ಶುಕ್ರವಾರ, ನವೆಂಬರ್ 22, 2019
19 °C
ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

ವಸತಿ, ಜಾತಿ ಪ್ರಮಾಣ ಪತ್ರಕ್ಕೆ ಆಗ್ರಹ

Published:
Updated:
Prajavani

ಚಿತ್ರದುರ್ಗ: ಅಲೆಮಾರಿ, ಅರೆ ಅಲೆಮಾರಿ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಾಲೊನಿ ನಿವಾಸಿಗಳಿಗೆ ವಸತಿ ಸೌಲಭ್ಯ, ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿದರು. ಕಾಲೊನಿ ಜನತೆಗೆ ಮೂಲಸೌಲಭ್ಯ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲೆಯ ಚಳ್ಳಕೆರೆ, ಹೊಸದುರ್ಗ, ಹಿರಿಯೂರು, ಮೊಳಕಾಲ್ಮುರು, ಚಿತ್ರದುರ್ಗದಲ್ಲಿ ವಾಸವಿರುವ ಅಲೆಮಾರಿ, ಶಿಳ್ಯಾಕ್ಯಾತರು, ಮುಂಡಾಲರು, ದೊಂಬಿದಾಸರು, ಚನ್ನದಾಸರು, ಕಿನ್ನರಿಜೋಗಿ, ಜೋಗಿ ಸೇರಿ ಇತರೆ ಅಲೆಮಾರಿ ಸಮುದಾಯಕ್ಕೆ ಶತಮಾನಗಳಿಂದ ಮೂಲಸೌಕರ್ಯ ಇಲ್ಲ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಈ ಸಮುದಾಯ ವಾಸವಿರುವ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ. ರಸ್ತೆ, ಬೀದಿ ದೀಪಗಳಿಲ್ಲ, ವಸತಿ ಸೌಕರ್ಯವೂ ಇಲ್ಲ. ಅಲ್ಲದೆ, ಜಾತಿ ಪ್ರಮಾಣ ಪತ್ರ ಇಲ್ಲದೇ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೂ ಧಕ್ಕೆ ಉಂಟಾಗುತ್ತಿದೆ. ಸರ್ಕಾರದ ಪರವಾಗಿ ಭೇಟಿ ನೀಡುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರಂತರವಾಗಿ ಭರವಸೆ ನೀಡುತ್ತಾ ಬಂದಿದ್ದಾರೆಯೇ ಹೊರತು ಯಾವುದನ್ನೂ ಈಡೇರಿಸಿಲ್ಲ ಎಂದು ದೂರಿದರು.

ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿ ನಿಯಮಿತವಾಗಿ ಸಭೆ ನಡೆಸಬೇಕು. ನಿವೇಶನ, ವಸತಿ ಸೌಲಭ್ಯವನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸುಡಗಾಡು ಸಿದ್ಧರು, ಅಲೆಮಾರಿ ಜನಾಂಗಕ್ಕೆ ಸಾಮಾಜಿಕ ಅಧ್ಯಯನದ ಪ್ರಕಾರ ಆಯಾ ಜಾತಿ-ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ವಿತರಿಸಬೇಕು. ಕಾಲೊನಿಗಳಿಗೆ ಕುಡಿಯುವ ನೀರು, ವಿದ್ಯುತ್ ದೀಪ ಸೇರಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾಡಳಿತ ಸ್ಪಂದಿಸದಿದ್ದರೆ, ಸಮುದಾಯಗಳನ್ನು ಒಟ್ಟುಗೂಡಿಸಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಅಲೆಮಾರಿ, ಅರೆಅಲೆಮಾರಿ, ಬುಡಕಟ್ಟು, ಪರಿಶಿಷ್ಟ ಜಾತಿ, ಪಂಗಡ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ. ನಾಗರಾಜ್, ವಿಮುಕ್ತಿ ವಿದ್ಯಾಸಂಸ್ಥೆ ನಿರ್ದೇಶಕ ಆರ್. ವಿಶ್ವಸಾಗರ್, ಶಿಳ್ಯಾಕ್ಯಾತರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‌ಕುಮಾರ್, ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಗುರುಮೂರ್ತಿ, ಚನ್ನದಾಸರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಂಗಪ್ಪ ಇದ್ದರು.

ಪ್ರತಿಕ್ರಿಯಿಸಿ (+)