶಿಬಿರ ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

‘ಸಮುದಾಯದ ಕುಲಕಸುಬಾಗಿದ್ದ ಸೇಂದಿಯನ್ನು 2004ರಲ್ಲಿ ನಿಷೇಧಿಸಲಾಯಿತು. ಸೇಂದಿ ಅಮಲು ಪದಾರ್ಥವಲ್ಲ, ಅದೊಂದು ಆರೋಗ್ಯಕರ ಪಾನೀಯ. ಸಮುದಾಯಕ್ಕೆ ಪರ್ಯಾಯ ವ್ಯವಸ್ಥೆ ಮಾಡದೇ ಸೇಂದಿ ನಿಷೇಧ ಮಾಡಿದ್ದು ತಪ್ಪು. ಕೇರಳ, ಆಂಧ್ರಪ್ರದೇಶದ, ಗುಜರಾತ್ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಇದು ಕಾನೂನು ಬದ್ಧವಾಗಿದೆ. ಕುಲಕಸುಬು ಮುಂದುವರಿಸಲು ಸರ್ಕಾರ ಅವಕಾಶ ಮಾಡಿಕೊಡಬೇಕು’ ಎಂದು ಕೋರಿದರು.

ಸಿಗಂಧೂರು ಚೌಡೇಶ್ವರಿ ದೇಗುಲದಲ್ಲಿ ಸೃಷ್ಟಿಯಾಗಿರುವ ಗೊಂದಲ ದೂರಮಾಡಿ ಸುಗಮ ಆಡಳಿತಕ್ಕೆ ಅವಕಾಶ ಕಲ್ಪಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಮುದಾಯದ ಇಬ್ಬರಿಗೆ ಟಿಕೆಟ್‌ ನೀಡಬೇಕು.
ಪ್ರಣವಾನಂದ ಸ್ವಾಮೀಜಿ, ಅಧ್ಯಕ್ಷರು ರಾಷ್ಟ್ರೀಯ ಈಡಿಗ ಮಹಾಮಂಡಳಿ

‘ಈಡಿಗ ಸಮುದಾಯ ಕಾಡಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಅರ್ಹತೆ ಹೊಂದಿದೆ. ಕುಲಶಾಸ್ತ್ರೀಯ ಅಧ್ಯಯನವನ್ನು ಕೂಡಲೇ ಪ್ರಾರಂಭಿಸಬೇಕು. ಪರಿಶಿಷ್ಟ ಪಂಗಡ ಸೌಲಭ್ಯಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷ, ಸದಸ್ಯರನ್ನು ನೇಮಕ ಮಾಡಿ ₹ 250 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಈಡಿಗ ಮಹಾಮಂಡಳಿ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪೇಶ್‌, ಉಪಾಧ್ಯಕ್ಷ ಶ್ರೀನಿವಾಸ್‌, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ, ಗಾಯತ್ರಿ, ಸಂದೀಪ್‌, ಮನು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT