ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ
Last Updated 2 ಜುಲೈ 2019, 15:33 IST
ಅಕ್ಷರ ಗಾತ್ರ

ಚಿತ್ರದುರ್ಗ: ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಚಿತ್ರದುರ್ಗ ವೆಲ್‌ಫೇರ್‌ ಅಸೋಸಿಯೇಷನ್‌ ನೇತೃತ್ವದಲ್ಲಿ ಮುಸ್ಲಿಮರು ಸೋಮವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹೊಳಲ್ಕೆರೆ ರಸ್ತೆಯ ಮುಸ್ಲಿಂ ಹಾಸ್ಟೆಲ್‌ ಸಮೀಪದಿಂದ ಹೊರಟ ಮೆರವಣಿಗೆ ಬಿ.ಡಿ. ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಹೊನ್ನಾಳಿ ತಾಲ್ಲೂಕಿನ ದಯಾನತ್‌ ಖಾನ್‌ ಹಾಗೂ ಜಾರ್ಖಂಡ್‌ನ ತಬ್ರೀಜ್‌ ಅನ್ಸಾರಿ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಹೊನ್ನಾಳಿಯ ದಯಾನತ್‌ ಖಾನ್‌ ವಾಟ್ಸ್‌ಆ್ಯಪ್‌ಗೆ ಧರ್ಮದ ಭಾವುಟದ ಚಿತ್ರ ಹಾಕಿಕೊಂಡಿದ್ದರು. ಇದನ್ನು ಪ್ರಶ್ನಿಸಿದ ಕೆಲವರು ಹಲ್ಲೆ ನಡೆಸಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಪ್ರೇಮ ಪ್ರಕರಣದ ಕಥೆ ಕಟ್ಟಿ ಅಪಪ್ರಚಾರ ಮಾಡಲಾಗುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಪೊಲೀಸರು ನೆಪ ಮಾತ್ರಕ್ಕೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನವೂ ನಡೆಯುತ್ತಿದೆ. ದಯಾನತ್‌ ಕುಟುಂಬ ಆರೋಪಿಗಳ ಪಟ್ಟಿ ಒದಗಿಸಿದರೂ ಪೊಲೀಸರು ಕಾನೂನು ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿದ್ದಾರೆ. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಹೊನ್ನಾಳಿ ಚಲೋ ಚಳವಳಿ ಆಯೋಜಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಲಿತರಿಗೂ ಅಭದ್ರತೆಯ ಆತಂಕ ಕಾಡುತ್ತಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಬಜರಂಗದಳ ತನ್ನ ಕಾರ್ಯಕರ್ತರಿಗೆ ಚಿತ್ರದುರ್ಗದಲ್ಲಿ ತ್ರಿಶೂಲ ವಿತರಿಸಿ ಹಿಂಸೆಗೆ ಪ್ರೇರಣೆ ನೀಡಿದೆ. ಇಂಥವರ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.

ಚಿತ್ರದುರ್ಗ ವೆಲ್‍ಫೇರ್ ಅಸೋಸಿಯೇಷನ್ ಅಧ್ಯಕ್ಷ ಶೇಖ್‍ ನಯಾಜ್, ಕಾರ್ಯದರ್ಶಿ ಮೊಹಮ್ಮದ್ ಅಶ್ರಫ್, ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ಶ್ರೀನಿವಾಸ್, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಆಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT