ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗ್ರೀವಾಜ್ಞೆ ಹಿಂಪಡೆಯಿರಿ: ಒಪಿಡಿ ತೆರೆಯಿರಿ

ಕನ್ನಡ ಪರ ಸಂಘಟನೆಗಳ ಪ್ರತ್ಯೇಕ ಪ್ರತಿಭಟನೆ
Last Updated 25 ಸೆಪ್ಟೆಂಬರ್ 2020, 16:22 IST
ಅಕ್ಷರ ಗಾತ್ರ

ಚಿತ್ರದುರ್ಗ: ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ (ಒಪಿಡಿ) ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಶುಕ್ರವಾರಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಆಸ್ಪತ್ರೆ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿದ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾ ಶಸ್ತ್ರಚಿಕಿತ್ಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು. ಒಪಿಡಿ ತೆರೆಯಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕು. ಇಲಾಖೆ ಸೇವೆ ಖಾಸಗೀಕರಣ ಸ್ಥಗಿತಗೊಳಿಸಬೇಕು. ಮಹಿಳೆಯರು, ಗರ್ಭಿಣಿಯರು ಹಾಗೂ ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು. ಸ್ಕ್ಯಾನಿಂಗ್‌ಗೆ ಹೊರಗಡೆ ಬರೆದುಕೊಡಬಾರದು ಎಂದು ಆಗ್ರಹಿಸಿದರು.

‘ಒಪಿಡಿ ಬಂದ್ ಮಾಡಿರುವ ಕಾರಣ ಜಿಲ್ಲಾ ಆಸ್ಪತ್ರೆಗೆ ನಿತ್ಯ ಬರುವಂಥ ನೂರಾರು ಬಡ ರೋಗಿಗಳಿಗೆ ತೊಂದರೆ ಆಗುತ್ತಿದೆ. ಕೋವಿಡ್ ನೆಪವೊಡ್ಡಿ ಸ್ಥಗಿತಗೊಳಿಸಿರುವುದು ಎಷ್ಟು ಸರಿ’ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್ ಪ್ರಶ್ನಿಸಿದರು.

ಕಾರ್ಪೊರೇಟ್‌ ಕಂಪನಿಗೆ ಮಣೆ:ಭೂ-ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಖಾಸಗಿಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಿರುವನ್ನು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದರು. ಸುಗ್ರೀವಾಜ್ಞೆ ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

‘ಬಂಡವಾಳಶಾಹಿ ಕಾರ್ಪೊರೇಟ್‌ ಕಂಪನಿಗಳಿಗೆ ಮಣೆ ಹಾಕಲು ಸರ್ಕಾರಗಳು ಮುಂದಾಗಿವೆ. ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಕುರಿತು ಕಾಳಜಿ ಇಲ್ಲವಾಗಿದೆ. ಕೃಷಿ ಕ್ಷೇತ್ರ ನಾಶಗೊಳಿಸಿ, ಆಹಾರ ಭದ್ರತೆಗಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಸುತ್ತಿವೆ’ ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT